Advertisement

ಆಲ್ಕೋಹಾಲಾದರೇನು, ಹಾಲಾದರೇನು? ಇವರಿಗೆ ಖಜಾನೆ ತುಂಬಬೇಕಷ್ಟೇ: ಎಚ್ ಡಿಕೆ ಟೀಕೆ

12:25 PM Jul 22, 2023 | Team Udayavani |

ಬೆಂಗಳೂರು: ಹಾಲಿನ ದರವನ್ನು ಲೀಟರಿಗೆ ಮೂರು ರೂ. ಹೆಚ್ಚಿಸಿದ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಸರ್ಕಾರಕ್ಕೆ ಆಲ್ಕೋಹಾಲಾದರೇನು, ಹಾಲಾದರೇನು? ಖಜಾನೆ ತುಂಬಬೇಕಷ್ಟೇ ಎಂದು ತಿವಿದಿದ್ದಾರೆ.

Advertisement

ಸರಣಿ ಟ್ವೀಟ್ ಮಾಡಿರುವ ಅವರು, ಆಲ್ಕೋಹಾಲಿನ ಬೆಲೆ ಏರಿಸಿದ ನಂತರ ಕಾಂಗ್ರೆಸ್ ಸರಕಾರ ಹಾಲಿನ ಬೆಲೆಯನ್ನೂ ಲೀಟರಿಗೆ 3 ರೂ ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಬಾಯಿ ಬಾಯಿ ಬಡಿದುಕೊಂಡಿತ್ತು. ದೊಡ್ಡ ಬಾನಗಡಿಯನ್ನೇ ಎಬ್ಬಿಸಿತ್ತು. ಅಧಿಕಾರಕ್ಕೆ ಬಂದೊಡನೆ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದೆ. ಹೀಗಿದೆ ನೋಡಿ ಕೈ ಕರಾಮತ್ತು. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತನೀತಿಗೆ ಧಿಕ್ಕಾರ. ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈ ತೊಳೆದುಕೊಂಡಿದೆ ಎಂದಿದ್ದಾರೆ.

ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next