Advertisement
ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಟೀಕಾಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿಗಳು; ತಕ್ಷಣವೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಪಡಿಸಿದ್ದಾರೆ.
Related Articles
Advertisement
1962ರಿಂದಲೂ ಕಾವೇರಿ ಕೊಳ್ಳದ ರೈತರಿಗಾಗಿ ಹೆಚ್.ಡಿ.ದೇವೇಗೌಡರು ಜೀವವನ್ನೇ ತೇದರು. ಕಾವೇರಿಗಾಗಿ ಹಿಂದಿನ ಪ್ರತೀ ಸರಕಾರವೂ ಕೇಂದ್ರಕ್ಕೆ ಸಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದವು. ಇಂಥ ಕೆಚ್ಚಿನ ಕರ್ನಾಟಕದ ಇತಿಹಾಸದಲ್ಲೇ ಈ ಸರಕಾರವು, ನೆರೆರಾಜ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದಾಕ್ಷಣ ಬೆದರಿ ಕೈ ಚೆಲ್ಲಿದೆ ಎಂದು ಅವರು ಹೇಳಿದ್ದಾರೆ.
ಸಂಕಷ್ಟ ಸ್ಥಿತಿಯ ಬಗ್ಗೆ ರಾಜ್ಯ ಕಾಂಗ್ರೆಸ್ ಸರಕಾರ ಸುಪ್ರೀಂಕೋರ್ಟ್ ಗೆ ಮನವರಿಕೆ ಮಾಡಿಕೊಡಲಿಲ್ಲ ಯಾಕೆ? ಕಾನೂನು ತಜ್ಞರ ಜತೆ, ಪ್ರತಿಪಕ್ಷ ಮುಖಂಡರ ಜತೆ ಸಮಾಲೋಚನೆ ನಡೆಸದೇ ವಾಯುವೇಗದಲ್ಲಿ ತಮಿಳುನಾಡಿಗೆ ನೀರು ಹರಿಸಿದ ಒಳಗುಟ್ಟೇನು? ಜನತೆಗೆ ಗೊತ್ತಾಗಬೇಕಿದೆ ಎಂದು ಅವರು ತಿಳಿಸಿದ್ದಾರೆ.
ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿವರ್ಯರು, ತಾವು ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ? ಅವರು ಸ್ಪಷ್ಟಪಡಿಸಬೇಕಿದೆ. ಕಾವೇರಿ ಕೀಲಿ ಕೇಂದ್ರ ಬಳಿ ಇದೆ ಎಂದಾದರೆ ಇವರ ಹೊಣೆ ಏನು? ಆ ಕೀಲಿ ಈಗ ಸ್ಟಾಲಿನ್ ಅವರ ಕೈಯ್ಯಲ್ಲಿದೆಯೋ ಅಥವಾ ಸೋನಿಯಾ ಗಾಂಧಿ ಅವರ ಕೈಯ್ಯಲ್ಲಿದೆಯೋ ಎಂದು ಮಾಜಿ ಮುಖ್ಯಮಂತ್ರಿ ಅವರು ಕೇಳಿದ್ದಾರೆ.
ಇದನ್ನೂ ಓದಿ:ಸೌಜನ್ಯ ಪ್ರಕರಣವನ್ನು ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಪ್ರಮೋದ್ ಮುತಾಲಿಕ್
ತಾಕತ್ತಿದ್ದರೆ ಕೋರ್ಟಿಗೆ ಹೋಗಿ ಎಂದು ರೈತರಿಗೆ ಉಪ ಮುಖ್ಯಮಂತ್ರಿಗಳು ಹೇಳಿರುವುದು ದರ್ಪ, ದುರಹಂಕಾರದ ಪರಾಕಾಷ್ಠೆ. ನಿತ್ಯವೂ ಸಾವಿರಾರು ಕ್ಯೂಸೆಕ್ ಕಾವೇರಿ ನೀರು ನೆರೆರಾಜ್ಯಕ್ಕೆ ಹರಿದು ಹೋಗುತ್ತಿದೆ. ಇನ್ನೂ 10 ಟಿಎಂಸಿ ಬಿಡುತ್ತೇವೆ ಎಂದು ಅವರು ಹೇಳಿರುವುದು ಸರಿಯಲ್ಲ? ಎಂದಿದ್ದಾರೆ ಅವರು.
ಕನ್ನಡಿಗರು ಕೊಟ್ಟ ಪೆನ್ ಈಗ ಗನ್ ರೂಪ ತಳೆದಿದೆಯಾ ಹೇಗೆ? ಕನ್ನಡಿಗರನ್ನು ಕೇಳಿಕೇಳಿ ಪಡೆದುಕೊಂಡ ಪೆನ್ ಈಗ ಪೆಚ್ಚಗೆ, ತೆಪ್ಪಗೆ ಮಲಗಿದೆಯಾ? ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರವೇ ರಾಜ್ಯದ ಜಲ ಸಂಕಷ್ಟದ ಬಗ್ಗೆ ಸಭೆಯಲ್ಲೇ ಅಂಕಿ-ಅಂಶ ಸಮೇತ ಹೇಳಿದೆ. ಪಾಪ. ಜಲ ಸಂಪನ್ಮೂಲ ಸಚಿವರಿಗೆ ಈ ಬಗ್ಗೆ ಮಾಹಿತಿ ಇಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.
ಕಾವೇರಿ ವಿಷಯದಲ್ಲಿ ಕಾಂಗ್ರೆಸ್ಸಿನದು ಸದಾ ಎರಡು ನಾಲಿಗೆ! ಕಾವೇರಿ ಪಾಲಿಗೆ ಆ ಪಕ್ಷ ನಯವಂಚನೆ, ನಂಬಿಕೆ ದ್ರೋಹದ ಪ್ರತೀಕ. ಅಧಿಕಾರಕ್ಕೆ ಬಂದು 100 ದಿನ ಕಳೆಯುವ ಮುನ್ನವೇ ಕೊಳ್ಳಿ ಇಡುವ ಕೆಲಸ ಮಾಡಿಬಿಟ್ಟಿದೆ. ಈ ಅನ್ಯಾಯ ಸಹಿಸುವ ಪ್ರಶ್ನೆಯೇ ಇಲ್ಲ.ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು. ಸಂಕಷ್ಟಸೂತ್ರದ ಪಾಲನೆಗೆ ಒತ್ತಡ ಹೇರಬೇಕು ಹಾಗೂ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಪಕ್ಷ ಸಭೆ ಕರೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಅವರು ಒತ್ತಾಯ ಮಾಡಿದ್ದಾರೆ.