ಹಾವೇರಿ: ಸವಣೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶೂಶ್ರೂಷಕಿಗೆ ಕೋವಿಡ್ 19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನೇ ಸೀಲ್‌ಡೌನ್ ಮಾಡಲಾಗಿದೆ.
ಆಸ್ಪತ್ರೆಯ ಒಂದು ಭಾಗದಲ್ಲಿ ಜನರಲ್ ಚಿಕಿತ್ಸೆ ಹಾಗೂ ಇನ್ನೊಂದು ಭಾಗದಲ್ಲಿ ಕೊವಿಡ್ ಆಸ್ಪತ್ರೆಯನ್ನಾಗಿ ಮಾಡಿ ಸೇವೆ ನೀಡಲಾಗುತ್ತಿತ್ತು. ಈಗ ಇಡೀ ಆಸ್ಪತ್ರೆಯನ್ನೇ ಸೀಲ್‌ಡೌನ್ ಮಾಡಲಾಗಿದೆ.
ಪಿ-8700 ಸೋಂಕಿತ ಆಶಾ ಕಾರ್ಯಕರ್ತೆಯ ಪ್ರಾಥಮಿಕ ಸಂಪರ್ಕದಿಂದ ಸವಣೂರು ಸರ್ಕಾರಿ ಆಸ್ಪತ್ರೆಯ ಶೂಶ್ರೂಷಕಿಗೆ ಸೋಂಕು ದೃಢಪಟ್ಟಿದೆ.
ಜ್ವರ ಕಾರಣ ಆಸ್ಪತ್ರೆಗೆ ಬಂದಿದ್ದ ಇಬ್ಬರಿಗೂ ಸೋಂಕು ದೃಢಪಟ್ಟಿದೆ. ಹೀಗಾಗಿ ಸವಣೂರು ಆಸ್ಪತ್ರೆ ಸೇರಿದಂತೆ ಸುತ್ತಲಿನ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ.
ಆಸ್ಪತ್ರೆಯ ಎಲ್ಲ ವೈದ್ಯರು, ನರ್ಸ್ ಸೇರಿದಂತೆ ಎಲ್ಲರನ್ನು ಪ್ರಾಥಮಿಕ ಸಂಪರ್ಕ ಎಂದು ಪರಿಗಣಿಸಿ ಎಲ್ಲರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದವರೆಲ್ಲರ ಸ್ವ್ಯಾಬ್ ಪರೀಕ್ಷೆಗೆ ಕಳುಹಿಸಿರುವುದರಿಂದ ಸ್ಥಳೀಯರ ಅನುಕೂಲಕ್ಕಾಗಿ ಪಟ್ಟಣದ ಆರೋಗ್ಯ ಕೇಂದ್ರದಲ್ಲಿ ಹೊರರೋಗಿ ವಿಭಾಗ ತೆರೆದು ಅಲ್ಲಿ ಶಿಗ್ಗಾವಿ ಆಸ್ಪತ್ರೆಯ ವೈದ್ಯರಿಂದ ಚಿಕಿತ್ಸೆ ನೀಡಲು, ತುರ್ತು ಹಾಗೂ ಆಸ್ಪತ್ರೆಗೆ ದಾಖಲಾಗುವ ರೋಗಿಗಳು ಬಂದರೆ ಶಿಗ್ಗಾವಿ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಕ್ರಮ ವಹಿಸಿದೆ.