Advertisement

ಖುದ್ದು ಹಾಜರಾತಿಯಿಂದ ಎಚ್‌ಡಿಕೆಗೆ ವಿನಾಯಿತಿ

10:48 PM Oct 01, 2019 | Lakshmi GovindaRaju |

ಬೆಂಗಳೂರು: ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್‌ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಖುದ್ದು ಹಾಜರಾತಿಯಿಂದ ಹೈಕೋರ್ಟ್‌ ವಿನಾಯಿತಿ ನೀಡಿದೆ.

Advertisement

ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ವಿಶೇಷ ನ್ಯಾಯಾಲಯ ಜಾರಿಗೊಳಿಸಿರುವ ಸಮನ್ಸ್‌ ರದ್ದುಪಡಿಸುವಂತೆ ಕೋರಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಪಿ.ಜಿ.ಎಂ. ಪಾಟೀಲ್‌ ಅವರಿದ್ದ ರಜಾ ಕಾಲದ ಏಕಸದಸ್ಯ ನ್ಯಾಯಪೀಠ, ಈ ವಿನಾಯಿತಿ ನೀಡಿ ವಿಚಾರಣೆಯನ್ನು ಅ.14ಕ್ಕೆ ಮುಂದೂಡಿತು.

ವಿಚಾರಣೆ ವೇಳೆ ಕುಮಾರಸ್ವಾಮಿ ಪರ ವಕೀಲರು ವಾದ ಮಂಡಿಸಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಗೆ ತಡೆ ನೀಡುವಂತೆ ಕೋರಿದರು. ಆದರೆ, ಮನವಿಯನ್ನು ಪುರಸ್ಕರಿಸಲು ನಿರಾಕರಿಸಿದ ನ್ಯಾಯಪೀಠ, ತಡೆ ಬೇಕಿದ್ದರೆ ಅದನ್ನು ರಜಾ ಕಾಲದ ನಂತರದ “ನಿಯಮಿತ ಪೀಠ’ದಲ್ಲಿ (ರೆಗ್ಯೂಲರ್‌ ಬೆಂಚ್‌) ಕೇಳಿಕೊಳ್ಳಿ. ಸದ್ಯಕ್ಕೆ ಖುದ್ದು ಹಾಜರಾತಿಯಿಂದ ವಿನಾಯಿತಿ ಕೊಡಬಹುದಷ್ಟೇ ಎಂದು ವಿಶೇಷ ನ್ಯಾಯಾಲಯದ ವಿಚಾರಣೆಗೆ ಖುದ್ದು ಹಾಜರಾತಿಯಿಂದ ನಾಲ್ಕು ವಾರ ವಿನಾಯಿತಿ ನೀಡಿ ಆದೇಶಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಅ.4ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕುಮಾರಸ್ವಾಮಿಗೆ ಸಮನ್ಸ್‌ ಜಾರಿಗೊಳಿಸಿತ್ತು. ಹೈಕೋರ್ಟ್‌ ಆದೇಶದಿಂದ ಇದೀಗ ಮಾಜಿ ಮುಖ್ಯಮಂತ್ರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

ಆ್ಯಂಬಿಡೆಂಟ್‌ ವಂಚನೆ ಪ್ರಕರಣ: ರಾಜ್ಯ ಸರ್ಕಾರ, ಸಿಬಿಐಗೆ ನೋಟಿಸ್‌
ಬೆಂಗಳೂರು: ಆ್ಯಂಬಿಡೆಂಟ್‌ ವಂಚನೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಈ ಕುರಿತಂತೆ “ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ’ಯ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ನ್ಯಾ. ಎಚ್‌.ಟಿ. ನರೇಂದ್ರ ಪ್ರಸಾದ್‌ ಹಾಗೂ ನ್ಯಾ. ಅಶೋಕ್‌ ಎಸ್‌. ಕಿಣಗಿ ಅವರಿದ್ದ ರಜಾ ಕಾಲದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

Advertisement

ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಗೃಹ ಇಲಾಖೆ, ಸಿಬಿಐ, ರಾಜ್ಯ ಪೊಲೀಸ್‌ ಮಹಾನಿರ್ದೇಶಕರು, ಸಿಸಿಬಿ ಡಿಸಿಪಿ (ಅಪರಾಧ) ಇವರಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು. ಅರ್ಜಿದಾರರ ಪರ ವಕೀಲ ಜಿ.ಆರ್‌. ಮೋಹನ್‌ ವಾದ ಮಂಡಿಸಿದರು. ಆ್ಯಂಬಿಡೆಂಟ್‌ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯ ಆಗಿನ ಎಸಿಪಿ 2018ರ ನ.28ರಂದು ಡಿಸಿಪಿಗೆ ಬರೆದ ಪತ್ರದ ಅಂಶಗಳನ್ನು ಆಧರಿಸಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು.

ವಿಶೇಷ ನ್ಯಾಯಾಲಯಕ್ಕೆ ಸಿಬಿಐ ಅಂತಿಮ ವರದಿ ಸಲ್ಲಿಸುವ ತನಕ ಸ್ವತಃ ಹೈಕೋರ್ಟ್‌ ತನಿಖೆಯ ಮೇಲ್ವಿಚಾರಣೆ ವಹಿಸಬೇಕು. ಪ್ರಕರಣ ಇತ್ಯರ್ಥಗೊಳ್ಳುವವರೆಗೆ ಸಿಸಿಬಿಯ ಎಸಿಪಿ ಸಲ್ಲಿಸಿರುವ ದಾಖಲೆ ಹಾಗೂ ಇತರ ವಸ್ತುಗಳನ್ನು ಸುರಕ್ಷಿತ ಕಸ್ಟಡಿಯಲ್ಲಿಡುವಂತೆ ಗೃಹ ಇಲಾಖೆ ಹಾಗೂ ಸಿಸಿಬಿಗೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next