Advertisement

ಭಾರತ ಜೋಡೋದಿಂದ ಜನರ ಸಮಸ್ಯೆ ಬಗೆಹರಿಯಲ್ಲ: ಎಚ್‌.ಡಿ. ಕುಮಾರಸ್ವಾಮಿ

08:35 PM Oct 27, 2022 | Team Udayavani |

ಬೆಂಗಳೂರು: ರಾಷ್ಟ್ರೀಯ ಪಕ್ಷಗಳು ಜೋಡೋ ಯಾತ್ರೆ, ಸಂಕಲ್ಪ ಯಾತ್ರೆ ಸೇರಿ ಯಾವ ಯಾತ್ರೆಯನ್ನಾದರೂ ಮಾಡಿಕೊಳ್ಳಲಿ. ಆದರೆ, 2023ಕ್ಕೆ ಜೆಡಿಎಸ್‌ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಬಸವನಗುಡಿಯಲ್ಲಿ ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಿದ ಬಳಿಕ ಸಭೆಯಲ್ಲಿ ಮಾತನಾಡಿದ ಅವರು, ಭಾರತ ಜೋಡೋದಿಂದ ಜನರ ಸಮಸ್ಯೆ ಬಗೆಹರಿಯುವುದಿಲ್ಲ. ಅವರಿಗಾಗಿ ಕಾರ್ಯಕ್ರಮ ರೂಪಿಸಿದಾಗ ಮಾತ್ರ ಜನರ ಸಮಸ್ಯೆ ಬಗೆಹರಿಯಲಿದೆ ಎಂದು ಕಾಂಗ್ರೆಸ್‌ಗೆ ಟಾಂಗ್‌ ನೀಡಿದರು.

ಬಡವ-ಶ್ರೀಮಂತ ಎಂಬ ತಾರತಮ್ಯವಿಲ್ಲದೆ ಆಧುನಿಕ ಶಿಕ್ಷಣ ಕೊಡಿಸಬೇಕು. ಎಲ್ಲರಿಗೂ ಸಮಾಜ ಆರೋಗ್ಯ ಸೇವೆ ಸಿಗಬೇಕು. ಕೊರೊನಾ ಸಮಯದಲ್ಲಿ ಶಿಕ್ಷಣ ಮತ್ತು ಆರೋಗ್ಯ ಸಮಸ್ಯೆ ನೋಡಿ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಹೇಳಿದರು.

ಮಹಿಳೆಯರಿಗೆ ಮತ್ತು ಯುವಕರಿಗೆ ಪ್ರತಿ ಜಿಲ್ಲೆಯಲ್ಲಿ ಉದ್ಯೋಗ ನೀಡುವ ಯೋಜನೆ ರೂಪಿಸಿದ್ದೆ. ಆದರೆ, ಬಿಜೆಪಿ ಸರ್ಕಾರ ಅದನ್ನು ನಿಲ್ಲಿಸಿದೆ. ಆಂಧ್ರ ಪ್ರದೇಶದಲ್ಲಿ ಅಮರಾವತಿ ಕಟ್ಟುತ್ತೇವೆ ಎಂದು ಪ್ರಧಾನಿ ಮೋದಿ ಮಣ್ಣು ತೆಗೆದುಕೊಂಡು ಹೋದರು. ಈಗ ಬಿಜೆಪಿ ಸರ್ಕಾರ ಕೆಂಪೇಗೌಡರ ಹೆಸರಿನಲ್ಲಿ ಪ್ರವಾಸಿ ತಾಣ ಮಾಡಲು ಹೊರಟಿದೆ ಎಂದರು.

ಕೆಂಪೇಗೌಡ ಕೌಶಲ್ಯ ವಿವಿ: ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ಉದ್ದೇಶದಿಂದ ನಾಡಪ್ರಭು ಕೆಂಪೇಗೌಡರ ಹೆಸರಿನಲ್ಲಿ ಮಾಗಡಿಯಲ್ಲಿ ಕೌಶಲ್ಯ ವಿಶ್ವವಿದ್ಯಾಲಯ ಸ್ಥಾಪಿಸಲಾಗುತ್ತದೆ. ಈ ಮೂಲಕ ಎಲ್ಲರಿಗೂ ವೃತ್ತಿಪರ ಶಿಕ್ಷಣ ಸಿಗಬೇಕು ಎಂಬ ಉದ್ದೇಶ ಹೊಂದಲಾಗಿದೆ ಎಂದರು.

Advertisement

ರೈತ ಚೈತನ್ಯ ಕಾರ್ಯಕ್ರಮ: ತೆಲಂಗಾಣದಲ್ಲಿ ರೈತ ಬಂಧು ಕಾರ್ಯಕ್ರಮವಿದೆ. ಅದೇ ರೀತಿಯಲ್ಲಿ ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದರೆ ರೈತ ಚೈತನ್ಯ ಹೆಸರಿನಲ್ಲಿ ಕಾರ್ಯಕ್ರಮ ಘೋಷಿಸಲಾಗುತ್ತದೆ ಎಂದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಕನಿಷ್ಠ 10ರಿಂದ 12 ಕ್ಷೇತ್ರಗಳಲ್ಲಿ ಜೆಡಿಎಸ್‌ ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಕಾರ್ಯನಿರ್ವಹಿಸಬೇಕಿದೆ ಎಂದು ಎಚ್‌.ಡಿ. ಕುಮಾರಸ್ವಾಮಿ ಕಾರ್ಯಕರ್ತರಿಗೆ ಕರೆ ನೀಡಿದರು.

ರಾಜ್ಯಾದ್ಯಂತ ರಥಯಾತ್ರೆ ಮೂಲಕ ಸಂಚರಿಸಿ ಪಕ್ಷ ಸಂಘಟನೆ ಕೆಲಸ ಮಾಡಲಾಗುತ್ತಿದೆ. ಅದೇ ರೀತಿ ರಾಜಧಾನಿಯಲ್ಲಿಯೂ ಕನಿಷ್ಠ 10ರಿಂದ 12 ಕ್ಷೇತ್ರಗಳಲ್ಲಿ ಪಕ್ಷ ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಪಕ್ಷಕ್ಕಾಗಿ ಕೆಲಸ ಮಾಡಬೇಕಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next