ಜೇವರ್ಗಿ: ವಿವಿಧ ಆಸ್ಪತ್ರೆಗಳು, ಸಂಘ- ಸಂಸ್ಥೆಗಳಿಂದ ಏರ್ಪಡಿಸುವ ಉಚಿತ ಆರೋಗ್ಯ ತಪಾಸಣೆ ಶಿಬಿರಗಳು ಬಡವರು, ಮಧ್ಯಮ ವರ್ಗದವರಿಗೆ ವರದಾನವಾಗಿವೆ ಎಂದು ಡಾ| ಅಜಯಸಿಂಗ್ ಹೇಳಿದರು.
ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ, ಆರೋಗ್ಯ ಇಲಾಖೆ, ತಾಲೂಕು ಆಡಳಿತದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಆರೋಗ್ಯ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.
ಒತ್ತಡದ ಜೀವನದಲ್ಲಿ ಆರೋಗ್ಯದ ಕಾಳಜಿ ವಹಿಸದೇ ಇರುವುದರಿಂದ ಅನೇಕ ರೋಗಗಳಿಗೆ ತುತ್ತಾಗುವಂತಾಗಿದೆ. ಕಾರಣ ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ನಾವು ಆರೋಗ್ಯವಾಗಿದ್ದರೆ ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯ. ಇಂತಹ ತಪಾಸಣೆ ಶಿಬಿರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಪ್ರತಿ ವರ್ಷ ಧರ್ಮಸಿಂಗ್ ಫೌಂಡೇಶನ್ ವತಿಯಿಂದ ಉಚಿತ ಆರೋಗ್ಯ ಶಿಬಿರ, ನೇತೃ ಶಿಬಿರ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರುತ್ತಿದ್ದು, ತಾಲೂಕಿನ ಹಲವಾರು ಜನರಿಗೆ ಶಸ್ತ್ರ ಚಿಕಿತ್ಸೆ ಮಾಡಿಸಿ ಗುಣಪಡಿಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ| ಶರಣಬಸಪ್ಪ ಗಣಜಲಖೇಡ ಮಾತನಾಡಿ, ಹೆಚ್ಚಿನ ವೆಚ್ಚ ಭರಿಸಿ ತಪಾಸಣೆ ಮಾಡಿಸಿಕೊಳ್ಳಲು ಬಡವರಿಗೆ ಕಷ್ಟ. ಇಂತಹ ಶಿಬಿರಗಳಿಂದ ಅನುಕೂಲವಾಗಲಿದೆ ಎಂದರು. ತಾಲೂಕು ಆರೋಗ್ಯಾಧಿಕಾರಿ ಡಾ| ಸಿದ್ಧು ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.
ತಹಶೀಲ್ದಾರ್ ವಿನಯಕುಮಾರ ಪಾಟೀಲ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅಬ್ದುಲ್ ನಬಿ, ಡಾ| ಶಂಕರೆಪ್ಪ ಎಸ್, ವಿಭಾಗೀಯ ಸಹನಿರ್ದೇಶಕಿ ಡಾ| ಲಕ್ಷ್ಮೀಬಾಯಿ ಅತಿಥಿಗಳಾಗಿ ಆಗಮಿಸಿದ್ದರು