Advertisement

ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ.. : ಸರಕಾರದ ವಿರುದ್ಧ ಎಚ್ ಡಿಕೆ ಧಿಕ್ಕಾರ

01:06 PM Oct 11, 2021 | Team Udayavani |

ಬೆಂಗಳೂರು : ನಿಮ್ಹಾನ್ಸ್ 25ನೇ ಘಟಿಕೋತ್ಸವದಲ್ಲಿ ಕನ್ನಡ ಭಾಷೆಗೆ ಪ್ರಮುಖ ಆಧ್ಯತೆ ನೀಡದ ಕುರಿತಾಗಿ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸರಕಾರದ ವಿರುದ್ಧ ಸರಣಿ ಟ್ವೀಟ್ ಮಾಡುವ ಮೂಲಕ ಸೋಮವಾರ ಆಕ್ರೋಶ ಹೊರ ಹಾಕಿದ್ದಾರೆ.

Advertisement

ಸಮಾರಂಭದಲ್ಲಿ ಹಿಂದಿ ಮತ್ತು ಇಂಗ್ಲಿಷ್ ಭಾಷೆಯ ನಡುವೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕನ್ನಡದಲ್ಲಿ ಭಾಷಣ ಮಾಡಿದ್ದರು. ಭಾಷಣದ ವೇಳೆ ಇಂಗ್ಲಿಷ್, ಹಿಂದಿ ಆಯಿತು ಕನ್ನಡವೂ ಇರಲಿ ಎಂದಾಗ ನೆರೆದಿದ್ದವರು ಚಪ್ಪಾಳೆ ಹೊಡೆದು ಸ್ವಾಗತಿಸಿದ್ದರು.

ಎಚ್.ಡಿಕೆ ಮಾಡಿರುವ ಟ್ವೀಟ್ ಗಳು ಹೀಗಿವೆ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ! ಇಂಗ್ಲೀಷ್ʼಗೆ ದ್ವಿತೀಯ ಸ್ಥಾನ! ಕನ್ನಡಕ್ಕೆ ಮೂರನೇ ಸ್ಥಾನ!! ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ನಿದರ್ಶನ ಇನ್ನೊಂದಿಲ್ಲ.

ವೇದಿಕೆಯ ಮೇಲೆ ರಾಜ್ಯದ ಮುಖ್ಯಮಂತ್ರಿ, ಒಬ್ಬ ಸಚಿವರು, ಇಬ್ಬರು ಸಂಸದರು ಇದ್ದರು. ಸಾವಿರಾರು ವರ್ಷಗಳ ಘನ ಇತಿಹಾಸವುಳ್ಳ ಅಭಿಜಾತ ಭಾಷೆ ಕನ್ನಡವನ್ನು 3ನೇ ಸ್ಥಾನಕ್ಕಿಳಿಸಿದ್ದ ಆ ವೇದಿಕೆಯ ಮೇಲೆ ಕೂರಲು ಅವರಿಗೆ ಮನಃಸಾಕ್ಷಿಯಾದರೂ ಹೇಗೆ ಬಂತು? ಈ ಮೂವರ ಕನ್ನಡಾಭಿಮಾನ ಶೂನ್ಯತೆಗೆ ನನ್ನ ಧಿಕ್ಕಾರ.

Advertisement

ರಾಷ್ಟ್ರೀಯ ಪಕ್ಷಗಳ ದಾದಾಗಿರಿ ದಿನೇದಿನೆ ಹೆಚ್ಚುತ್ತಿದೆ. ನಮ್ಮ ನಾಡು-ನುಡಿಯ ಮೇಲೆ ದಿಲ್ಲಿ ರಾಜಕಾರಣ ನಡೆಸುತ್ತಿರುವ ಆಕ್ರಮಣ ಸ್ವಾತಂತ್ರ್ಯಕ್ಕೂ ಮುನ್ನ ವಿದೇಶಿ ಆಕ್ರಮಣಕಾರರು ನಡೆಸಿದ ದಾಳಿಗಿಂತ ಹೇಯವಾಗಿದೆ. ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ?

ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ? ಕನ್ನಡವನ್ನು ಕರ್ನಾಟದಿಂದಲೇ ಮೂಲೋತ್ಪಾಟನೆ ಮಾಡಬೇಕು ಎಂಬುದು ಬಿಜೆಪಿಯ ಹಿಡನ್ ಅಜೆಂಡಾವೇ

ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ. ಕೇಂದ್ರ ಪರೀಕ್ಷೆಯಲ್ಲಿ ಅನ್ಯಾಯ, ನೇಮಕಾತಿಯಲ್ಲಿ ನಮ್ಮವರ ಕಡೆಗಣನೆ. ಒಕ್ಕೂಟ ವ್ಯವಸ್ಥೆಯಲ್ಲಿ ಪರಕೀಯರಂತೆ ಎರಡನೇ ದರ್ಜೆ ಪ್ರಜೆಗಳಾಗಿ ನಾವು ಕೊಳೆಯಬೇಕಾ?

ಸ್ವಾಭಿಮಾನಿ ಕನ್ನಡಿಗರೆಲ್ಲರೂ ಸಿಡಿದೇಳೋಣ. ಕರ್ನಾಟಕದಲ್ಲಿ ಕನ್ನಡವೇ ಮೊದಲು. #ನಮ್ಮಕನ್ನಡ #ನಮ್ಮಕರ್ನಾಟಕ ಎಂದು ಸರಣಿ ಟ್ವೀಟ್ ಗಳ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next