ಹಾವೇರಿ: ಇಂದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆಲಸದ ಸ್ಥಳಗಳಲ್ಲಿ ಮಹಿಳೆಯರು ಹೆಚ್ಚಾಗಿ
ದೌರ್ಜನ್ಯಕ್ಕೊಳಗಾಗುತ್ತಿದ್ದಾರೆ. ದೌರ್ಜನ್ಯ ತಡೆಗೆ ಮಹಿಳೆಯರಿಗೆ ಕಾನೂನು ಅರಿವು ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಯಾದವ ವನಮಾಲಾ ಆನಂದರಾವ್ ಹೇಳಿದರು.
ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರದ ಸಭಾಭವನದಲ್ಲಿ ಶನಿವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾದ ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಕಿರುಕುಳ ತಡೆಗೆ 2013ರಲ್ಲಿ ಕಾನೂನು ಜಾರಿಗೆ ತರಲಾಗಿದೆ. ಪ್ರತಿ ಮಹಿಳೆಯರು ಕಾನೂನುಗಳನ್ನು ತಿಳಿಯಬೇಕು ಎಂದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪೆನಲ್ ವಕೀಲರಾದ ಆರ್.ಐ.ಚನ್ನಪಟ್ಟಣ ಅವರು ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆ ಕುರಿತು ಉಪನ್ಯಾಸ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ ಆಲದರ್ತಿ ಅಧ್ಯಕ್ಷತೆ ವಹಿಸಿದ್ದರು. ನ್ಯಾಯಾ ಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಪುಟ್ಟರಾಜು, ಹೆಚ್ಚುವರಿ ದಿವಾಣಿ ನ್ಯಾಯಾಧೀಶರು ಜೆಎಂಎಫ್‌ಸಿ ನಾಗರತ್ನಮ್ಮ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಚ್.ಜತ್ತಿ, ಕಾರ್ಯದರ್ಶಿ ಪಿ.ಎಸ್.ಹೆಬ್ಬಾ ರ್, ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಅಧಿಕಾರಿ ಮಲ್ಲಿಕಾರ್ಜುನ ಕೆಂಪಳ್ಳೇರ, ತಾಲೂಕು ಆರೋಗ್ಯಾಧಿಕಾರಿ ಡಾ|ಪ್ರಭಾಕರ ಕುಂದೂರ ಇದ್ದರು.