ಹಾವೇರಿ: ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಸೇವೆ, ಪೊಲೀಸ್ ಸೇವೆ, ಕಾನೂನು ಸೇವೆ ಹಾಗೂ ಸಮಾಲೋಚನೆ, ತಾತ್ಕಾಲಿಕ ವಸತಿ ಒದಗಿಸುವ ಕೇಂದ್ರ ಸರ್ಕಾರದ ಒನ್ ಸ್ಟಾಪ್ ಸೆಂಟರ್-ಸಖೀ ಕೇಂದ್ರವನ್ನು ಜಿಲ್ಲಾಸ್ಪತ್ರೆಯಲ್ಲಿ ಆರಂಭಿಸಲಾಗಿದ್ದು, ಅಗತ್ಯ ಎಲ್ಲ ಸೌಲಭ್ಯ ತ್ವರಿತವಾಗಿ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಒನ್ ಸ್ಟಾಪ್ ಸೆಂಟರ್ ಜಿಲ್ಲಾ ಮಟ್ಟದ ಟಾಸ್ಕ್ಫೋರ್ಸ್ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಒನ್ ಸ್ಟಾಪ್ ಸೆಂಟರ್‌ಗೆ ಈಗಾಗಲೇ ಜಿಲ್ಲಾಸ್ಪತ್ರೆ ಆವರಣದಲ್ಲಿ ನಿವೇಶನ ಗುರುತಿಸಲಾಗಿದೆ. ಪ್ರತ್ಯೇಕ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ಈಗಾಗಲೇ ಮಂಜೂರಾತಿ ನೀಡಿದೆ. 53 ಲಕ್ಷ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಕೈಗೊಳ್ಳಬೇಕಾಗಿದೆ. ಈಗಾಗಲೇ ಒನ್ ಸ್ಟಾಪ್ ಸೆಂಟರ್ ಕಾರ್ಯನಿರ್ವಹಣೆ ಆರಂಭಿಸಲಾಗಿದೆ. ತ್ವರಿತವಾಗಿ ಕೇಂದ್ರದ ಕಾರ್ಯ ನಿರ್ವಹಣೆಗೆ ಪ್ರತ್ಯೇಕ ಕಟ್ಟಡ ಕಾಮಗಾರಿ ಪೂರ್ಣಗೊಳಿಸಬೇಕು ಎಂದರು.
ಸಾಂತ್ವನ ಕೇಂದ್ರದ ಸಿಬ್ಬಂದಿ ವರ್ಗದವರಿಂದ ಕಾರ್ಯಚಟುವಟಿಕೆ ನಡೆಸಲಾಗುತ್ತಿದೆ. ಪೂರ್ಣ ಪ್ರಮಾಣದ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ತುಂಬಿಕೊಳ್ಳಲು ಕ್ರಮವಹಿಸಲಾಗಿದೆ. ಇಲ್ಲಿನ ಕಾರ್ಯ ನಿರ್ವಹಣೆ ಕುರಿತಂತೆ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ ಮಾಹಿತಿ ನೀಡಿದರು.
ಜಿಲ್ಲಾಸ್ಪತ್ರೆ ಆರೋಗ್ಯ ಅಧಿಕಾರಿಗಳ ಸೇವೆ ಪಡೆಯಲು ಸೂಚನೆ ನೀಡಿದರು ಹಾಗೂ ಈ ಕೇಂದ್ರಕ್ಕೆ ಪ್ರತ್ಯೇಕ ದಿನದ 24ತಾಸು ಪಾಳೆ ಪ್ರಕಾರ ಪೊಲೀಸ್ ಸಿಬ್ಬಂದಿಗಳನ್ನು ಒದಗಿಸಲು ಸೂಚಿಸಿದರು. ಕಾನೂನು ಸೇವೆಗೆ ವಕೀಲರ ಸೇವೆಗಾಗಿ ಲಿಖೀತ ಮನವಿ ಸಲ್ಲಿಸಿದರೆ ಕಾನೂನು ಪ್ರಾ ಧಿಕಾರದಿಂದ ಅಗತ್ಯವಾದ ನೆರವು ಒದಗಿಸಲಾಗುವುದು ಎಂದು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀವಿದ್ಯಾ ತಿಳಿಸಿದರು.
ಜಿಲ್ಲಾ ಮಟ್ಟದಲ್ಲಿ ಸ್ಥಾಪಿತವಾಗಿರುವ ಒನ್‌ಸ್ಟಾಪ್ ಸೆಂಟರ್ ಗಳ ಮೇಲ್ವಿಚಾರಣೆಗಾಗಿ ಜಿಲ್ಲಾ ಧಿಕಾರಿಗಳ ಅಧ್ಯಕ್ಷತೆಯಲ್ಲಿ ಟಾಸ್ಕ್ಫೋರ್ಸ್ ಸಮಿತಿ ರಚಿಸಲಾಗಿದ್ದು, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾ ಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ,
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಯದರ್ಶಿಗಳು, ಬಾರ್ ಕೌನ್ಸಿಲ್ ಅಧ್ಯಕ್ಷರು, ಜಿಲ್ಲಾ ಆರೋಗ್ಯಾಧಿ ಕಾರಿ,ನಾಗರಿಕ ಸೇವಾ ಸಂಸ್ಥೆಗಳ ಸದಸ್ಯರಾಗಿದ್ದು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಉಪನಿರ್ದೇಶಕರು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣಾ ಧಿಕಾರಿಗಳು ವಿವರಿಸಿದರು. ಸಭೆಯಲ್ಲಿ ವಿವಿಧ ಇಲಾಖಾ ಅಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು ಇದ್ದರು.