ಬೆಂಗಳೂರು: ತಮಿಳುನಾಡಿನ ಕರಾವಳಿಯ ಸಮುದ್ರದಲ್ಲಿ 1.8 ಮೀ. ಎತ್ತರದಲ್ಲಿ ಮೇಲ್ಮೈ ಸುಳಿಗಾಳಿ, ನೈರುತ್ಯ ಬಂಗಾಳಕೊಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ರಾಜಸ್ಥಾನದಿಂದ ಈಶಾನ್ಯ ಭಾಗದವರೆಗೂ ಟ್ರಫ್ (ತಗ್ಗಿದ ಸುಳಿಗಾಳಿ) ಇರುವ ಪರಿಣಾಮ ರಾಜ್ಯಾದ್ಯಂತ ಮುಂದಿನ 3 ದಿನ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ, ದಕ್ಷಿಣ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅ.13ರ ವರೆಗೂ ಮಳೆ ಮುಂದುವರಿಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜ್ಯದ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯಾಗುವ ಮುನ್ಸೂಚನೆಯಿದೆ ಎಂದು ತಿಳಿಸಿದೆ.
ಕೊಪ್ಪಳ, ಮೈಸೂರಲ್ಲಿ 8 ಸೆಂ.ಮೀ. ಮಳೆ: ರಾಜ್ಯದಲ್ಲಿ ಭಾನುವಾರ ಉತ್ತಮ ಮಳೆಯಾಗಿದ್ದು, ಕೊಪ್ಪಳ ಜಿಲ್ಲೆಯ ಬೇವೂರು, ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ತಲಾ 8 ಸೆಂ.ಮೀ. ಹಾಗೂ ಹುಣಸೂರು, ಶ್ರೀರಂಗಪಟ್ಟಣದಲ್ಲಿ ತಲಾ 7 ಸೆಂ.ಮೀ. ಮಳೆಯಾಗಿದೆ. ಹಾವೇರಿ, ಚಾಮರಾಜನಗರ, ಹಾಸನ, ದಾವಣಗೆರೆ ಸೇರಿ ವಿವಿಧೆಡೆ ಉತ್ತಮ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ವಿಜ್ಞಾನಿ ಎ. ಪ್ರಸಾದ್ ತಿಳಿಸಿದ್ದಾರೆ.