ಹಾವೇರಿ: ಜಿಲ್ಲಾಡಳಿತ ವತಿಯಿಂದ 64ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ನವೆಂಬರ್ 1ರಂದು ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಆಚರಿಸಲು ಸಿದ್ಧತೆ ನಡೆದಿದೆ.
ಅಂದು ಬೆಳಗ್ಗೆ 8ಗಂಟೆಗೆ ಸಾರ್ವಜನಿಕರು, ಅಧಿಕಾರಿಗಳು, ಶಾಲಾ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಮತ್ತು ಶಿಕ್ಷಕರು ಮಹಾದೇವ ಮೈಲಾರ ವೃತ್ತಕ್ಕೆ ಬಂದು ಸೇರುವರು.
8:15ಕ್ಕೆ ಹುತಾತ್ಮ ಮೈಲಾರ ಮಹದೇವ ವೃತ್ತದಿಂದ ಮೆರವಣಿಗೆ ಹೊರಡುವುದು ಹಾಗೂ ಬೆಳಗ್ಗೆ 9ಗಂಟೆಗೆ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮತ್ತು ರಾಜ್ಯೋತ್ಸವ ಸಂದೇಶ, 9:30ಕ್ಕೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಶಾಲಾ ಮಕ್ಕಳು ಮತ್ತು ಸಾರ್ವಜನಿಕ ಸಂಸ್ಥೆಗಳಿಂದ ಸ್ತಬ್ದ ಚಿತ್ರ ಪ್ರದರ್ಶನ ಮತ್ತು ಮಕ್ಕಳಿಗೆ ಸಿಹಿ ವಿತರಣೆ ನಡೆಯಲಿದೆ.
ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ ಜೋಶಿ ಘನ ಉಪಸ್ಥಿತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅತಿಥಿಗಳಾಗಿ ಭಾಗವಹಿಸುವರು. ಶಾಸಕ ನೆಹರು ಓಲೇಕಾರ ಅಧ್ಯಕ್ಷತೆ ವಹಿಸುವರು.
ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಧ್ವಜಾರೋಹಣ ನೆರವೇರಿಸಿ ಸಂದೇಶ ವಾಚಿಸುವರು. ಮುಖ್ಯ ಅತಿಥಿಗಳಾಗಿ ಜಿಪಂ ಅಧ್ಯಕ್ಷ ಎಸ್.ಕೆ. ಕರಿಯಣ್ಣನವರ, ಸಂಸದರಾದ ಶಿವಕುಮಾರ ಉದಾಸಿ, ಶಾಸಕರಾದ ಸಿ.ಎಂ.ಉದಾಸಿ, ವಿರುಪಾಕ್ಷಪ್ಪ ಬಳ್ಳಾರಿ, ವಿಧಾನ ಪರಿಷತ್ ಶಾಸಕರಾದ ಬಸವರಾಜ ಹೊರಟ್ಟಿ, ನಿವಾಸ ಮಾನೆ, ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್, ಜಿಪಂ ಉಪಾಧ್ಯಕ್ಷೆ ಗಿರಿಜವ್ವ ಬ್ಯಾಲದಹಳ್ಳಿ, ತಾಪಂ ಅಧ್ಯಕ್ಷ ಕರಿಯಪ್ಪ ಉಂಡಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಶಿವಕುಮಾರ ಸಂಗೂರ ಪಾಲ್ಗೊಳ್ಳಲಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸಂಜೆ 6 ಗಂಟೆಗೆ ನಗರದ ಜಿಲ್ಲಾ ಗುರುಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.