ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ ಮೇಲ್ಮೆ„ ಸುಳಿಗಾಳಿಯಿಂದಾಗಿ ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಭಾನುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಮೂಲ್ಕಿಯಲ್ಲಿ ರಾಜ್ಯದಲ್ಲಿಯೇ ಅಧಿಕ, 12 ಸೆಂ.ಮೀ.ಗಳಷ್ಟು ಮಳೆ ಸುರಿಯಿತು.
ರಾಜಧಾನಿ ಬೆಂಗಳೂರು ಸುತ್ತಮುತ್ತ ದಿನವಿಡಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತ್ತು. ಮಲೆನಾಡು, ಕರಾವಳಿಯಾದ್ಯಂತ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಪರಿಸ್ಥಿತಿ ನೋಡಿಕೊಂಡು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಅಧಿಕಾರವನ್ನು ಆಯಾ ತಾಲೂಕುಗಳ ತಹಶೀಲ್ದಾರರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಲಾಗಿದೆ.
ಇದೇ ವೇಳೆ, ಮಹಾರಾಷ್ಟ್ರ ಹಾಗೂ ಕಲಬುರಗಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ಭೀಮಾ ನದಿ ತುಂಬಿ ಹರಿಯುತ್ತಿದ್ದು, ಪ್ರಮುಖ ಸೇತುವೆಗಳು ಮುಳುಗಡೆಯಾಗಿವೆ. ನದಿ ಪಾತ್ರದ ಗ್ರಾಮಗಳ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಸೊನ್ನ ಭೀಮಾ ಜಲಾಶಯದ ಒಟ್ಟು 29 ಗೇಟ್‌ಗಳ ಪೈಕಿ 18 ಗೇಟ್‌ಗಳಿಂದ ನೀರನ್ನು ಹೊರಬಿಡಲಾಗುತ್ತಿದೆ ಎಂದು ಅ ಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.
ನೆರೆಯಿಂದಾಗಿ ಅಫಜಲಪುರ ತಾಲೂಕಿನ ಮಣ್ಣೂರ ಗ್ರಾಮದ ಶಕ್ತಿ ದೇವತೆ ಯಲ್ಲಮ್ಮನ ಗುಡಿ ಮುಳುಗಡೆ ಆಗಿದೆ. ತಾಲೂಕಿನ ಘತ್ತರಗಿ, ದೇವಲ ಗಾಣಗಾಪುರ, ಚಿನಮಳ್ಳಿ ಗ್ರಾಮಗಳಲ್ಲಿ ಸೇತುವೆಗಳು ಜಲಾವೃತವಾಗಿದ್ದು, ಘತ್ತರಗಿ, ದೇವಲ ಗಾಣಗಾಪುರ, ಚಿನಮಳ್ಳಿ, ಮಣ್ಣೂರ, ವಿಜಯಪುರದ ಸಿಂದಗಿ ತಾಲೂಕಿನ ಮೋರಟಗಿ, ಜೇವರ್ಗಿ ತಾಲೂಕಿನ ಜೇರಟಗಿ, ನೆಲೋಗಿ, ಇಂಡಿ ತಾಲೂಕಿನ ಭೂಂಯ್ನಾರ್ ಗ್ರಾಮಗಳ ಸಂಪರ್ಕ ಕಡಿತಗೊಂಡಿವೆ. 20ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಇಂದೂ ಮಳೆ ಸಂಭವ:
ಮಂಗಳವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಎಲ್ಲೆಡೆ, ಉತ್ತರ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.