ಬೆಂಗಳೂರು: ವಿಶ್ವ ಆರೋಗ್ಯ ಸಂಸ್ಥೆಯು “ಎಂಪಾಕ್ಸ್’ (ಮಂಕಿಪಾಕ್ಸ್ ) ಸೋಂಕಿನ ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದ ಹಿನ್ನೆಲೆಯಲ್ಲಿ ಅದನ್ನು ಎದುರಿಸಲು ಎಲ್ಲ ರೀತಿಯ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರಕಾರ ವಿಕ್ಟೋರಿಯ ಆಸ್ಪತ್ರೆಯಲ್ಲಿ 50 ಹಾಸಿಗೆಗಳ ಐದು ಐಸಿಯು ವಿಶೇಷ ವಾರ್ಡ್ ವ್ಯವಸ್ಥೆ ಮಾಡಿದೆ.
ಸದ್ಯಕ್ಕೆ ರಾಜ್ಯದಲ್ಲಷ್ಟೇ ಅಲ್ಲ; ದೇಶದಲ್ಲೇ ಈ ಸೋಂಕು ಕಂಡುಬಂದಿಲ್ಲ. ಹಾಗಾಗಿ, ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ. ಹರಡುವ ಅಪಾಯವೂ ತುಂಬಾ ಕಡಿಮೆ. ದರೂ ಮುನ್ನೆಚ್ಚರಿಕೆಯಾಗಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಡಾ| ಶರಣಪ್ರಕಾಶ ಪಾಟೀಲ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.
ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆ ಯಲ್ಲಿ ಸೋಂಕು ತಪಾಸಣೆ ಸೌಲಭ್ಯ ವಿದ್ದು, ಉಚಿತವಾಗಿ ತಪಾಸಣೆ ನಡೆಸಲಾಗು ವುದು. ಪ್ರಸ್ತುತ 50 ಹಾಸಿಗೆಗಳ ವಿಶೇಷ ವಾರ್ಡ್ ವ್ಯವಸ್ಥೆ ಮಾಡಲಾಗಿದೆ. ಈ ಸಂಬಂಧ ಆರೋಗ್ಯ ಇಲಾಖೆ ಜತೆಗೂ ಚರ್ಚಿಸಲಾಗಿದೆ. ಕೆಂಪೇಗೌಡ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿ ಯುವ ಪ್ರಯಾಣಿಕರ ಸ್ಕ್ರೀನಿಂಗ್ ಮಾಡುವ ಬಗ್ಗೆ ಆರೋಗ್ಯ ಇಲಾಖೆಗೆ ಕೇಂದ್ರ ಸರಕಾರ ಸೂಚನೆ ನೀಡುತ್ತದೆ ಎಂದರು.
ಮಹಿಳಾ ವೈದ್ಯ ಸಿಬಂದಿ ಸುರಕ್ಷತೆಗೆ ಮಾರ್ಗಸೂಚಿ: ಸಚಿವ ಪಾಟೀಲ್
ಕೋಲ್ಕತಾದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ದೇಶಾದ್ಯಂತ ತೀವ್ರ ಪ್ರತಿಭಟನೆ ಬೆನ್ನಲ್ಲೇ ರಾಜ್ಯ ಸರಕಾರವು ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗಳಲ್ಲಿ ವೈದ್ಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಸುರಕ್ಷತೆಗೆ ಒತ್ತುನೀಡಲು ಮುಂದಾಗಿದ್ದು ಈ ಸಂಬಂಧ ಶೀಘ್ರ ಮಾರ್ಗಸೂಚಿ ಹೊರಡಿಸಲು ನಿರ್ಧರಿಸಿದೆ.
ಉದ್ದೇಶಿತ ಕೋಲ್ಕತಾ ಘಟನೆ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ ಪಾಟೀಲ್ ನೇತೃತ್ವದಲ್ಲಿ ಶುಕ್ರವಾರ ವಿಕಾಸಸೌಧದಲ್ಲಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ರಾಜ್ಯದ ಎಲ್ಲ ಸರಕಾರಿ ವೈದ್ಯಕೀಯ ಕಾಲೇಜುಗಳ ನಿರ್ದೇಶಕರು, ಸರಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು, ವೈದ್ಯರ ಸಂಘ-ಸಂಸ್ಥೆಗಳೊಂದಿಗೆ ಸಮಾಲೋಚಿಸಿ ವೈದ್ಯಕೀಯ ಸಿಬಂದಿ ವಿಶೇಷವಾಗಿ ಮಹಿಳಾ ವೈದ್ಯರ ಸುರಕ್ಷತೆಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಸಮಗ್ರ ಮಾರ್ಗಸೂಚಿ ಸಿದ್ಧಪಡಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಮಾರ್ಗಸೂಚಿ ರೂಪುರೇಷೆ ಹೇಗಿರಬೇಕು ಎಂಬುದರ ಬಗ್ಗೆ ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಡಾ| ಸುಜಾತಾ ರಾಠೊಡ್ ಅವರಿಗೆ ಸೂಚನೆ ನೀಡಿದ ಸಚಿವ ಡಾ| ಶರಣಪ್ರಕಾಶ ಪಾಟೀಲ್, ಇದಕ್ಕಾಗಿ ಸರಕಾರಿ ಮಾತ್ರವಲ್ಲ; ಖಾಸಗಿ ಆಸ್ಪತ್ರೆಗಳು, ಮಹಿಳಾ ವೈದ್ಯರು, ಇತರ ಪಾಲುದಾರರೊಂದಿಗೂ ಸಮಾಲೋಚನೆ ನಡೆಸಬೇಕು ಎಂದು ಹೇಳಿದರು.