Advertisement

ಗೌಡರು ಮೈಸೂರಿನಿಂದ ಸ್ಪರ್ಧಿಸ್ತಾರಾ? ಬೆಂಗಳೂರು ಉತ್ತರಕ್ಕೆ ಬರ್ತಾರಾ?

01:02 AM Feb 28, 2019 | |

ಬೆಂಗಳೂರು : ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರಿಗೆ ಮೈಸೂರಿನಿಂದ ಸ್ಪರ್ಧಿಸುವಂತೆ ತೀವ್ರ ಒತ್ತಡ ಹೇರಲಾಗುತ್ತಿದೆ. ಸಚಿವರಾದ ಜಿ.ಟಿ.ದೇವೇಗೌಡ ಹಾಗೂ ಸಾ.ರಾ.ಮಹೇಶ್‌ ಅವರು ಈ ವಿಚಾರದಲ್ಲಿ ಗೌಡರ ಜತೆ ಮಾತುಕತೆ ನಡೆಸಿದ್ದಾರೆ. ದೇವೇಗೌಡರು ಮೈಸೂರಿನಿಂದ ಸ್ಪರ್ಧೆ ಮಾಡಿದರೆ ಹಾಸನ, ಮಂಡ್ಯ, ಮೈಸೂರು ಕ್ಷೇತ್ರಗಳಿಗೆ ಅನುಕೂಲವಾಗಲಿದೆ. ಹೀಗಾಗಿ, ಅವರು ಮೈಸೂರಿನಿಂದಲೇ ಸ್ಪರ್ಧೆ ಮಾಡಬೇಕು ಎಂದು ಒತ್ತಡ ಹಾಕುತ್ತಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ದೇವೇಗೌಡರು ಬಯಸಿದರಾದರೂ ಅಲ್ಲಿನ ಸಚಿವರ ಒತ್ತಡಕ್ಕೆ ಮಣಿದು ಮೈಸೂರಿಗೆ ತೆರಳುತ್ತಾರಾ ಎಂಬುದು ಕುತೂಹಲ ಮೂಡಿಸಿದೆ.

Advertisement

ದೇವೇಗೌಡರು ಮೈಸೂರು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದರೆ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಯಾರು ಎಂಬ ಪ್ರಶ್ನೆಯೂ ಇದೆ. ಆಗ, ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟು ಕೊಡಬಹುದು. ಕಾಂಗ್ರೆಸ್‌ ನಿಂದ ಕಳೆದ ಬಾರಿ ಸ್ಪರ್ಧೆ ಮಾಡಿದ್ದ ಸಿ.ನಾರಾಯಣಸ್ವಾಮಿ ಅವರನ್ನೇ ಕಣಕ್ಕಿಳಿಸಬಹುದು ಎಂದು ಹೇಳಲಾಗುತ್ತಿದೆ. ಮಾರ್ಚ್‌ 5 ಅಥವಾ 7ರಂದು ದೆಹಲಿಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ಸೀಟು ಹಂಚಿಕೆ ಕುರಿತು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ನಡುವೆ ಮಾತುಕತೆ ನಡೆಯಲಿದ್ದು, ಆ ವೇಳೆ, ದೇವೇಗೌಡರು ಸ್ಪರ್ಧೆ ಮಾಡಲಿರುವ ಕ್ಷೇತ್ರವೂ ಅಂತಿಮಗೊಳ್ಳಲಿದೆ ಎಂದು ತಿಳಿದು ಬಂದಿದೆ. ಅಲ್ಲದೆ, ಅದೇ ದಿನ ಜಂಟಿ ಸುದ್ದಿಗೋಷ್ಠಿಯಲ್ಲಿ ಸೀಟು ಹಂಚಿಕೆ ಘೋಷಣೆಯಾಗುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.

ಬೆಂಗಳೂರು ಉತ್ತರಕ್ಕೆ ಬರ್ತಾರಾ?
ಬೆಂಗಳೂರು:
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಥಾನ ಹೊಂದಾಣಿಕೆ ಕುರಿತಂತೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಾನ ಹೊಂದಾಣಿಕೆ ಬಗ್ಗೆ ಯಾವುದೇ ರೀತಿಯ ಗೊಂದಲಗಳು ಉಂಟಾಗಿಲ್ಲ. ಈ ಬಗ್ಗೆ ಮೂರ್ನಾಲ್ಕು ದಿನಗಳಲ್ಲಿ ಸ್ಪಷ್ಟ ಚಿತ್ರಣ ದೊರೆಯಲಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಅಭ್ಯರ್ಥಿಗಳು ಕಣಕ್ಕಿಳಿಯುವ ಬಗ್ಗೆ ಒಮ್ಮತದ ನಿರ್ಧಾರ ಕೈಗೊಳ್ಳಲಾಗುವುದುಎಂದು ತಿಳಿಸಿದರು. 

ಬೆಂಗಳೂರು ಉತ್ತರ ಕ್ಷೇತ್ರಕ್ಕೆ ದೇವೇಗೌಡ ಸ್ಪರ್ಧೆ: ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ. ಆದರೆ, ಈ ಬಗ್ಗೆ ಇನ್ನೂ ಯಾವುದೇ ರೀತಿಯ ಅಂತಿಮ ನಿರ್ಧಾರ ಕೈಗೊಂಡಿಲ್ಲ.ಸದ್ಯದಲ್ಲೇ ಸೂಕ್ತವಾದ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next