Advertisement

29ರಂದು ಆರೋಗ್ಯ ಮೇಳ-ಜಾಗೃತಿ

05:49 PM Apr 23, 2022 | Team Udayavani |

ಬೆಳಗಾವಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ತಾಲೂಕು ಮಟ್ಟದ ಉಚಿತ ಆರೋಗ್ಯ ಮೇಳ ಹಾಗೂ ರಾಷ್ಟ್ರೀಯ ಕಾರ್ಯಕ್ರಮಗಳ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಅದರಂತೆ ಇದೇ ದಿ. 29 ರಂದು ನಗರದ ವಡಗಾವಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಾಲೂಕಾ ಮಟ್ಟದ ಆರೋಗ್ಯ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಶಿಕಾಂತ ಮುನ್ಯಾಳ ಹೇಳಿದರು.

Advertisement

ತಾಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಒಂದು ಕ್ರಿಯಾ ಯೋಜನೆ ತಯಾರಿಸಿಕೊಂಡು ತಾಲೂಕಿನ ಎಲ್ಲ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು. ತಜ್ಞ ವೈದ್ಯರನ್ನು ಹುಕ್ಕೇರಿ, ಚಿಕ್ಕೋಡಿ, ಬೈಲಹೊಂಗಲ ಹಾಗೂ ಖಾನಾಪೂರ ತಾಲೂಕುಗಳಿಂದ ನಿಯೋಜನೆ ಮಾಡಿಕೊಳ್ಳಬೇಕು ಎಂದರು.

ಬೆಳಗಾವಿ ತಾಲೂಕಾ ವೈದ್ಯಾಧಿಕಾರಿ ಡಾ| ಶಿವಾನಂದ ಮಾಸ್ತಿಹೊಳಿ ಮಾತನಾಡಿ, ಆರೋಗ್ಯ ಮೇಳದಲ್ಲಿ ವಸ್ತು ಪ್ರದರ್ಶನ, ಪೌಷ್ಟಿಕ ಆಹಾರದ ಪ್ರಾತ್ಯಕ್ಷಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಂತೆ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ ಡೋಸ್‌ ಲಸಿಕೆ ನೀಡಲಾಗುವುದು ಎಂದು ಹೇಳಿದರು.

ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ. ಸಂಜಯ ಡುಮ್ಮಗೋಳ ಮಾತನಾಡಿ, ಪಾಲಿಕೆಯ ವಾಹನಗಳ ಮೂಲಕ ಆರೋಗ್ಯ ಮೇಳದ ಪ್ರಚಾರ ಮತ್ತು ಮೇಳಕ್ಕೆ ಔಷಧ, ಕುಡಿಯುವ ನೀರಿನ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ ದಾನವಾಡಕರ ಮಾತನಾಡಿ, ಅಸಾಂಕ್ರಾಮಿಕ ರೋಗಗಳ ಬಗ್ಗೆ ಸಾರ್ವಜನಿಕರಿಗೆ ತಿಳಿವಳಿಕೆ ಇರುವದಿಲ್ಲ. ಅಂಥವರನ್ನು ಗುರುತಿಸಿ ಕರೆತರಬೇಕು. ಅದರಂತೆ ನರೇಗಾ ಕಾರ್ಮಿಕರನ್ನು ಕರೆತರಲು ಪಿ.ಡಿ.ಒ ಗಳಿಗೆ ಸೂಚಿಸಲಾಗುವುದು. ಎಲ್ಲ ವೈದ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತಿಗಳಲ್ಲಿ ಸಭೆ ನಡೆಸಿ ಉಚಿತ ಆರೋಗ್ಯ ಮೇಳದ ಬಗ್ಗೆ ತಿಳಿಸಬೇಕು.

Advertisement

ಮೇಳದಲ್ಲಿ 7 ರಿಂದ 8 ಸಾವಿರ ಜನರ ತಪಾಸಣೆ ಮಾಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು. ಸಭೆಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಬಿ.ಎನ್‌. ತುಕ್ಕಾರ, ಜಿಲ್ಲಾ ಆಯುಷ್‌ ಅಧಿಕಾರಿ ಡಾ. ಎಸ್‌.ಬಿ. ಸುಣಧೋಳಿ ಉಪಸ್ಥಿರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next