Advertisement

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

03:42 PM Apr 23, 2024 | Team Udayavani |

ಉದಯವಾಣಿ ಸಮಾಚಾರ
ಗದಗ: ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ವ್ಯವಸ್ಥಿತ ಮತದಾರರ ಶಿಕ್ಷಣ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಕಾರ್ಯಕ್ರಮ ಸೋಮವಾರ ನಡೆಯಿತು.

Advertisement

ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌. ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿ, ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಮೇ 7 ರಂದು ನಡೆಯುವ ಮತದಾನದಂದು ಅರ್ಹರೆಲ್ಲರೂ ಕಡ್ಡಾಯ ಮತದಾನ ಮಾಡಬೇಕು ಎಂದರು.

ಪ್ರತಿಯೊಂದು ಮತ ಸಹ ಅಮೂಲ್ಯವಾಗಿದ್ದು, ಅರ್ಹರು ಮತದಾನ ಮಾಡುವುದರ ಜೊತೆಗೆ ಮತ್ತೂಬ್ಬರನ್ನು ಮತದಾನ ಮಾಡಲು ಪ್ರೇರೇಪಿಸಬೇಕು. ಮತದಾನ ಮಾಡುವುದು 18 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರ ಕರ್ತವ್ಯ ಮತ್ತು ಜವಾಬ್ದಾರಿ. ಆ ನಿಟ್ಟಿನಲ್ಲಿ ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಪಾಲ್ಗೊಳ್ಳುವಂತಾಗಬೇಕು ಎಂದರು.

ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು, ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆ ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ-ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೇ ಮತ ಚಲಾಯಿಸುತ್ತೇವೆಂದು ಪ್ರತಿಜ್ಞಾವಿಧಿ  ಬೋಧಿಸಿದರು.

ಜಿಪಂ ಸಿಇಒ ಭರತ್‌ ಎಸ್‌. ಮಾತನಾಡಿ, ಅರ್ಹರೆಲ್ಲರೂ ಮತದಾನ ಮಾಡುವುದರ ಜೊತೆಗೆ ಮತ್ತೊಬ್ಬರು ಮತದಾನ ಮಾಡಿರುವುದರ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕು. ಪ್ರಜಾಪ್ರಭುತ್ವ ಹಬ್ಬದಲ್ಲಿ ಮತದಾನ
ಮಾಡುವುದು ಅರ್ಹರೆಲ್ಲರ ಹಕ್ಕಾಗಿದೆ. ಮತದಾನ ಹೆಚ್ಚಳಕ್ಕೆ ಸ್ವೀಪ್‌ ಸಮಿತಿಯಿಂದ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಶೇಕಡಾವಾರು ಮತದಾನ ಹೆಚ್ಚಳಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದರು.

Advertisement

ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಖಾ, ಜಿಪಂ ಉಪ ಕಾರ್ಯದರ್ಶಿ ಹಾಗೂ ಸ್ವೀಪ್‌ ಜಿಲ್ಲಾ ನೋಡಲ್‌ ಅಧಿಕಾರಿ ಸಿ.ಬಿ. ದೇವರಮನಿ, ಉಪವಿಭಾಗಾಧಿಕಾರಿ ವೆಂಕಟೇಶ ನಾಯ್ಕ, ಚುನಾವಣಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next