ಚಿತ್ರದುರ್ಗ: ಗ್ರಾಮ ಪಂಚಾಯತಿ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರದ ಬಳಿ ಭಾರೀ ಜನ ಸೇರಿದ್ದಾರೆ.
ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ನಡೆಯುತ್ತಿರುವ ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ.
ಅಭ್ಯರ್ಥಿಗಳ ಏಜಂಟರಿಗೆ ಮಾತ್ರ ಮತ ಎಣಿಕೆ ಕೇಂದ್ರಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರದ ಹೊರ ಭಾಗದಲ್ಲಿ ಶಾಮಿಯಾನ ಹಾಕಿ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆ ನಡೆಯುತ್ತಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಏಜಂಟರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ.
ಗೆಲುವು ಸಾಧಿಸಿದ ಅಭ್ಯರ್ಥಿಗಳ ಹೆಸರು ಹಾಗೂ ಪಡೆದ ಮತಗಳ ಸಂಖ್ಯೆಯನ್ನು ಧ್ವನಿವರ್ಧಕದ ಮೂಲಕ ಪ್ರಕಟ ಮಾಡಲಾಗುತ್ತಿದೆ. ಗೆದ್ದ ಅಭ್ಯರ್ಥಿಗಳ ಬೆಂಬಲಿಗರು ಹರ್ಷೋದ್ಘಾರ ಮಾಡುತ್ತಾ ಸಾಗುತ್ತಿದ್ದಾರೆ. ಕೇಂದ್ರದ ಸುತ್ತ ನಿಷೇಧಾಜ್ಞೆ , ಜನಜಂಗುಳಿ ಸೇರಿದ್ದು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ.
ಇದನ್ನೂ ಓದಿ:ಇಂಗ್ಲೆಂಡ್ ಪ್ರಯಾಣಿಕರಿಗೆ ರಾಜ್ಯ ಪ್ರವೇಶ ಇನ್ನೂ ಮುಕ್ತ
ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಭೇಟಿ ನೀಡಿ ಪರಿಶೀಲಿಸಿ, ಮತ ಎಣಿಕೆ ಸುಗಮವಾಗಿ ನಡೆಯುತ್ತಿದೆ. ಸಂಜೆ 6 ಗಂಟೆ ವೇಳೆಗೆ ಸಂಪೂರ್ಣ ಚಿತ್ರಣ ಸಿಗಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.