ಉಡುಪಿ/ಮಂಗಳೂರು:ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಶುಕ್ರವಾರ ಮತ್ತು ಶನಿವಾರ ರಜೆ ಘೋಷಿಸಿರುವುದಾಗಿ ಜಿಲ್ಲಾಡಳಿತ ತಿಳಿಸಿದೆ.
ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಭಾಗದಲ್ಲಿ ನಿನ್ನೆ ರಾತ್ರಿಯಿಂದ ಸತತ ಮಳೆಯಾಗುತ್ತಿದ್ದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಮತ್ತು ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಮಂಗಳೂರಿನಲ್ಲಿಯೂ ಇಂದು, ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಶಾಲಾ, ಕಾಲೇಜು ಮಕ್ಕಳ ಪರದಾಟ:
ಇಂದು ಬೆಳಗ್ಗೆಯೂ ಮಳೆ ಸುರಿಯುತ್ತಿದ್ದರೆ, ಮತ್ತೊಂದೆಡೆ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಿಂದಾಗಿ ಇಂದು ಶಾಲೆಗೆ ರಜೆ ಇದೆಯೋ ಇಲ್ಲವೊ ಎಂಬ ಗೊಂದಲದ ನಡುವೆಯೇ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಿದ್ದರು. ಮಕ್ಕಳು ಶಾಲೆಗೆ ತಲುಪುವಷ್ಟರಲ್ಲಿ ಉಭಯ ಜಿಲ್ಲೆಯ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದರು. ಶಾಲೆಗೆ ಹೋಗಿದ್ದ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು ಮಳೆಯ ನಡುವೆಯೇ ವಾಪಸ್ ಬಂದಿದ್ದಾರೆ.
ಮೂರು ದಿನ ಭಾರೀ ಮಳೆ ಸಾಧ್ಯತೆ:
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದಿರುವುದಾಗಿ ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.