Advertisement

ಹಲವೆಡೆ ಧಾರಾಕಾರ ಮಳೆ

07:18 AM Jul 18, 2020 | mahesh |

ಚಿಕ್ಕಮಗಳೂರು/ಮಡಿಕೇರಿ: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಬುಧವಾರ ರಾತ್ರಿಯಿಂದಲೇ ಮೂಡಿಗೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಕುದುರೆಮುಖ, ಕಳಸ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿ ಪ್ರದೇಶದಲ್ಲೂ ಮಳೆಯಾಗುತ್ತಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ.

Advertisement

ಉತ್ತರ ಕನ್ನಡ ಜಿಲ್ಲೆ ಹೊನ್ನಾವರ, ಕಾರವಾರ, ಅಂಕೋಲಾ, ಕುಮಟಾ, ಭಟ್ಕಳದಲ್ಲೂ ಭಾರೀ ಮಳೆಯಾಗಿದೆ. ಕೊಡಗಿನಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಕಾವೇರಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ದಕ್ಷಿಣ ಕೊಡಗಿನ ಬಿರುನಾಣಿ ರಸ್ತೆಯ ಸೇತುವೆ ಮೇಲೆ ನೀರು ಹರಿದಿದೆ. ಬ್ರಹ್ಮಗಿರಿ ಅರಣ್ಯ ವ್ಯಾಪ್ತಿಯ ಈ ಪ್ರದೇಶದ ಜನರು ಸಂಪರ್ಕ ಕಡಿತಕ್ಕೆ ಒಳಗಾಗಿದ್ದಾರೆ. ಕಕ್ಕಟ್ಟ್ ಪೊಳೆ ತುಂಬಿ ಹರಿಯುತ್ತಿದೆ. ಲಕ್ಷ್ಮಣ ತೀರ್ಥ, ರಾಮ ತೀರ್ಥ ನದಿಯಲ್ಲೂ ನೀರಿನ ಮಟ್ಟ ಏರಿಕೆಯಾಗಿದೆ.

ಹಾರಂಗಿ ನೀರು ಬಿಡುಗಡೆ
ಹಾರಂಗಿ ಜಲಾಶಯ ಬಹುತೇಕ ಭರ್ತಿಯಾಗುವ ಹಂತ ತಲುಪಿದ್ದು, ಶುಕ್ರವಾರ 4 ಕ್ರಸ್ಟ್‌ ಗೇಟ್‌ಗಳ ಮೂಲಕ ನೀರನ್ನು ಹೊರ ಬಿಡಲಾಗಿದೆ. ಬೆಳಗ್ಗೆ ಜಲಾಶಯದ ಕ್ರಸ್ಟ್‌ ಗೇಟ್‌ಗಳಿಗೆ ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್‌ ಪೂಜೆ ಸಲ್ಲಿಸುವುದರೊಂದಿಗೆ ಸೈರನ್‌ ಮೊಳಗಿಸುವ ಮೂಲಕ 2,500 ಕ್ಯುಸೆಕ್‌ ನೀರನ್ನು ನದಿಗೆ ಹರಿಸಲಾಯಿತು. ಕಳೆದ ಎರಡು ವರ್ಷಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಹಿನ್ನೆಲೆಯಲ್ಲಿ ಈ ಬಾರಿ ಜಲಾಶಯ ಭರ್ತಿಗೆ 6 ಅಡಿ ಬಾಕಿ ಇರುವಾಗಲೇ ನೀರು ಹೊರಬಿಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next