ಚೆನ್ನೈ: ಚೆನ್ನೈನಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅಷ್ಟೇ ಅಲ್ಲ ಭಾರೀ ಮಳೆಯ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ ಎಂದು ವರದಿ ತಿಳಿಸಿದೆ.
ಸಂಚಾರ ವ್ಯವಸ್ಥೆ ಅಸ್ತವ್ಯಸ್ತ ಪರಿಣಾಮ ಸೋಮವಾರ(ನವೆಂಬರ್ 08) ಬಹುತೇಕ ಸರ್ಕಾರಿ ಕಚೇರಿಗಳು ಬಂದ್ ಆಗಿದ್ದು, ಖಾಸಗಿ ಕಚೇರಿಯ ಉದ್ಯೋಗಿಗಳಿಗೆ ರಜೆ ನೀಡಿ ಅಥವಾ ವರ್ಕ್ ಫ್ರಂ ಹೋಮ್ ಕೊಡುವಂತೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮನವಿ ಮಾಡಿಕೊಂಡಿದ್ದಾರೆ.
ಭಾನುವಾರ ಬೆಳಗ್ಗೆವರೆಗೆ ಚೆನ್ನೈನಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದವು. ಬರೋಬ್ಬರಿ 21 ಸೆಂಟಿ ಮೀಟರ್ ಮಳೆ ಸುರಿದಿರುವುದಾಗಿ ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾದ ಚಂಡಮಾರುತದ ಪರಿಣಾಮ ತಮಿಳುನಾಡಿನ ಉತ್ತರ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಿತ್ತು. ಅಲ್ಲದೇ ಮಂಗಳವಾರ ಮತ್ತು ಬುಧವಾರ ಕೂಡಾ ಭಾರೀ ಮಳೆಯಾಗಲಿದೆ ಎಂದು ಅಧಿಕಾರಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ.