ಬೆಂಗಳೂರು: ಸಂಪುಟದಲ್ಲಿ ಸ್ಥಾನ ಸಿಗದೆ ಅಸಮಾಧಾನಗೊಂಡಿರುವವರ ಶಮನಕ್ಕೆ ಮುಂದಾಗಿರುವ ಕಾಂಗ್ರೆಸ್, ಪಕ್ಷದ ಹಿರಿಯ ನಾಯಕ ಎಚ್.ಕೆ.ಪಾಟೀಲ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲಿದೆ ಎಂದು ಹೇಳಲಾಗುತ್ತಿದೆ.
ಆದರೆ, ದಿನೇಶ್ ಗುಂಡೂರಾವ್ ಅವರೂ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿದ್ದು ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಕುರಿತಂತೆ ಹೈಕಮಾಂಡ್ ಆಲೋಚನೆ ನಡೆಸುತ್ತಿದೆ ಎಂದು ಮೂಲಗಳು ಹೇಳಿವೆ.
ಬಜೆಟ್ ಅಧಿವೇಶನಕ್ಕೂ ಮುನ್ನವೆ ಖಾಲಿ ಉಳಿದಿರುವ ಆರು ಸಚಿವ ಸ್ಥಾನಗಳಲ್ಲಿ ನಾಲ್ಕನ್ನು ಭರ್ತಿ ಮಾಡಲು ನಿರ್ಧರಿಸಿರುವ ಹೈಕಮಾಂಡ್, ಎರಡನ್ನು ಉಳಿಸಿಕೊಳ್ಳಲಿದೆ ಎಂದು ತಿಳಿದು ಬಂದಿದೆ.ಮೂಲಗಳ ಪ್ರಕಾರ ರಾಮಲಿಂಗಾ ರೆಡ್ಡಿ, ಎಂ.ಬಿ. ಪಾಟೀಲ್, ಸಿ.ಎಸ್.ಶಿವಳ್ಳಿ ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದ್ದು, ಇನ್ನೊಂದನ್ನು ಲಂಬಾಣಿ,ದಲಿತ ಎಡಗೈ ಅಥವಾ ಮುಸ್ಲಿಂ ಸಮುದಾಯಕ್ಕೆ ಸೇರಿದವರಲ್ಲಿ ಒಬ್ಬರಿಗೆ ನೀಡಲು ಚಿಂತನೆ ನಡೆಸಿದೆ ಎಂದು ಗೊತ್ತಾಗಿದೆ.
ಲಂಬಾಣಿ ಸಮುದಾಯದಲ್ಲಿ ಚಿಂಚೋಳಿ ಶಾಸಕ ಉಮೇಶ್ ಜಾಧವ್ ಮತ್ತು ಹೂವಿನ ಹಡಗಲಿ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ, ದಲಿತ ಎಡಗೈ ಸಮುದಾಯದಲ್ಲಿ ಕೆಜಿಎಫ್ನ ರೂಪಾ ಶಶಿಧರ್ ಅಥವಾ ಆರ್.ಬಿ.ತಿಮ್ಮಾಪುರ ಮತ್ತು ಧರ್ಮಸೇನ, ಮುಸ್ಲಿಂ ಸಮುದಾಯದಲ್ಲಿ ರೋಷನ್ ಬೇಗ್, ಎನ್ .ಎ.ಹ್ಯಾರೀಸ್ ಹಾಗೂ ರಹೀಂ ಖಾನ್ ಲಾಬಿ ನಡೆಸಿದ್ದಾರೆ. ಮೂಲಗಳ ಪ್ರಕಾರ ಜೂನ್ 27 ಅಥವಾ 28 ರಂದು ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇಂದು ಸಚಿವ ಸಂಪುಟ ಸಭೆ
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟ ಸಭೆ ಶನಿವಾರ
ನಡೆಯಲಿದೆ.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಜುಲೈನಲ್ಲಿ ನಡೆಯುವ ವಿಧಾನ ಮಂಡಲದ ಅಧಿವೇಶನದ ದಿನಾಂಕ ನಿಗದಿ ಮಾಡುವುದು, ರಾಜ್ಯಪಾಲರ ಜಂಟಿ ಅಧಿವೇಶನ ಭಾಷಣದ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಅಲ್ಲದೆ, ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಬಗ್ಗೆ ಇರುವ ಗೊಂದಲಗಳ ಬಗ್ಗೆಯೂ ಸಂಪುಟದಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಅಲ್ಲದೇ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡುವ ಕುರಿತು ಸಂಪುಟದಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.