ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡ ರನ್ನು ಗುರಿಯಾಗಿಸಿ ಐಟಿ ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕಳೆದ ವರ್ಷ ಮಾರ್ಚ್‌ನಲ್ಲಿ ಆದಾಯ ತೆರಿಗೆ ಕಚೇರಿ ಎದುರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಲ್ಲಿಸಿರುವ ಅರ್ಜಿ ಸಂಬಂಧ ಪೊಲೀಸರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬಿ.ಎ. ಪಾಟೀಲ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಕಮರ್ಷಿಯಲ್‌ಸ್ಟ್ರೀಟ್ ಠಾಣಾ ಪೊಲೀಸರಿಗೆ ಹಾಗೂ ಪ್ರಕರಣದ ಖಾಸಗಿ ದೂರುದಾರ ಮಲ್ಲಿಕಾರ್ಜುನ ಅವರಿಗೆ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆ ಮುಂದೂಡಿತು.
2019ರ ಮಾ.27ರಂದು ಮತ್ತು 28ರಂದು ರಾಜ್ಯದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಮುಖಂಡರ ಮನೆಯ ಮೇಲೆ ಐಟಿ ಇಲಾಖೆ ದಾಳಿ ನಡೆದಿತ್ತು. ಇದರಿಂದ ಮಾ.28ರಂದು ಅಂದಿನ ಸಿಎಂ ಎಚ್.ಡಿ. ಕುಮಾರಸ್ವಾಮಿ, ಸಚಿವ ಸಂಪುಟದ ಸದಸ್ಯರು, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಅನೇಕ ನಾಯಕರು, ನಗರದ ಐಟಿ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು.
ಈ ಬಗ್ಗೆ 2019ರ ಮೇ 2ರಂದು ಮಲ್ಲಿಕಾರ್ಜುನ ಎಂಬುವರು ನಗರದ 82ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದರು. ಆ ದೂರನ್ನು ಮೇ 3ರಂದು ವಿಚಾರಣೆ ನಡೆಸಿದ್ದ ಕೋರ್ಟ್ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಕಮರ್ಷಿಯಲ್ ಸ್ಟ್ರೀಟ್ ಠಾಣೆಯ ಡಿಸಿಪಿಗೆ ಆದೇಶಿಸಿತ್ತು. ಆ ಆದೇಶ ಆಧರಿಸಿ ನ.27ರಂದು ಪೊಲೀಸರು ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.
ತನಿಖೆ ರದ್ದು ಪಡಿಸುವಂತೆ ಕೋಡಿ ಹೈಕೋರ್ಟ್ ಮೆಟ್ಟಿಲೇರಿರುವ ಕುಮಾರಸ್ವಾಮಿ, ತಮ್ಮ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಿರುವುದು ವಾಕ್ ಸ್ವಾತಂತ್ರ್ಯದ ಸ್ಪಷ್ಟ ಉಲ್ಲಂಘನೆ ಎಂದು ದೂರಿದ್ದಾರೆ. ಸಾರ್ವಜನಿಕರ ಹಿತಾಸಕ್ತಿ ದೃಷ್ಟಿಯಿಂದ ಶಾಸಕರು ಕಾನೂನಿನ ಪರಿಧಿಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಹಕ್ಕು ಹೊಂದಿದ್ದಾರೆ. ಐಟಿ ಇಲಾಖೆ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸುವುದು ತಪ್ಪಲ್ಲ ಎಂದು ತಿಳಿಸಿದ್ದಾರೆ.