Advertisement

ಹಾವೇರಿ: ಬಾಲ್ಯ ವಿವಾಹ ತಡೆಗೆ ಮುಂದಾಗಿ; ಡಿಸಿ ರಘುನಂದನ್‌ ಮೂರ್ತಿ

05:30 PM Jun 21, 2023 | Team Udayavani |

ಹಾವೇರಿ: ಬಾಲ್ಯ ವಿವಾಹ ತಡೆ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಳು ಹಾಗೂ ಶಾಲಾ-ಕಾಲೇಜುಗಳಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಜಿಲ್ಲಾಧಿಕಾರಿ ರಘುನಂದನ್‌ ಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಬಾಲ್ಯ ವಿವಾಹ ನಿಷೇಧ ಸಮನ್ವಯ ಸಮಿತಿ ಪರಿಶೀಲನಾ ಸಭೆ, ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಕುರಿತ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆ ಸೇರಿದಂತೆ ವಿವಿಧ ಜಿಲ್ಲಾಮಟ್ಟದ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿ ಕಲೆ ಹಾಕಿ, ಪುನಃ ಶಾಲೆಗೆ ದಾಖಲಿಸಲು ಕ್ರಮ ವಹಿಸಬೇಕು. ಗ್ರಾಮಗಳಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಂದ ಅರಿವು ಮೂಡಿಸಬೇಕು. ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾ ಧಿಕಾರಿಗಳು ಹಾಗೂ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕರು ಕಾರ್ಯಕ್ರಮಗಳ ಆಯೋಜನೆಗೆ ಕ್ರಮ ವಹಿಸಬೇಕು. ಜೊತೆಗೆ ಕೆಳಹಂತದ  ಅಧಿಕಾರಿಗಳಿಗೆ ಜವಾಬ್ದಾರಿ ನೀಡಬೇಕೆಂದು ಸೂಚಿಸಿದರು.

ಜಿಲ್ಲೆಯಲ್ಲಿ ಗುರುತಿಸಲಾದ ಅಪೌಷ್ಟಿಕ ಮಕ್ಕಳ ಸೂಕ್ತ ಚಿಕಿತ್ಸೆಗೆ ಎನ್‌ಆರ್‌ಸಿಗೆ ದಾಖಲಿಸಿ ಪ್ರೋಟಿನ್‌ಯುಕ್ತ ಆಹಾರ ನೀಡುವ ಜೊತೆಗೆ ಸೂಕ್ತ ಚಿಕಿತ್ಸೆ ನೀಡಲು ಕ್ರಮ ವಹಿಸಬೇಕು. ಅಂಗನವಾಡಿಗಳ ಸ್ವಂತ ಕಟ್ಟಡ ನಿರ್ಮಾಣಕ್ಕೆ ಸರ್ಕಾರಿ ಜಮೀನು ಗುರುತಿಸಿ ಮಾಹಿತಿ ಸಲ್ಲಿಸಿದರೆ ಅಂಗನವಾಡಿಗಳ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಕುರಿತ ಜಿಲ್ಲಾಮಟ್ಟದ ಸಮನ್ವಯ ಸಮಿತಿ, ಸ್ವಾಧಾರ ಗೃಹ ಯೋಜನೆಯ ಜಿಲ್ಲಾಮಟ್ಟದ ಸಮಿತಿ, ಸಖಿ ಒನ್‌ ಸ್ಟಾಫ್‌ ಸೆಂಟರ್‌, ಜಿಲ್ಲಾಮಟ್ಟದ ಸ್ವತಂತ್ರ ವಿಶೇಷ ಕಾರ್ಯಪಡೆ ಸಮಿತಿ, ಮಾನವ ಅಕ್ರಮ ಸಾಗಾಣಿಕೆ ಜಿಲ್ಲಾಮಟ್ಟದ ಸಮಿತಿ, ಪೋಷಣ್‌ ಅಭಿಯಾನ, ಉಜ್ವಲ ಯೋಜನೆ, ಮೆಟ್ರಿಕ್‌ ನಂತರದ ಬಾಲಕಿಯರ ನಿಲಯ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಗತಿ ಪರಿಶೀಲನೆ ನಡೆಸಿದರು.

Advertisement

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ ಮಾತನಾಡಿ, ಜಿಲ್ಲೆಯಲ್ಲಿ ಜನವರಿ 2022 ರಿಂದ ಮೇ 2023ರವರೆಗೆ 60 ಬಾಲ್ಯವಿವಾಹಗಳನ್ನು ತಡೆಯಲಾಗಿದೆ. ಬಾಲ್ಯ ವಿವಾಹ ತಡೆಗೆ ತಾಲೂಕು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಭೆ ನಡೆಸಿ ಅರಿವು ಮೂಡಿಸಲಾಗುತ್ತಿದೆ. ಅಪೌಷ್ಟಿಕ ಮಕ್ಕಳನ್ನು ಎನ್‌ಆರ್‌ ಸಿಗೆ ದಾಖಲಿಸಿ ಪೌಷ್ಟಿಕ ಆಹಾರ ನೀಡುವ ಜೊತೆಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕೌಟುಂಬಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ನ್ಯಾಯ ಒದಗಿಸಲು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ
ಕಾರ್ಯನಿರ್ವಹಿಸಲಾಗುತ್ತಿದೆ. ಸಖೀ ಒನ್‌ ಸ್ಟಾಫ್‌ ಸೆಂಟರ್‌ನಲ್ಲಿ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಎಲ್ಲ ಅಗತ್ಯ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲಾಗುತ್ತಿದೆ.

ಈ ಕೇಂದ್ರ 24×7 ಕಾರ್ಯನಿರ್ವಹಿಸುತ್ತಿದೆ. ಆಪ್ತ ಸಮಾಲೋಚನೆ, ಕಾನೂನು ನೆರವು, ವೈದ್ಯಕೀಯ ನೆರವು, ಪೊಲೀಸ್‌ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆಗೊಳಿಸಲಾಯಿತು.

ಸಭೆಯಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶ ಪುಟ್ಟರಾಜು, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿ ಕಾರಿ ಅಕ್ಷಯ ಶ್ರೀಧರ, ಜಿಪಂ ಉಪ ಕಾರ್ಯದರ್ಶಿ ಎಸ್‌.ಜಿ.ಮುಳ್ಳಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್‌.ಎಸ್‌.ರಾಘವೇಂದ್ರ ಸ್ವಾಮಿ, ಜಿಲ್ಲಾ ಶಸ್ತ್ರ ಚಿಕಿತ್ಸೆ ಡಾ.ಪಿ.ಆರ್‌.ಹಾವನೂರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಉಮೇಶಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಜಯಶ್ರೀ ಪಾಟೀಲ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ತಾಲೂಕು ಮತ್ತು ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಪದಾಧಿ ಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next