Advertisement

ರಾಜ್ಯದಲ್ಲಿ YST ತೆರಿಗೆ ಜಾರಿಗೆ ಬಂದಿದೆ: ರಾಜ್ಯ ಸರಕಾರದ ವಿರುದ್ಧ ಕುಮಾರಸ್ವಾಮಿ ನೇರ ಆರೋಪ

02:15 PM Jul 02, 2023 | Team Udayavani |

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಹೊಸದಾಗಿ ವೈಎಸ್ ಟಿ (YST) ತೆರಿಗೆ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

Advertisement

ಅವರು ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದರು.

ವೈಎಸ್ ಟಿ ಎಂದರೆ ಏನು? ಸ್ವಲ್ಪ ಬಿಡಿಸಿ ಹೇಳಿ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮಧ್ಯರಾತ್ರಿವರೆಗೂ ತಮ್ಮ ಮನೆಗಳಲ್ಲಿ ಅಧಿಕಾರಿಗಳ ಸಭೆ ಮಾಡುವ ಘನಂದಾರಿ ವ್ಯಕ್ತಿಗಳನ್ನು ಕೇಳಿ? ಈಗಾಗಲೇ ವರ್ಗಾವಣೆ ದಂಧೆಗಾಗಿ ಯಾರನ್ನೆಲ್ಲ ಫೀಲ್ಡಿಗೆ ಇಳಿಸಿ ಗುಪ್ತ ಸಭೆಗಳನ್ನು ಮಾಡುತ್ತಿದ್ದಾರೋ ಅವರನ್ನೇ ಕೇಳಿ? ನೀವೂ ಪತ್ತೆ ಹಚ್ಚಿ ಎಂದರು.

ವರ್ಗಾವಣೆ ದಂಧೆ ಬಗ್ಗೆ ತಮ್ಮ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟಿರುವ ಹೇಳಿಕೆ ಬಗ್ಗೆ ಕಿಡಿಕಿಡಿಯಾದ ಮಾಜಿ ಮುಖ್ಯಮಂತ್ರಿಗಳು, ನಾನು ಸಿದ್ದರಾಮಯ್ಯ ಅವರನ್ನು ಕೇಳಲು ಬಯಸುತ್ತೇನೆ. ನಾನು ನಿಮ್ಮ ಪಕ್ಷದ ಜತೆ ಸರಕಾರ ರಚನೆ ಮಾಡಿದ್ದಾಗ ನೀವೆಲ್ಲ ಏನೇನು ಮಾಡಿದ್ದೀರಿ ಎನ್ನುವುದು ಗೊತ್ತಿದೆ. ಪೊಗದಸ್ತಾದ ಇಲಾಖೆಗಳನ್ನು ಇಟ್ಟುಕೊಂಡಿದ್ದ ನಿಮ್ಮ ಮಂತ್ರಿಗಳು ಏನು ಮಾಡಿದರು? ಮುಖ್ಯಮಂತ್ರಿಯಾಗಿ ನಾನು ಯಾವೊಬ್ಬ ಅಧಿಕಾರಿಯನ್ನು ವರ್ಗಾವಣೆ ಮಾಡುವಂತೆಯೇ ಇರಲಿಲ್ಲ. ಎಲ್ಲ ದಂಧೆಗಳು ಯಾರ ಮೂಗಿನಡಿ ನಡೆಯುತ್ತಿದ್ದವು ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಣ ಕೊಟ್ಟು ಪೋಸ್ಟ್ ಪಡೆಯಲು ಬಂದವರನ್ನು ನಾನು ದೂರ ಇಟ್ಟಿದ್ದೆ. ಬಿಡಿಎ ಮೇಲೆ ಬಂದು ಕೊರಲು ಬಂದ ಅಧಿಕಾರಿಗೆ ಹೊರಗಟ್ಟಿದ್ದೆ. ಯಲಹಂಕ ತಹಶಿಲ್ದಾರ್ ಹುದ್ದೆಗೆ ಒಂದೂವರೆ ಕೋಟಿ ಕೊಡ್ತೀವಿ ಅಂದವರನ್ನು ಆಚೆ ಇಟ್ಟಿದ್ದೆ. ಇದು ನಾನು ನಡೆಸಿದ ಆಡಳಿತ. ಈಗ ನೋಡಿದರೆ ವೈಎಸ್ ಟಿ ತೆರಿಗೆ ಅಂತ ಇವರು ಶುರು ಮಾಡಿಕೊಂಡಿದ್ದಾರೆ ಎಂದು ಕಟುವಾಗಿ ಟೀಕೆ ಮಾಡಿದರು.

Advertisement

ವಸೂಲಿ ಮಾಡಿ ವರ್ಗಾವಣೆ ಮಾಡುವ ದಂಧೆ ಮಾಡದೇ ವಸೂಲಿ ಶುರುವಾಗಿದೆ. ಅಧಿಕಾರಿಗಳನ್ನು ಮನೆಯಲ್ಲಿ ಕೂರಿಸಿಕೊಂಡು ರಾತ್ರಿ ಒಂದು ಗಂಟೆಯವರೆಗೆ ಸಭೆ ಮಾಡ್ತಾ ಇದ್ದಾರಲ್ಲಾ.. ಅದು ಏತಕ್ಕೆ? ಸರಕಾರಿ ಕಚೇರಿ ಏಕೆ ಸಭೆಗಳನ್ನು ನಡೆಸಲ್ಲ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಒಂದು ಸರಕಾರ, ಹತ್ತಾರು ಮುಖ್ಯಮಂತ್ರಿಗಳು:
ಕಾಂಗ್ರೆಸ್ ಸರಕಾರದಲ್ಲಿ ಈಗಾಗಲೇ ಆಡಳಿತ ಹಳಿತಪ್ಪಿದೆ. ‘ಒಂದು ಸರಕಾರ, ಹತ್ತಾರು ಮುಖ್ಯಮಂತ್ರಿಗಳು’ ಎನ್ನುವಂತಹ ಪರಿಸ್ಥಿತಿ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ಅವರು ಒಬ್ಬರೇ ಮುಖ್ಯಮಂತ್ರಿ ಅಲ್ಲ. ಇಲಾಖೆಗೊಬ್ಬ ಮುಖ್ಯಮಂತ್ರಿ ಇದ್ದಾರೆ. ಒಬ್ಬೊಬ್ಬರು ಮುಖ್ಯಮಂತ್ರಿಯಂತೆ ಹೇಳಿಕೆ ನೀಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಅವರು ಲೇವಡಿ ಮಾಡಿದರು.

ಇಲ್ಲಿ ಸಿದ್ದರಾಮಯ್ಯ ಒಂದು ಹೇಳ್ತಾರೆ, ಸತೀಶ್ ಜಾರಕಿಹೊಳಿ ಇನ್ನೊಂದು ಹೇಳ್ತಾರೆ. ಹಾಗಾದರೆ, ಇಲ್ಲಿ ಎಷ್ಟು ಜನ ಸಿಎಂಗಳು ಇದ್ದಾರೆ? ಎಂದು ಪ್ರಶ್ನಿಸಿದ ಅವರು; ಇದನ್ನು ಸರ್ಕಾರ ಅಂತ ಕರೀತೀರಾ? ಇಲ್ಲೇನಾದರೂ ಪಾರದರ್ಶಕತೆ ಅನ್ನೋದು ಇದೆಯಾ?

ಬಿಜಿಪಿ ವಿರೋಧಿ ಸಭೆಗೆ ಕರೆದಿಲ್ಲ, ನಾವು ಹೋಗಲ್ಲ:
ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ವಿರೋಧಿ ಪಕ್ಷಗಳ ಸಭೆಗೆ ನಮ್ಮ ಪಕ್ಷಕ್ಕೆ ಆಹ್ವಾನ ಕೊಟ್ಟಿಲ್ಲ, ನಮ್ಮನ್ನು ಯಾರೂ ಕರೆದಿಲ್ಲ. ಹೀಗಾಗಿ ಆ ಸಭೆಗೆ ಹೋಗುವುದಿಲ್ಲ ಎಂದು ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ನಮ್ಮದು ಸಣ್ಣ ಪಕ್ಷ. ಅದನ್ನು ಬೆಳೆಸುತ್ತೇವೆ, ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಅದಕ್ಕಾಗಿ ಸರಣಿ ಸಭೆಗಳನ್ನು ಹಮ್ಮಿಕೊಂಡಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಮಹತ್ವದ ಸಭೆ:
ಪಕ್ಷದ ಕಚೇರಿಯಲ್ಲಿ ಮಹತ್ವದ ಸಭೆ ಕರೆದಿದ್ದೇವೆ. ಈ ಸರ್ಕಾರ ರಚನೆಯಾಗಿ 50 ದಿನ ಆಗಿದೆ. ಪಕ್ಷವನ್ನು ಹೇಗೆ ಸಂಘಟನೆ ಮಾಡಬೇಕು, ಸರಕಾರದ ವಿರುದ್ಧ ಹೋರಾಟಗಳನ್ನು ಹೇಗೆಲ್ಲಾ ಹಮ್ಮಿಕೊಳ್ಳಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ ಎಂದು ಅವರು ಹೇಳಿದರು.

ಕಡಿಮೆ ಶಾಸಕರು ಇದ್ದಾರೆ ಎಂದು ನಾವು ಎದೆಗುಂದುವುದಿಲ್ಲ. ಸದನದ ಒಳಗೆ, ಹೊರಗೆ ಹೋರಾಟ ನಡೆಸುತ್ತೇವೆ. ಯಾವ ವಿಷಯಗಳನ್ನು ಕೈಗೆತ್ತಿಕೊಳ್ಳಬೇಕು ಎಂಬ ಬಗ್ಗೆ ಚರ್ಚೆ ಮಾಡುತ್ತೇವೆ. ಗ್ಯಾರಂಟಿ ಬಗ್ಗೆ ನಾನು ಸದನದಲ್ಲಿ ಚರ್ಚೆ ಮಾಡಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಆಗಿದೆ. ಜನರನ್ನು ಇನ್ನೂ ಎಷ್ಟು ವರ್ಷ ಕೈ ಚಾಚುವಂತೆ ಮಾಡ್ತೀರಾ? ಎಂದು ಕೇಳುತ್ತೇವೆ ಎಂದು ಅವರು ಹೇಳಿದರು.

ಮಾಜಿ ಸಚಿವ ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಶಾಸಕಿ ಕರೆಮ್ಮ ನಾಯಕ ಮುಂತಾದವರು ಹಾಜರಿದ್ದರು.

ಇದನ್ನೂ ಓದಿ: Uttarakhand ಭಾರೀ ಮಳೆ; ಬದರಿನಾಥ ಹೆದ್ದಾರಿ ಬಂದ್: ಭಕ್ತರ ಪರದಾಟ

Advertisement

Udayavani is now on Telegram. Click here to join our channel and stay updated with the latest news.

Next