Advertisement

 ಕಾಂಗ್ರೆಸ್ ನ ದೌಲತ್ತೇ ಅದರ ದುಸ್ಥಿತಿಗೆ ಕಾರಣ, ನಾವೇನು ಗುಲಾಮರಲ್ಲ: ಕಿಡಿಕಾರಿದ ಎಚ್ ಡಿಕೆ

04:04 PM Dec 07, 2020 | keerthan |

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಅವಿಶ್ವಾಸ ನಿರ್ಣಯದ ವೇಳೆ ಬೆಂಬಲ ನೀಡುವಂತೆ ಕಾಂಗ್ರೆಸ್ ನ ಯಾವ ನಾಯಕನೂ ಸೌಜನ್ಯಕ್ಕೂ ಜೆಡಿಎಸ್ ಬಳಿ ಚರ್ಚಿಸಿಲ್ಲ. ಹೀಗಿದ್ದೂ, ಜೆಡಿಎಸ್ ನ ಜಾತ್ಯತೀತತೆಯ ಪರೀಕ್ಷೆ ನಡೆಯುತ್ತದೆ ಎಂಬ ಸಿದ್ದರಾಮಯ್ಯ ಹೇಳಿಕೆ ದುರಹಂಕಾರದ್ದು. ಬೆಂಬಲ ಕೇಳದಿದ್ದರೂ ಬೆಂಬಲಿಸಲು ನಾವೇನು ಗುಲಾಮರಲ್ಲ. ಕಾಂಗ್ರೆಸ್ ನ ದೌಲತ್ತೇ ಅದರ ದುಸ್ಥಿತಿಗೆ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Advertisement

ತಾವು ಮೈಸೂರಿನಲ್ಲಿ ನೀಡಿದ್ದ ‘ಸರ್ಕಾರ ಪತನ’ ಹೇಳಿಕೆಗೆ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಮಾಡಿದ್ದ ಟೀಕೆಗಳಿಗೆ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ.

ಪರಿಷತ್ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯದ ವೇಳೆ ಜೆಡಿಎಸ್ ನ ಜಾತ್ಯತೀತತೆ ಬಹಿರಂಗವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ & ಸಿದ್ದರಾಮಯ್ಯರ ದೃಷ್ಟಿಯಲ್ಲಿ ಜಾತ್ಯತೀತತೆ ಅಂದರೆ ಏನು? ಇದನ್ನು ಈ ವೇಳೆಯಲ್ಲಿ ತಿಳಿಯ ಬಯಸುತ್ತೇನೆ. ಕಾಂಗ್ರೆಸ್ ನ ಅಪವ್ಯಾಖ್ಯಾನದಿಂದಲೇ ಇಂದು ಜಾತ್ಯತೀತೆಯನ್ನು ಅನುಮಾನಿಸಲಾಗುತ್ತಿದೆ. “ನಮ್ಮ ಧರ್ಮ, ದೇವರಲ್ಲಿ ಆಳ ನಂಬಿಕೆ ಹೊಂದಿಯೂ, ಎಲ್ಲರ ನಂಬಿಕೆಗಳನ್ನು ಗೌರವಿಸುವುದು, ಎಲ್ಲರನ್ನೂ ಸಮಾನವಾಗಿ ಕಾಣುವುದು” ದೇವೇಗೌಡರ ಜಾತ್ಯತೀತೆ ಎಂಬುದನ್ನು ಸಂದರ್ಭ ಸಿಕ್ಕಾಗ ಹೇಳಿದ್ದೇನೆ. ಆದರೆ ಕಾಂಗ್ರೆಸ್, ಸಿದ್ದರಾಮಯ್ಯರ ವ್ಯಾಖ್ಯಾನ ಇದಕ್ಕೆ ವಿರುದ್ಧವಾದ್ದು. ಜಾತಿಗಳನ್ನು ಒಡೆಯುವುದು, ಅನಗತ್ಯ ಓಲೈಕೆಯೇ ಅವರ ಜಾತ್ಯತೀತತೆ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ:ಗುರು-ಶಿಷ್ಯರ ಭೇಟಿ: ಬಹಳ ದಿನಗಳ ನಂತರ ವಿಧಾನಸೌಧದಲ್ಲಿ ಸಿದ್ದರಾಮಯ್ಯ- ಮುನಿರತ್ನ ಪಟ್ಟಾಂಗ!

ಸಿದ್ದರಾಮಯ್ಯನವರು ಒಳ್ಳೆ ಇಮೇಜ್ ಅನ್ನು ಚುನಾವಣೆ ಮತ್ತು ಸ್ಥಾನಗಳಿಕೆ ಮೇಲೆ ಲೆಕ್ಕ ಹಾಕಿದ್ದಾರೆ. ಹಾಗಾದರೆ ದೇಶದ ಎಲ್ಲ ಕಡೆ ಸೋಲುತ್ತಿರುವ ಕಾಂಗ್ರೆಸ್ ನ ಇಮೇಜ್ ಕತೆ ಏನು? 2018ರ ಚುನಾವಣೆಯಲ್ಲಿ 120 ರಿಂದ 80ಕ್ಕೆ ಕುಸಿದ, ಸ್ವತಃ ಚಾಮುಂಡೇಶ್ವರಿಯಲ್ಲಿ ಸೋತ ಸಿದ್ದರಾಮಯ್ಯನವರಿಗೆ ಇಮೇಜ್ ಇತ್ತೇ? ಇಮೇಜ್ ಇರುವುದು ನಮ್ಮ ಒಳ್ಳೆತನದಲ್ಲಿ ಎಂದರು.

Advertisement

ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂಬ ಕಾಂಗ್ರೆಸ್ಸಿಗರ ಸವಕಲು ಆರೋಪಕ್ಕೆ ಈ ಹಿಂದೆಯೇ ಉತ್ತರ ನೀಡಿದ್ದೇನೆ. ಈಗಲೂ ಹೇಳುತ್ತೇನೆ. ಕಾಂಗ್ರೆಸ್ಸೇ ಜೆಡಿಎಸ್ ನ ಬಿ ಟೀಂ. ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಪಕ್ಕದಲ್ಲಿ ಆವರಣ (ಬ್ರಾಕೆಟ್) ಹಾಕಿ ಅದರಲ್ಲಿ ಜೆಡಿಎಸ್ ಎಂದು ಬರೆದಾಗಷ್ಟೇ ಅದರ ಹೆಸರು ಪೂರ್ಣವಾಗುತ್ತದೆ. ಅಷ್ಟರ ಮಟ್ಟಿಗೆ ಅಲ್ಲಿ ಜೆಡಿಎಸ್ ಇದೆ ಎಂದು ಟೀಕೆಗೆ ಉತ್ತರಿಸಿದರು.

ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದ್ದು ಕುಮಾರಸ್ವಾಮಿ ಅವರನ್ನು ಸಿಎಂ ಮಾಡಿದ್ದು ಹೈಕಮಾಂಡ್ ಎಂದು ಹೇಳಿದ್ದಾರೆ. ಅಂದರೆ ಹೈಕಮಾಂಡ್ ನ ನಿರ್ಣಯ ತಮಗೆ ಇಷ್ಟವಿರಲಿಲ್ಲ ಎಂಬುವುದು ಸಿದ್ದರಾಮಯ್ಯ ಅವರ ಮಾತಿನಲ್ಲಿ ಧ್ವನಿಸುತ್ತಿರುವ ಅರ್ಥ. ಹೀಗಾಗಿಯೇ ಸಿದ್ದರಾಮಯ್ಯ ಸರ್ಕಾರ ಕೆಡವಿದರು. ಅದರ ಅಪವಾದ ಬೇರೆಯವರಿಗೆ ಬಳಿದರು ಎಂದು ಎಚ್ ಡಿಕೆ ಆರೋಪಿಸಿದರು.

ಜಾತ್ಯತೀತ ನಿಲುವಿನ ಬಗ್ಗೆ ದೇವೇಗೌಡರ ಬದ್ದತೆ ಬಗ್ಗೆ ನಾವು ನಿಮ್ಮಿಂದ ಉಪದೇಶ ಕೇಳಬೇಕಿಲ್ಲ. ದೇವೇಗೌಡರ ಬದ್ಧತೆಯನ್ನು ಬಳಸಿಕೊಂಡು ಬ್ಲ್ಯಾಕ್ ಮೇಲ್ ಮಾಡಿದ ಕಾಂಗ್ರೆಸ್, ಇವತ್ತು ಜೆಡಿಎಸ್ ನ ನಿಲುವನ್ನು ಪ್ರಶ್ನಿಸುವ ಯಾವ ನೈತಿಕತೆ ಉಳಿಸಿಕೊಂಡಿದೆ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಕುರಿತು ಪಕ್ಷದ ನಾಯಕರ ಜೊತೆ ಸಮಾಲೋಚನೆ ನಡೆಸಿದ ಡಿ.ಕೆ.ಶಿ

ಇನ್ನು ಫೈವ್ ಸ್ಟಾರ್ ಸಂಸ್ಕೃತಿ ಬಗ್ಗೆ ರಾಗ ಎಳೆದಿದ್ದಿರಿ? ಫೈವ್ ಸ್ಟಾರ್ ಹಾಗೂ ಗುಡಿಸಲಿನಿಂದಲೂ ಅಧಿಕಾರ ನಡೆಸಿದ್ದೇನೆ. ಜನತೆಗೆ ನನ್ನಷ್ಟು ಸುಲಭವಾಗಿ ದಕ್ಕುವ ರಾಜಕಾರಣಿ ಮತ್ತೊಬ್ಬರಿಲ್ಲ ಎಂಬುವುದನ್ನು ನೆನಪಿಸಲು ಬಯಸುತ್ತೇನೆ ಎಂದರು.

ನಿಮ್ಮ ತಾಳಕ್ಕೆ ಕುಣಿಯಲು ಜೆಡಿಎಸ್ ಗುಲಾಮಿ ಸಂಸ್ಕೃತಿಯ ಪಕ್ಷವಲ್ಲ. ರಾಜ್ಯದ ಇಂದಿನ ರಾಜಕಾರಣದ ಅಯೋಮಯ ಸ್ಥಿತಿಗೆ ನಿಮ್ಮ ದ್ವಂದ್ವ ಹಾಗೂ ಇಬ್ಬಂದಿತನದ ನಿಲುವೇ ಕಾರಣ ಎಂದು ಕುಮಾರಸ್ವಾಮಿ ತಮ್ಮ ಮೇಲಿನ ಟೀಕೆಗಳಿಗೆ ತಿರುಗೇಟು ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next