ಬೆಂಗಳೂರು: ರಾಜ್ಯದಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸೂಚನೆ ನೀಡಿದ್ದಾರೆ.
ಸಚಿವರುಗಳು, ಶಾಸಕರು ಕ್ಷೇತ್ರ ಬಿಟ್ಟು ಹೋಗದಂತೆ ಸೂಚನೆ ನೀಡಿರುವ ಮುಖ್ಯಮಂತ್ರಿಗಳು, ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುವುದು ಸ್ಥಳದಲ್ಲಿಯೇ ಪರಿಹಾರ ವಿತರಣೆ ಸೇರಿದಂತೆ ಇತರೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಈಗಾಗಲೇ 50 ಕೋಟಿ ಹಣ ಬಿಡುಗಡೆ ಮಾಡಿದ್ದು ಅಗತ್ಯ ಇದ್ದರೆ ಇನ್ನಷ್ಟು ಹಣ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ.
ರಾಜ್ಯದಲ್ಲಿ ಕಳೆದ ವಾರದಿಂದ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ 19 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ತಿಳಿಸಿದ್ದಾರೆ.
ಕಳೆದ ಸಾಲಿನಲ್ಲಿ ಸಹ ಇದೇ ತಿಂಗಳಿನಲ್ಲಿ ಇಂತಹ ಪರಿಸ್ಥಿತಿ ಉಂಟಾಗಿತ್ತು, ಪ್ರಸ್ತುತ ಪರಿಸ್ಥಿತಿ ಕುರಿತು ಮುಂದಾಗಬಹುದಾದ ಪ್ರವಾಹ ಪರಿಸ್ಥಿತಿ ಎದುರಿಸಲು ಕಳೆದ ಏಪ್ರಿಲ್‍ನಿಂದ ವಿವಿಧ ಪೂರ್ವಭಾವಿ ಸಿದ್ಧತೆ ಸಭೆಗಳನ್ನು ಹಮ್ಮಿಕೊಳ್ಳಲಾಗಿತ್ತು, ರಾಜ್ಯದ ಮಳೆ ಪರಿಸ್ಥಿತಿ, ಮಳೆ ಮುನ್ಸೂಚನೆ ಮತ್ತು ಜಲಾಶಯಗಳ ನೀರಿನ ಮಟ್ಟದ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಿರಂತರವಾಗಿ ಚರ್ಚಿಸಲಾಗುತ್ತಿದೆ.
ರಾಜ್ಯದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ಜಿಲ್ಲಾದಿಕಾರಿಗಳಿಗೆ ಇಂದಿನಿಂದ ರೆಡ್ ಅಲರ್ಟ್ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.