ಬೆಂಗಳೂರು: ದುಷ್ಕರ್ಮಿಯಿಂದ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲೋಕಾಯುಕ್ತ ನ್ಯಾ.ವಿಶ್ವನಾಥ ಶೆಟ್ಟಿ ಅವರನ್ನು ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್, ಪಿಯೂಷ್ ಗೋಯೆಲ್, ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಸೇರಿ ಪ್ರಮುಖ ನಾಯಕರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಇವರಲ್ಲದೆ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಮೇಯರ್
ಸಂಪತ್‌ರಾಜ್, ರಾಜ್ಯ ಮಾನವ ಹಕ್ಕುಗಳ ಮಾಜಿ ಅಧ್ಯಕ್ಷ ನ್ಯಾ.ಎಸ್.ಆರ್.ನಾಯಕ್ ಸೇರಿ ಹಲವು ಗಣ್ಯರು ಮಲ್ಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರಲ್ಲದೆ, ಕುಟುಂಬಕ್ಕೆ ಧೈರ್ಯ ಹೇಳಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪಿಯೂಷ್ ಗೋಯೆಲ್, ವಿಶ್ವನಾಥ್ ಶೆಟ್ಟಿ ಅವರ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡು ಬಂದಿದ್ದು, ಯಾವುದೇ ಪ್ರಾಣಪಾಯವಿಲ್ಲ ಎಂದು ವೈದ್ಯರು ತಿಳಿಸಿರುವುದಾಗಿ ಹೇಳಿದರು. ಅಲ್ಲದೆ, ಲೋಕಾಯುಕ್ತರ ಹತ್ಯೆ ಯತ್ನ ತಿಳಿದು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೂ ಆತಂಕ ವ್ಯಕ್ತಪಡಿಸಿದ್ದಾರೆ ಎಂದರು.