Advertisement

ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

11:23 PM Jan 17, 2020 | Lakshmi GovindaRaj |

ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ಎಂ.ಸುಧೀಂದ್ರರಾವ್‌ ಅವರನ್ನು ನೇಮಕ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಶುಕ್ರವಾರ ನೋಟಿಸ್‌ ಜಾರಿಗೊಳಿಸಿದೆ.

Advertisement

ಈ ಕುರಿತು ವಕೀಲ ಎಸ್‌.ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ್‌ ಹಾಗೂ ನ್ಯಾ.ಹೇಮಂತ್‌ ಚಂದನಗೌಡರ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರ ಹಾಗೂ ಮಂಡಳಿ ಅಧ್ಯಕ್ಷ ಎಂ.ಸುಧೀಂದ್ರರಾವ್‌ರಿಗೆ ನೋಟಿಸ್‌ ಜಾರಿಗೊಳಿಸಿ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು.

ಮಾಲಿನ್ಯ ನಿಯಂತ್ರಣ ಮಂಡಳಿಗೆ ಎಂ. ಸುಧೀಂದ್ರರಾವ್‌ರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ 2019ರ ಡಿ.30ರಂದು ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಬೇಕು. ಅಧ್ಯಕ್ಷ ಹುದ್ದೆ ಕರ್ತವ್ಯ ನಿರ್ವಹಿಸದಂತೆ ಸುಧೀಂದ್ರರಾವ್‌ರಿಗೆ ನಿರ್ಬಂಧಿಸಬೇಕು. ಮಂಡಳಿ ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿಗೆ ನಿಯಮ ರೂಪಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಮಾಲಿನ್ಯ ನಿಯಂತ್ರಣ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಸಂಬಂಧ 6 ತಿಂಗಳಲ್ಲಿ ನಿಯಮ ರೂಪಿಸಬೇಕು ಎಂದು 2017ರ ಸೆ.22ರಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿದೆ. ಈ ಮಧ್ಯೆ 2019ರ ಮಾ.5ರಂದು ಜಯರಾಂ ಅವರನ್ನು ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಅವರು ರಾಜೀನಾಮೆ ಕೊಟ್ಟಿದ್ದರಿಂದ ಅದೇ ವರ್ಷ ಜೂ.20ರಂದು ಶಾಸಕ ಡಾ.ಕೆ. ಸುಧಾಕರ್‌ರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು. ಅವರೂ ರಾಜೀನಾಮೆ ಸಲ್ಲಿಸಿದರು.

Advertisement

ಈ ಇಬ್ಬರ ನೇಮಕಾತಿ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ನಿಯಮ ರೂಪಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿ 2019ರ ಸೆ.23ರಂದು ಹೈಕೋರ್ಟ್‌ ಅರ್ಜಿ ಇತ್ಯರ್ಥಪಡಿಸಿತ್ತು. ಈ ಸಂಬಂಧ ಅರ್ಜಿದಾರರು ಅ.17ರಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಆದರೆ, ಅದನ್ನು ಪರಿಗಣಿಸಲಾಗಿಲ್ಲ. ಈ ಮಧ್ಯೆ ಎಂ. ಸುಧೀಂದ್ರರಾವ್‌ರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಕಲಾಪಗಳ ನೇರ ಪ್ರಸಾರ ನಿರ್ಬಂಧ: ಅರ್ಜಿ ಇತ್ಯರ್ಥ
ಬೆಂಗಳೂರು: ವಿಧಾನಸಭೆಯ ಕಲಾಪದ ನೇರ ಪ್ರಸಾರಕ್ಕೆ ವಿದ್ಯುನ್ಮಾನ ಮಾಧ್ಯಮಗಳಿಗೆ ಸ್ಪೀಕರ್‌ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ಶುಕ್ರವಾರ ವಿಲೇವಾರಿ ಮಾಡಿತು.

ತುಮಕೂರಿನ ವಕೀಲ ರಮೇಶ್‌ ನಾಯ್ಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ್‌, ನ್ಯಾ.ಹೇಮಂತ್‌ ಚಂದನಗೌಡರ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಅರ್ಜಿಯಲ್ಲಿ ಕೋರಿರುವಂತೆ ಆದೇಶ ನೀಡಲಾಗದು. ಮೊದಲು ಅರ್ಜಿದಾರರು ತಮ್ಮ ಕೋರಿಕೆ ವಿಚಾರವಾಗಿ ಸ್ಪೀಕರ್‌ರಿಗೆ ಮನವಿ ಸಲ್ಲಿಸಬೇಕು. ಅದನ್ನು ಪರಿಶೀಲಿಸಿ ಅವರು ಕ್ರಮ ಕೈಗೊಳ್ಳಬೇಕು ಎಂದು ಹೇಳಿ ಅರ್ಜಿ ಇತ್ಯರ್ಥಪಡಿಸಿತು.

ಅಷ್ಟಕ್ಕೂ ಸ್ಪೀಕರ್‌ರ ಆದೇಶದಿಂದ “ನಿಮ್ಮ ಹಕ್ಕು ಹೇಗೆ ಮೊಟಕುಗೊಂಡಿದೆ? ನೇರ ಪ್ರಸಾರ ಮಾಡುವ ಹಕ್ಕು ನೀಡಲಾಗಿದೆಯೇ? ಅಲ್ಲದೇ ನಿಮ್ಮ ಅರ್ಜಿಗೆ ಆಧಾರವೇನು? ಎಂದು ಪ್ರಶ್ನಿಸಿದ ನ್ಯಾಯಪೀಠ, ಸ್ಪೀಕರ್‌ ಅವರು ತಮ್ಮ ಅರೆ ನ್ಯಾಯಿಕ ಅಧಿಕಾರ ಬಳಸಿ ಆದೇಶ ನೀಡಿದ್ದಾರೆಂದು ಅರ್ಜಿಯಲ್ಲಿ ಹೇಳಲಾಗಿದೆ. ಆದರೆ, ಸ್ಪೀಕರ್‌ ಅವರು ಅರೆ ನ್ಯಾಯಿಕ ಅಧಿಕಾರ ಬಳಸಿಲ್ಲ. ಹೀಗಾಗಿ ಅವರ ಆದೇಶದ ವಿರುದ್ಧ ಯಾವುದೇ ನಿರ್ದೇಶನ ನೀಡಲಾಗದು ಎಂದು ನ್ಯಾಯಪೀಠ ಹೇಳಿತು.

ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅರ್ಜಿ ವಜಾ
ಬೆಂಗಳೂರು: ಲೋಕಸಭಾ ಚುನಾವಣೆ ವೇಳೆ ಚುನಾವಣಾ ಆಯೋಗಕ್ಕೆ ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆಂದು ಆರೋಪಿಸಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಬಿಜೆಪಿ ಪರಾಜಿತ ಅಭ್ಯರ್ಥಿ ಎ.ಮಂಜು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ.

ಪ್ರಜ್ವಲ್‌ ರೇವಣ್ಣ ಅವರ ಆಯ್ಕೆ ಅನರ್ಹಗೊಳಿಸಬೇಕು. ಚುನಾವಾಣಾ ಫ‌ಲಿತಾಂಶ ರದ್ದುಗೊಳಿಸಿ ತಮ್ಮನ್ನು ಚುನಾಯಿತ ಅಭ್ಯರ್ಥಿ ಎಂದು ಘೋಷಿಸುವಂತೆ ಕೋರಿ ಎ.ಮಂಜು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಜಾನ್‌ ಮೈಕೆಲ್‌ ಕುನ್ಹಾ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಅರ್ಜಿ ಸಲ್ಲಿಸುವಾಗ ಅರ್ಜಿದಾರರು ನಿಯಮ ಪಾಲನೆ ಮಾಡಿಲ್ಲ. ಆರೋಪಗಳಿಗೆ ಸಂಬಂಧಿಸಿದಂತೆ ಅರ್ಜಿದಾರರು “ಚುನಾವಣಾ ನಡವಳಿಕೆ ನಿಯಮ 94ಎ’ರಡಿ ಪ್ರಮಾಣಪತ್ರ ಸಲ್ಲಿಸಿ ಅದನ್ನು ಫಾರಂ ನಂ.25ರಲ್ಲಿ ಹಾಕಬೇಕಿತ್ತು. ಆ ಪ್ರಮಾಣಪತ್ರ ಸಲ್ಲಿಸದೇ ಇರುವು ದರಿಂದ ಅರ್ಜಿಯನ್ನು ಪೂರ್ಣ ಪ್ರಮಾಣದ ಚುನಾವಣಾ ತಕರಾರು ಅರ್ಜಿ ಎಂದು ಪರಿಗಣಿಸಲು ಸಾಧ್ಯವಿಲ್ಲ. ಈ ಎಲ್ಲಾ ತಾಂತ್ರಿಕ ಲೋಪ ಹಿನ್ನೆಲೆಯಲ್ಲಿ ಜನಪ್ರತಿನಿಧಿ ಕಾಯ್ದೆ-1951ರ ಸೆಕ್ಷನ್‌ 86 (1)ರಡಿ ಅರ್ಜಿ ವಜಾ ಮಾಡಲಾಗಿದೆ ಎಂದು ಹೈಕೋರ್ಟ್‌ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next