ಶಿವಮೊಗ್ಗ: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಎಲ್ಲ ಶಾಲೆಗಳಿಗೆ ಸೋಮವಾರ (ಜು.24) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ಪರಿಸ್ಥಿತಿ ಅನುಗುಣವಾಗಿ ರಜೆ ನೀಡಲು ಆಯಾ ಕಾಲೇಜು ಪ್ರಾಂಶುಪಾಲರಿಗೆ ಅವಕಾಶ ನೀಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶಿಸಿದೆ.
ಈಗಾಗಲೆ ಭದ್ರಾವತಿ, ಸಾಗರ, ಹೊಸನಗರ, ತೀರ್ಥಹಳ್ಳಿ, ಸೊರಬ, ಶಿಕಾರಿಪುರ ಕೆಲ ಕಾಲೇಜುಗಳಲ್ಲಿ ಪ್ರಾಂಶುಪಾಲರು ರಜೆ ಘೋಷಿಸಿದ್ದಾರೆ.
ನಾಲ್ಕು ದಿನಗಳಿಂದ ಮಳೆ ಅಬ್ಬರಿಸುತ್ತಿದ್ದು ಶನಿವಾರ ರಾತ್ರಿಯಿಂದ ಮಳೆ ಬಿರುಸುಗೊಂಡಿದೆ. ಭಾನುವಾರ ಇಡೀ ದಿನ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಸೋಮವಾರ ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ.