ಬೆಂಗಳೂರು: ರಾಜ್ಯದಲ್ಲಿ ಮಳೆ ಹೆಚ್ಚಾಗುತ್ತಿದ್ದು ಪ್ರವಾಹ ಭೀತಿ ಎದುರಿಸುತ್ತಿರುವ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಪ್ರವಾಹ ಪರಿಸ್ಥಿತಿ ಎದುರಿಸಲು ಏಪ್ರಿಲ್ ನಿಂದಲೇ ಸಿದ್ಧತೆ ಮಾಡಲಾಗಿದೆ. ಮಂಗಳವಾರವೂ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಸಂವಾದ ಮಾಡಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕಾವೇರಿ ಕೊಳ್ಳದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಚಿಕ್ಕಮಗಳೂರು ಹಾಗೂ ಮೂಡಿಗೆರೆಯಲ್ಲಿ ಮನೆಗಳಿಗೆ ಹಾನಿಯಾಗಿದ್ದು ತಕ್ಷಣ 10 ಸಾವಿರ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಉಡುಪಿ, ಉತ್ತರ ಕನ್ನಡದಲ್ಲಿ ಮಳೆಗೆ ಮರ ಬಿದ್ದಿರುವ ವರದಿಯಾಗಿದ್ದು ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಿದ್ದು ಯಾವುದೇ ಜೀವ ಹಾನಿಯಾಗಿರುವ ವರದಿಯಾಗಿಲ್ಲ.
ಮುಂದಿನ ಮೂರು ದಿನ ರಾಜ್ಯಾದ್ಯಂತ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುನ್ನಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ಪ್ರವಾಹ ಭೀತಿ ಇರುವ ಜಿಲ್ಲೆಗಳಾದ ಕೊಡಗು, ದಕ್ಷಿಣ ಕನ್ನಡ, ಧಾರವಾಡ ಹಾಗೂ ಬೆಳಗಾವಿಗೆ ಎನ್ ಡಿಆರ್ ಎಫ್ ತಂಡವನ್ನು ಕಳುಹಿಸಿಕೊಡಲಾಗುವುದು ಎಂದು ಸಚಿವ ಅಶೋಕ್ ತಿಳಿಸಿದ್ದಾರೆ.