ಬೆಂಗಳೂರು: ರಾಜ್ಯದಲ್ಲಿ ಖಾಲಿಯಿರುವ ಆರೋಗ್ಯ ನಿರೀಕ್ಷಣಾಧಿಕಾರಿಗಳ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಸರಕಾರ ನೇಮಕ ಮಾಡಿಕೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನ ಪರಿಷತ್‌ನಲ್ಲಿ ಹೇಳಿದರು.
ಶೂನ್ಯ ವೇಳೆಯಲ್ಲಿ ಬಿಜೆಪಿಯ ಕೇಶವ್ ಪ್ರಸಾದ್ ಪ್ರಸ್ತಾಪಿಸಿದ ಪ್ರಶ್ನೆಗೆ ಉತ್ತರಿಸಿ, ಬಹಳ ವರ್ಷಗಳಿಂದ ನೇಮಕಾತಿ ಆಗಿಲ್ಲ. ಶೇ.40ರಷ್ಟು ನಿರೀಕ್ಷಣಾಧಿಕಾರಿಗಳ ಹುದ್ದೆಗಳು ಖಾಲಿ ಇವೆ. ಈಗಾಗಲೇ ಆರೋಗ್ಯ ನಿರೀಕ್ಷಣಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಆರ್ಥಿಕ ಇಲಾಖೆಯ ಒಪ್ಪಿಗೆ ಬೇಕಾಗಿರುವುದರಿಂದ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಆರೋಗ್ಯ ಇಲಾಖೆ ಸೇವಾ ಕ್ಷೇತ್ರ ಆಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿ ಮತ್ತು ಅಧಿಕಾರಿಗಳ ವರ್ಗ ಬೇಕಾಗುತ್ತದೆ. ಆದರೆ ಚಿಕನ್ ಗೂನ್ಯ, ಡೆಂ ಸೇರಿದಂತೆ ಮತ್ತಿತರ ರೋಗಳ ನಿಯಂತ್ರಣಕ್ಕೆ ಆಶಾ ಕಾರ್ಯಕರ್ತೆಯರನ್ನು, ಆರೋಗ್ಯ ಸಿಬ್ಬಂದಿಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಇಲಾಖೆ ಉತ್ಸುಕವಾಗಿದ್ದು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಅಧಿಕಾರಿಗಳನ್ನು ನೇಮಕ್ಕೆ ಮುಂದಾಗಿದೆ ಎಂದು ಹೇಳಿದರು.
ಶುಚಿತ್ವ ಯೋಜನೆ ಪುನರ್ ಆರಂಭ
ಶೂನ್ಯ ವೇಳೆಯಲ್ಲಿ ಬಿಜೆಪಿಯ ಹೇಮಲತಾ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಸಚಿವರು, ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಶುಚಿತ್ವ ಯೋಜನೆಗೆ ಚಾಲನೆ ನೀಡಲಾಗಿತ್ತು. ಆದರೆ ಕೋವಿಡ್ ಅನಂತರ ಈ ಯೋಜನೆ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಆ ಯೋಜನೆಗೆ ಚಾಲನೆ ನೀಡಲಾಗಿದೆ. ಶುಚಿತ್ವ ಯೋಜನೆ ಸ್ಥಗಿತಗೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.
ಶುಚಿ ಯೋಜನೆಯಿಂದ ಹಲವು ಅನುಕೂಲಗಳು ಇವೆ. ಶುಚಿ ಯೋಜನೆಯಡಿ ಪ್ರೌಢಶಾಲೆ, ಕಾಲೇಜು ಹಾಗೂ ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ ಕಿನ್ ನೀಡಲಾಗುತ್ತಿದೆ. ಈಗಾಗಲೇ ಶಾಲಾ ಕಾಲೇಜುಗಳಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ ಕಿನ್ ನೀಡುವ ಕೆಲಸ ನಡೆದಿದೆ. ಸೆಪ್ಟೆಂಬರ್ ವೇಳೆಗೆ ಎಲ್ಲ ಶಾಲಾ-ಕಾಲೇಜುಗಳಿಗೆ ಸಂಪೂರ್ಣವಾಗಿ ಸ್ಯಾನಿಟರಿ ನ್ಯಾಪ್ ಕಿನ್ ಪೂರೈಕೆ ಮಾಡಲಾಗುವುದು ಎಂದರು.