ಹಾವೇರಿ: ಇಂದಿಗೂ ಅನೇಕರಿಗೆ ಮಕ್ಕಳ ಕಾನೂನುಗಳ ಬಗ್ಗೆ ಅರಿವಿಲ್ಲ. ಹೀಗಾಗಿ ಜನರ ಬಳಿ ತೆರಳಿ ಕಾನೂನುಗಳ ಬಗ್ಗೆ ತಿಳಿವಳಿಕೆ ನೀಡಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ವೈ.ಮರಿಸ್ವಾಮಿ ಹೇಳಿದರು.
ಗುರುವಾರ ನಗರದ ಎಸ್‌ಜೆಎಂ ಪದವಿ ಪೂರ್ವ ಕಾಲೇಜನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ(1098) ಕೇಂದ್ರ, ಚೈಲ್ಡ್‌ಲೈನ್ ಇಂಡಿಯಾ ಫೌಂಡೇಶನ್ ಮುಂಬೈ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಆಶ್ರಯದಲ್ಲಿ ಆಯೋಜಿಸಲಾಗಿದ್ದ ‘ಚೈಲ್ಡ್‌ಲೈನ್ ಸೇ ದೋಸ್ತಿ ವೀಕ್’ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ಹಕ್ಕುಗಳ ರಕ್ಷಣಾ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಉಚಿತ ಕಡ್ಡಾಯ ಶಿಕ್ಷಣ ಕಾಯ್ದೆಗಳ ಕುರಿತು ಸಮಾಜದಲ್ಲಿ ನಿರ್ಲಕ್ಷ್ಯಕ್ಕೊಳಗಾದ ಬುಡಕಟ್ಟು ಹಾಗೂ ಅಲೆಮಾರಿ ಜನಾಂಗಗಳಿಗೆ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ ಎಂದರು.
1970ರಲ್ಲಿ ಭಿಕ್ಷಾಟನೆ ನಿಷೇಧ ಕಾಯ್ದೆ ಜಾರಿಗೆ ಬಂದಿದ್ದರೂ ಸಹ ರಾಜ್ಯದಲ್ಲಿ ಲಕ್ಷಾಂತರ ಮಕ್ಕಳು ಭಿಕ್ಷಾಟನೆ ಪ್ರವೃತ್ತಿಯಲ್ಲಿ ತೊಡಗಿಕೊಂಡಿದ್ದಾರೆ. ಭಿಕ್ಷಾಟನೆ ಸಮಾಜದಲ್ಲಿ ಅತ್ಯಂತ ಕೀಳು ಪ್ರವೃತ್ತಿಯಾಗಿದೆ. ಬುಡಕಟ್ಟು ಹಾಗೂ ಅಲೆಮಾರಿ ಜನಾಂಗದವರು ಕಾಯಂ ವಿಳಾಸವಿಲ್ಲದೆ ಊರಿಂದ ಊರಿಗೆ ವಲಸೆ ಹೋಗುವರು. ಇಂತಹ ಸಂದರ್ಭದಲ್ಲಿ ಅವರ ಮಕ್ಕಳು ಭಿಕ್ಷಾಟನೆಗಿಳಿಯುವುದು ಸಾಮಾನ್ಯವಾಗಿದೆ. ಈ ಸಮಾಜದವರಿಗೆ ಅರಿವು ಮೂಡಿಸಿ ಹೊಸ ಬದುಕು ಕಟ್ಟಿಕೊಡಬೇಕು ಹಾಗೂ ಶಿಕ್ಷಣ ಕೊಡಿಸುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕು ಎಂದರು. ಬಾಲ್ಯ ವಿವಾಹದಿಂದ ಅನೇಕ ಕಷ್ಟಗಳನ್ನು ಎದುರಿಸಬೇಕಾಗುತ್ತದೆ ಎಂಬ ಕುರಿತು ಜಾಗೃತಿ ಮೂಡಿಸಬೇಕು. ಬಾಲ್ಯ ವಿವಾಹ ತಡೆಯುವುದು ಕೇವಲ ಒಂದು ಇಲಾಖೆಯ ಕೆಲಸವಲ್ಲ; ಎಲ್ಲ ಇಲಾಖೆಗಳ ಜವಾಬ್ದಾರಿಯಾಗಿದೆ ಹಾಗೂ ಸಾರ್ವಜನಿಕ ಸಹಭಾಗಿತ್ವ ಅತ್ಯಂತ ಮುಖ್ಯವಾಗಿದೆ. ಬಾಲ್ಯ ವಿವಾಹ ನಡೆಯುತ್ತಿರುವ ಕುರಿತು ಮಕ್ಕಳ ಸಹಾಯವಾಣಿ 1098ಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕರೆಗಳು ಬರುತ್ತಿವೆ. ನಿಮ್ಮ ಅಕ್ಕಪಕ್ಕದಲ್ಲಿ ಬಾಲ್ಯವಿವಾಹಗಳು ಕಂಡುಬದಲ್ಲಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸುವ ಮೂಲಕ ಸುಭದ್ರ ಸಮಾಜ ನಿರ್ಮಾಣಕ್ಕೆ ಎಲ್ಲರೂ ನೆರವಾಗಬೇಕು ಎಂದರು.
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಯಲು ಕಾಯ್ದೆ ಜಾರಿಗೆ ತರಲಾಗಿದೆ. ಈ ಕಾಯ್ದೆ ಕುರಿತು ಜನರಿಗೆ ಅರಿವು ಮೂಡಿಸಬೇಕು. ಉಚಿತ ಕಡ್ಡಾಯ ಶಿಕ್ಷಣ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸವಾಗಬೇಕು. ಆಯೋಗ ಸದಾ ಕಾಲ ನಿಮ್ಮ ಧ್ವನಿಯಾಗಿ ಕೆಲಸಮಾಡುತ್ತದೆ ಎಂದು ತಿಳಿಸಿದರು. ಅಪರ ಜಿಲ್ಲಾಧಿಕಾರಿ ವಿನೋದ ಕುಮಾರ ಹೆಗ್ಗಳಿಗಿ ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲರ ಜವಾಬ್ದಾರಿಯಾಗಿದ್ದು, ಮಕ್ಕಳು ಸಹ ತಮ್ಮ ಹಕ್ಕುಗಳನ್ನು ತಿಳಿದುಕೊಳ್ಳಬೇಕು ಎಂದರು.
ಸಾನ್ನಿಧ್ಯ ವಹಿಸಿದ್ದ ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಆಶೀರ್ವಚನ ನೀಡಿದರು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್.ಮಜೀದ್ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಲ್ಲಿಕಾರ್ಜುನ ಮಠದ, ಮಕ್ಕಳ ಸಹಾಯವಾಣಿ ಕೇಂದ್ರದ ನಿರ್ದೇಶಕಿ ಗೀತಾ ಪಾಟೀಲ್, ಎಚ್.ಡಿ.ಬಳಿಗಾರ, ಅಂಬಿಕಾ ಜಾಲಗಾರ ಇತರರು ಇದ್ದರು.