Advertisement

ಹಿಂದಿಗೆ ಬೆಣ್ಣೆ, ಕನ್ನಡಕ್ಕೆ ಸುಣ್ಣ: ಬಿಜೆಪಿ ಸರ್ಕಾರದ ವಿರುದ್ಧ ಎಚ್ ಡಿಕೆ ಕಿಡಿ

11:52 AM Oct 29, 2022 | Team Udayavani |

ಬೆಂಗಳೂರು: ಪೇದೆ ಆಯ್ಕೆಗೆ ಅರ್ಜಿ ಕರೆದಿರುವ ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ (ಎಸ್ಎಸ್ ಸಿ) ಹಿಂದಿ, ಇಂಗ್ಲೀಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿದೆ. ಹಾಗಾದರೆ, ಕನ್ನಡವೂ ಸೇರಿ ಇತರೆ ಪ್ರಾದೇಶಿಕ ಭಾಷೆಗಳನ್ನು ಮಾತನಾಡುವ ಅಭ್ಯರ್ಥಿಗಳು ಏನು ಮಾಡಬೇಕು? ಹಿಂದಿಗೆ ಬೆಣ್ಣೆ, ಕನ್ನಡಕ್ಕೆ ಸುಣ್ಣ! ಇದೆಂಥಾ ನ್ಯಾಯ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಸರಣಿ ಟ್ವೀಟ್ ಮಾಡಿರುವ ಅವರು, ಗಡಿ ಭದ್ರತಾ ಪಡೆ, ಕೇಂದ್ರೀಯ ಕೈಗಾರಿಕಾ ಪಡೆ, ಕೇಂದ್ರ ಪೊಲೀಸ್ ಮೀಸಲು ಪಡೆ, ಇಂಡೋ ಟಿಬೆಟಿಯನ್ ಗಡಿ ಪೊಲೀಸ್, ಸಶಸ್ತ್ರ ಸೀಮಾಬಲ, ಸಚಿವಾಲಯ ಭದ್ರತಾ ಪಡೆ, ಅಸ್ಸಾಂ ರೈಫಲ್ಸ್, ಮಾದಕ ವಸ್ತು ನಿಯಂತ್ರಣಾ ಇಲಾಖೆ ಸೇರಿ ಹಲವು ವಿಭಾಗಗಳಿಗೆ ಪೇದೆಗಳ ಆಯ್ಕೆಗೆ ಜನವರಿಯಲ್ಲಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ಕೇವಲ ಹಿಂದಿ, ಇಂಗ್ಲೀಷ್ ನಲ್ಲಿ ಮಾತ್ರ ಇರುತ್ತದೆ. ಅಲ್ಲಿಗೆ ಹಿಂದಿ ಭಾಷಿಕರು ಬಿಟ್ಟರೆ ಬೇರೆ ಯಾರೂ ಆಯ್ಕೆ ಆಗಲೇಬಾರದು ಎನ್ನುವ ಹುನ್ನಾರ ಇದರಲ್ಲಿ ಅಡಗಿದೆ ಎಂದು ಆರೋಪಿಸಿದ್ದಾರೆ.

ನನ್ನ ಅಭಿಪ್ರಾಯದಲ್ಲಿ ಇದು ಕನ್ನಡ ವಿರೋಧಿ ಅಷ್ಟೇ ಅಲ್ಲ; ಭಾರತವನ್ನು ಉತ್ತರ, ದಕ್ಷಿಣ ಎಂದು ವಿಭಜಿಸಲು ಕೇಂದ್ರ ಬಿಜೆಪಿ ಸರಕಾರವೇ ಕೊಡುತ್ತಿರುವ ಕುಮ್ಮಕ್ಕು. ಕೇಂದ್ರ ಬಿಜೆಪಿ ಸರಕಾರ ಈ ಅಪಾಯದ ಅರಿವು ಮಾಡಿಕೊಂಡು, ಕೂಡಲೇ ಈ ಕನ್ನಡ ವಿರೋಧಿ ಆದೇಶ ಹಿಂಪಡೆದು, ಹೊಸ ಆದೇಶ ಹೊರಡಿಸಿ ಕನ್ನಡವೂ ಸೇರಿ ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ಇಲ್ಲವಾದರೆ, ಬೀದಿಗಿಳಿದು ಕನ್ನಡಿಗರ ಶಕ್ತಿ ಏನೆಂದು ತೋರಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋಟಿ ಕಂಠ ಗಾಯನ ಎಂದರೆ ಕೋಟಿಗೂ ಹೆಚ್ಚು ಕನ್ನಡ ಕಂಠಗಳಿಗೆ ಜೀವ ತುಂಬುವುದು, ಅನ್ನದ ದಾರಿ ತೋರಿಸುವುದು, ಬದುಕಿನ ಖಾತರಿ ಕೊಡುವುದು. ಕೇವಲ ನಾಲಿಗೆ ಮೇಲೆ ಕನ್ನಡ ಎಂದು ಹೇಳಿ, ಮನದಾಳದಲ್ಲಿ ಅದೇ ಕನ್ನಡದ ಮೇಲೆ ವಿಷ ಕಕ್ಕುವುದಲ್ಲ. ಅದನ್ನು ಕನ್ನಡಿಗರು ಎಂದಿಗೂ ಸಹಿಸುವುದೂ ಅಲ್ಲ ಎಂದು ಹೇಳಿದ್ದಾರೆ.

ನಿನ್ನೆಯಷ್ಟೇ ಕೋಟಿ ಕಂಠ ಗಾಯನ ಕಾರ್ಯಕ್ರಮ ಮಾಡಿದ ರಾಜ್ಯ ಬಿಜೆಪಿ ಸರಕಾರ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಏನು ಹೇಳುತ್ತದೆ? ಕೋಟಿ ಕಂಠ ಗಾಯನ ಎನ್ನುತ್ತಲೇ ಕನ್ನಡದ ಕತ್ತು ಸೀಳುವುದಾ? ಕನ್ನಡಿಗರ ಅನ್ನ ಕಸಿದುಕೊಳ್ಳುವುದಾ? ಕನ್ನಡಿಗರ ಹಕ್ಕುಗಳಿಗೆ ಮರಣಶಾಸನ ಬರೆಯುವುದಾ? ಕನ್ನಡಿಗರಿಗೆ ಬೇಕಿದೆ ಉತ್ತರ ಎಂದು ಆಗ್ರಹಿಸಿದ್ದಾರೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next