Advertisement

ಬೆಳಗಾವಿಯಲ್ಲಿ ಮುಂದುವರೆದ ಮಳೆಯ ಅಬ್ಬರ

09:17 AM Aug 08, 2019 | Hari Prasad |

ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಇನ್ನೂ ಮುಂದುವರೆದಿರುವಂತೆ ಇತ್ತ ಬೆಳಗಾವಿ ಜಿಲ್ಲೆಯಲ್ಲೂ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಮಳೆಗೆ ಮಹಾರಾಷ್ಟ್ರದ ಜಲಾಶಯಗಳು ಭರ್ತಿಯಾಗುತ್ತಿರುವುದರಿಂದ ಭಾರೀ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಇದರಿಂದಾಗಿ ಕೃಷ್ಣಾ ಹಾಗೂ ವೇದಗಂಗಾ ನದಿ ತೀರಗಳ ಚಿಕ್ಕೋಡಿ, ಅಥಣಿ, ರಾಯಬಾಗ, ಕಾಗವಾಡ, ನಿಪ್ಪಾಣಿ ತಾಲೂಕುಗಳಲ್ಲಿ 40ಕ್ಕೂ ಹೆಚ್ಚು ಹಳ್ಳಿಗಳು ತೀವ್ರ ತೊಂದರೆಗೆ ಸಿಲುಕಿವೆ.

Advertisement

ಜಿಲ್ಲೆಯಲ್ಲಿ ಪ್ರವಾಹದಿಂದಾಗಿ 80 ಸಾವಿರ ಹೆಕ್ಟೇರ್ ಪ್ರದೇಶಗಳಲ್ಲಿ ಹೆಚ್ಚು ಬೆಳೆ ಹಾನಿಯಾಗಿದೆ. ಇನ್ನು ಮಹಾರಾಷ್ಟ್ರದ ಅಂಬೋಲಿ ಘಟ್ಟ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಇದರಿಂದ ಜಿಲ್ಲೆಯ ಹಿಡಕಲ್ ಜಲಾಶಯ ಭರ್ತಿಯಾಗಿದೆ. ಜಲಾಶಯಕ್ಕೆ ಈಗ 90ಸಾವಿರ ಕ್ಯೂಸೆಕ್ಸ್ ನೀರು ಬರುತ್ತಿದ್ದು ಜಲಾಶಯದಿಂದ 70ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ.

ಅದೇ ರೀತಿ ಖಾನಾಪುರ ತಾಲೂಕಿನಲ್ಲಿ ಸಹ ಭಾರೀ ಮಳೆಯಾಗುತ್ತಿದ್ದು ಮಲಪ್ರಭಾ ಜಲಾಶಯ ಬಹುತೇಕ ಭರ್ತಿಯಾಗಿದೆ. ಜಲಾಶಯಕ್ಕೆ ಈಗ 70ಸಾವಿರ ಕ್ಯೂಸೆಕ್ಸ್ ನೀರು ಬರುತ್ತಿದ್ದು 60ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. ಬೆಳಗಾವಿ ನಗರದಲ್ಲಿ ನಿರಂತರವಾಗಿ ದಾರಾಕಾರ ಮಳೆಯಾಗುತ್ತಿದ್ದು ದಕ್ಷಿಣ ಕ್ಷೇತ್ರದಲ್ಲಿ ಬಹುತೇಕ ಪ್ರದೇಶಗಳು ಜಲಾವೃತಗೊಂಡಿವೆ.

ಮರಾಠಾ ಕಾಲನಿ. ಕಪಿಲೇಶ್ವರ ಕಾಲನಿ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ರಸ್ತೆಗಳ ಮೇಲೆ ನಾಲ್ಕು ಅಡಿಗಳಷ್ಟು ನೀರು ನಿಂತಿದ್ದು ಸಾರ್ವಜನಿಕರು ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ಇದರ ಮಧ್ಯೆ ಶಾಸಕ ಅಭಯ ಪಾಟೀಲ ಹಾಗೂ ಅವರ ತಂಡ ಪರಿಹಾರ ಹಾಗೂ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next