Advertisement

Wild animals ದಾಳಿ ತಡೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಹೆಚ್ ಡಿಕೆ ಆಗ್ರಹ

04:51 PM Jun 03, 2023 | Team Udayavani |

ರಾಮನಗರ/ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಸೇರಿದಂತೆ ರಾಮನಗರ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ತಡೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರಕ್ಕೆ ಒತ್ತಾಯಿಸಿದ್ದಾರೆ.

Advertisement

ಚನ್ನಪಟ್ಟಣದ ವಿರೂಪಸಂದ್ರ ಗ್ರಾಮದಲ್ಲಿ ಮಾವಿನ ತೋಟ ಕಾಯುತ್ತಿದ್ದ ವೀರಭದ್ರಯ್ಯ ಅವರು ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿ, ಕಾಡಂಚಿನಲ್ಲಿ ರೈತರು ಆತಂಕ, ಭಯದಿಂದ ಬದುಕುವಂತಾಗಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳಬೇಕು. ವೈಜ್ಞಾನಿಕವಾಗಿ ಬೇಲಿ ನಿರ್ಮಾಣ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.

ಅನೆ ದಾಳಿಯಿಂದ ರೈತ ವೀರಭದ್ರಯ್ಯ ಅವರು ಅಸುನೀಗಿದ ವಾರ್ತೆ ಕೇಳಿ ಬಹಳ ದುಃಖ ಉಂಟಾಯಿತು. ಮೃತ ರೈತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಆ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

ಅರಣ್ಯ ಸಂರಕ್ಷಣೆ ಜತೆಗೆ ಕಾಡಿನ ಅಕ್ಕಪಕ್ಕ ಬೇಸಾಯ ಮಾಡುವ ರೈತರ ಹಿತವೂ ಮುಖ್ಯ. ರೈತಾಪಿ ಜನರ ಜೀವ ಅಮೂಲ್ಯ. ಈ ಕಾರಣಕ್ಕಾಗಿ ಅರಣ್ಯ ವಲಯದಲ್ಲಿ ವೈಜ್ಞಾನಿಕ ಬೇಲಿ ನಿರ್ಮಾಣ ಮಾಡಬೇಕು ಎಂದು ನಾನು ಅನೇಕ ಸಲ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದೇನೆ. ಈ ಬಗ್ಗೆ ಇನ್ನಷ್ಟು ವಿಳಂಬ ಮಾಡಬಾರದು ಎಂದು ಒತ್ತಾಯ ಮಾಡಿದ್ದಾರೆ.

ಚನ್ನಪಟ್ಟಣ ಮಾತ್ರವಲ್ಲದೆ, ರಾಮನಗರ ಜಿಲ್ಲೆಯ ನಾನಾ ಭಾಗಗಳಲ್ಲಿ ಜನರ ಮೇಲೆ ಕಾಡುಪ್ರಾಣಿಗಳು ದಾಳಿ ನಡೆಸುವ ಪ್ರಕರಣಗಳು ಮರುಕಳಿಸುತ್ತಲೇ ಇವೆ. ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಕೂಡಲೇ ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎನ್ನುವುದು ನನ್ನ ಆಗ್ರಹ ಎಂದು ಅವರು ತಿಳಿಸಿದ್ದಾರೆ.

Advertisement

ಸಚಿವರು ಈಗಾಗಲೇ ತಿಳಿಸಿರುವಂತೆ, ಕೂಡಲೇ ನೊಂದ ಕುಟುಂಬಕ್ಕೆ ಪರಿಹಾರ ಮೊತ್ತವನ್ನು ಹಸ್ತಾಂತರ ಮಾಡಬೇಕು ಹಾಗೂ ಕಾಡಂಚಿನಲ್ಲಿ ಎಲ್ಲಾ ಸುರಕ್ಷಿತ ಕ್ರಮಗಳನ್ನು ವಹಿಸಿ ಜನರ ಮೇಲೆ ಕಾಡುಪ್ರಾಣಿಗಳ ದಾಳಿ ಆಗದಂತೆ ಶಾಶ್ವತವಾಗಿ ತಡೆಯುವ ಎಲ್ಲಾ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next