Advertisement
ಅವಧಿ ಮುಗಿದ ಸ್ಥಳೀಯ ಸಂಸ್ಥೆಗಳಿಗೆ ನಿಗದಿತ ಕಾಲಮಿತಿಯೊಳಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಅಗತ್ಯ ನಿರ್ದೇಶನ ನೀಡಲು ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾ. ಸಚಿನ್ ಶಂಕರ್ ಮುಗದಂ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ಈ ಆದೇಶ ನೀಡಿದೆ.
Related Articles
Advertisement
ಇದೇ ವೇಳೆ ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ವಾದ ಮಂಡಿಸಿ, ಬಾಕಿ ಇರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಆಯೋಗ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈಗಾಗಲೇ ಮತದಾರರ ಪಟ್ಟಿ ಅಂತಿಮಗೊಳಿಸಲಾಗಿದೆ. ಸರ್ಕಾರ ಒಂದೇ ಬಾರಿಗೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪ್ರಕಟಿಸಿದರೆ ಏಕಕಾಲಕ್ಕೆ ಚುನಾವಣೆ ನಡೆಸಲು ಅನುಕೂಲವಾಗುತ್ತದೆ. ಸರ್ಕಾರ ಮೀಸಲಾತಿ ಅಧಿಸೂಚನೆ ಹೊರಡಿಸಿದ ನಂತರ ಆಯೋಗ ಚುನಾವಣಾ ದಿನಾಂಕ ಪ್ರಕಟಿಸಿ ಡಿಸೆಂಬರ್ ಅಂತ್ಯದೊಳಗೆ ಚುನಾವಣಾ ಪ್ರಕ್ರಿಯೆ ಮುಗಿಸಲಾಗುವುದು ಎಂದು ಸಂಭ್ಯಾವ್ಯ ವೇಳಾಪಟ್ಟಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.
ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯವರ ಪ್ರಮಾಣಪತ್ರ ಹಾಗೂ ರಾಜ್ಯ ಚುನಾವಣಾ ಆಯೋಗದ ಪರ ವಕೀಲರ ವಾದ ಪುರಸ್ಕರಿಸಿದ ನ್ಯಾಯಪೀಠ, ನ.26ರೊಳಗೆ ರಾಜ್ಯ ಸರ್ಕಾರ ಮೀಸಲಾತಿ ಅಧಿಸೂಚನೆ ಹೊರಡಿಸಬೇಕು. ಬಳಿಕ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿ ಡಿ.30ರೊಳಗೆ ಚುನಾವಣೆ ಪೂರ್ಣಗೊಳಿಸಬೇಕು ಎಂದು ಆದೇಶಿಸಿ ವಿಚಾರಣೆಯನ್ನು 2022ರ ಜನೆವರಿಗೆ ಮುಂದೂಡಿತು.
ಸರ್ಕಾರಕ್ಕೆ ತರಾಟೆ; ಎಸಿಎಸ್ ಖುದ್ದು ಹಾಜರು:ಅರ್ಜಿಯು ಬೆಳಿಗ್ಗೆ ವಿಚಾರಣೆಗೆ ಬಂದಾಗ, ಚುನಾವಣೆ ನಡೆಯಬೇಕಿರುವ ನಗರ ಸ್ಥಳೀಯ ಸಂಸ್ಥೆಗಳ ಪೈಕಿ ಬಹುತೇಕ ಸ್ಥಳೀಯ ಸಂಸ್ಥೆಗಳ ಅವಧಿ 2018ರಲ್ಲಿ ಮುಗಿದಿದೆ. ಮೂರು ತಿಂಗಳಲ್ಲಿ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಜುಲೈ ತಿಂಗಳಲ್ಲಿ ಹೈಕೋರ್ಟ್ ಆದೇಶಿಸಿತ್ತು. ನಂತರ ಸೆ.16ರಂದು ನಿರ್ದೇಶನ ನೀಡಿದೆ. ಮೀಸಲಾತಿ ಬೇಗ ನಿಗದಿಯಾದರೆ ಚುನಾವಣಾ ಪ್ರಕ್ರಿಯೆ ಪ್ರಾರಂಭಿಸಲು ಅನುಕೂಲವಾಗುತ್ತದೆ ಎಂದು ಚುನಾವಣಾ ಆಯೋಗದ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು. ಅದಕ್ಕೆ, ಮೀಸಲಾತಿ ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಆದಷ್ಟು ಶೀಘ್ರ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು ಎಂದು ಸರ್ಕಾರದ ಪರ ವಕೀಲರು ಸಮಜಾಯಿಷಿ ನೀಡಿದರು. ಇದರಿಂದ ಕೊಪಗೊಂಡ ಮುಖ್ಯ ನ್ಯಾಯಮೂರ್ತಿಗಳು, ಮೀಸಲಾತಿ ನಿಗದಿಪಡಿಸಿ ಕಾಲಮಿತಿಯಲ್ಲಿ ಚುನಾವಣೆಯ ನಡೆಸಲು ಸಾಧ್ಯವಾಗದಷ್ಟು ಸರ್ಕಾರ ಅಸಮರ್ಥವಾಗಿದೆಯೇ? ಚುನಾವಣೆ ನಡೆಸುವಂತೆ ನ್ಯಾಯಾಲಯವೇ ಹೇಳಬೇಕೇ? ಇದೆಲ್ಲದರ ಬಗ್ಗೆ ನ್ಯಾಯಾಲಯವೇ ನಿಗಾ ವಹಿಸಬೇಕು ಎಂದು ಸರ್ಕಾರ ಬಯಸುತ್ತಿದೆಯೇ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಅಲ್ಲದೇ ಅವಧಿ ಮುಗಿದ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಬೇಕು ಎಂಬುದಷ್ಟೇ ನ್ಯಾಯಾಲಯದ ಕಾಳಜಿ. ಯಾವ ಕಾಲಮಿತಿಯಲ್ಲಿ ಅಧಿಸೂಚನೆ ಹೊರಡಿಸುತ್ತೀರಿ ಎಂದು ನಿಖರವಾಗಿ ಹೇಳಲು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯವರು ಮಧ್ಯಾಹ್ನ 2.30ಕ್ಕೆ ಖುದ್ದು ಹಾಜರಾಗಿ ಸ್ಪಷ್ಟನೆ ನೀಡಲಿ ಎಂದು ನ್ಯಾಯಪೀಠ ತಾಕೀತು ಮಾಡಿತು. ಅದರಂತೆ, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮಧ್ಯಾಹ್ನ ವಿಚಾರಣೆಗೆ ಖುದ್ದು ಹಾಜರಾಗಿದ್ದರು.