ಕಲಬುರಗಿ: ಭಾರೀ ಮಳೆ ಉಂಟಾಗುವ ಸಂಭವ ಹಿನ್ನೆಲೆಯಲ್ಲಿ ಗುರುವಾರದಿಂದಲೇ ಒಂದು ವಾರ ಕಾಲ (ಜು.15)ರ ವರೆಗೆ ಜಿಲ್ಲಾ ಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸಾ ಜಿಲ್ಲಾದ್ಯಂತ ಹೈ ಅಲರ್ಟ್ ಘೋಷಿಸಿದ್ದಾರೆ.
ನಗರದ ಜಿಲ್ಲಾಧಿ ಕಾರಿ ಕಚೇರಿಯಲ್ಲಿ ಪ್ರವಾಹ ಪರಿಸ್ಥಿತಿ ಕುರಿತು ಮುನ್ನೆಚರಿಕೆ ಕ್ರಮವಾಗಿ ಗುರುವಾರ ಜಿಲ್ಲಾ ಮಟ್ಟದ ವಿವಿಧ ಅ ಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಈಗಾಗಲೇ ಮಳೆ ಸುರಿಯುತ್ತಿದ್ದು, ಗ್ರಾಮೀಣ ಭಾಗದ ನದಿಪಾತ್ರದ ಹಳ್ಳಿಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇರುವುದರಿಂದ ಹಳ್ಳಿಗಳಲ್ಲಿ ಟಾಸ್ಕ್ಫೋರ್ಸ್ ತಂಡಗಳನ್ನು ರಚಿಸಬೇಕು. ಎಲ್ಲ ತಾಲೂಕು ಮಟ್ಟದ ಅ ಧಿಕಾರಿಗಳು ಕೇಂದ್ರ ಸ್ಥಾನ ಬಿಟ್ಟು ಹೋಗದೆ ಸ್ಥಳದಲ್ಲಿಯೇ ಇದ್ದು, ಪರಿಸ್ಥಿತಿ ಎದುರಿಸಬೇಕೆಂದು ತಾಕೀತು ಮಾಡಿದರು.
ಪ್ರವಾಹಕ್ಕೀಡಾಗುವ ಗ್ರಾಮಗಳಲ್ಲಿ ಕಾಳಜಿ ಕೇಂದ್ರ ಆರಂಭಿಸಬೇಕು. ಕಾಳಜಿ ಕೇಂದ್ರದಲ್ಲಿ ಸರಿಯಾದ ಪ್ರಮಾಣದಲ್ಲಿ ಊಟ, ವಸತಿ, ವಿದ್ಯುತ್, ನೀರಿನ ಸೌಲಭ್ಯ ಒದಗಿಸಬೇಕು. ಮಕ್ಕಳಿಗೆ ಹಾಲು, ಬಿಸ್ಕೆಟ್ ನೀಡಬೇಕು. ಹಾಲು ಪೂರೈಕೆಯಲ್ಲಿ ವಿಳಂಬವಾದರೆ ಹಾಲಿನ ಪೌಡರ್ ವ್ಯವಸ್ಥೆ ಮಾಡಿಕೊಳ್ಳಬೇಕೆಂದು ಸೂಚಿಸಿದರು. ಗ್ರಾಮಗಳಲ್ಲಿರುವ ಸಣ್ಣ-ಪುಟ್ಟ ನಾಲೆಗಳನ್ನು ಸ್ವತ್ಛಗೊಳಿಸಿ ನೀರು ಸರಾಗವಾಗಿ ಹರಿದು ಹೋಗಲು ಸೂಕ್ತ ವ್ಯವಸ್ಥೆ ಮಾಡಬೇಕು.
ಬ್ಯಾರೇಜ್‌ಗಳ ಎಲ್ಲ ಗೇಟ್‌ಗಳು ಸೂಕ್ತವಾಗಿ ಕಾರ್ಯ ನಿರ್ವಹಿಸುತ್ತಿವೆಯೇ ಎನ್ನುವ ಮಾಹಿತಿ ಅರಿಯಬೇಕು. ಪ್ರತಿ ತಾಲೂಕಿನಲ್ಲಿಯೂ ಒಂದೊಂದು ಜೆಸಿಬಿ ವಾಹನ ಸನ್ನದ್ಧವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಪ್ರವಾಹ ಪರಿಸ್ಥಿತಿ ಉಂಟಾದರೆ ಹಳ್ಳಿಗಳಲ್ಲಿ ಕುಡಿಯುವ ನೀರಿನ ಟ್ಯಾಂಕರ್, ವಿದ್ಯುತ್ ಸೇರಿದಂತೆ ಅತ್ಯಾವಶ್ಯಕ ಸೌಕರ್ಯಗಳನ್ನು ತಕ್ಷಣಕ್ಕೆ ಕಲ್ಪಿಸುವಂತೆ ಆಗಬೇಕೆಂದು ನಿರ್ದೇಶನ ನೀಡಿದರು. ತಾಲೂಕು ಆಸ್ಪತ್ರೆಗಳಲ್ಲಿ ವಿದ್ಯುತ್ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಬೇಕು. ಜನರೇಟರ್‌ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂದು ಪರೀಕ್ಷಿಸಿ, ಜನರೇಟರ್‌ಗೆ ಅಗತ್ಯವಿರುವಷ್ಟು ಇಂಧನ ವ್ಯವಸ್ಥೆ ಮಾಡಬೇಕು. ಹಾಗೆಯೇ ಪ್ರಥಮ ಚಿಕಿತ್ಸೆಗೂ ವ್ಯವಸ್ಥೆ ಮಾಡಬೇಕೆಂದು ಡಿಎಚ್‌ಒ ಡಾ| ಶರಣಬಸಪ್ಪ ಗಣಜಲಖೇಡಗೆ ಸೂಚಿಸಿದರು. ತಾಲೂಕು ಹಾಗೂ ಪ್ರತಿಹಳ್ಳಿ ಮಟ್ಟದಲ್ಲಿ ನೋಡಲ್ ಅ ಧಿಕಾರಿಗಳನ್ನು ನೇಮಿಸಬೇಕು.
ಸಹಾಯಕ ಆಯುಕ್ತರು, ತಹಶೀಲ್ದಾರ್‌ಗಳೊಂದಿಗೆ ನೋಡಲ್ ಅ ಧಿಕಾರಿಗಳು ನಿರಂತರ ಸಂಪರ್ಕದಲ್ಲಿ ಇರಬೇಕು. ಸಹಾಯಕ ಆಯುಕ್ತರು, ತಹಶೀಲ್ದಾರರು ಸೇರಿದಂತೆ ಜೆಸ್ಕಾಂ, ಪೊಲೀಸ್, ಅಗ್ನಿಶಾಮಕ ಇಲಾಖೆ ಮುಂತಾದ ಇಲಾಖೆಗಳು ಪರಿಸ್ಥಿತಿಗೆ ಅನುಗುಣವಾಗಿ ಶ್ರಮವಹಿಸಿ ಕಾರ್ಯನಿರ್ವಹಿಸಬೇಕೆಂದು ಎಂದು ಸಲಹೆ ನೀಡಿದರು.
ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ, ಅಪರ ಜಿಲ್ಲಾಧಿ ಕಾರಿ ಡಾ| ಶಂಕರ ವಣಿಕ್ಯಾಳ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಪ್ರಸನ್ನ ದೇಸಾಯಿ, ಸಹಾಯಕ ಆಯುಕ್ತರಾದ ರಾಮಚಂದ್ರ ಗಡಾದೆ, ರಮೇಶ ಕೋಲ್ಹಾರ ಹಾಗೂ ಎಲ್ಲ ತಾಲೂಕುಗಳ ತಹಶೀಲ್ದಾರರು, ಕಾರ್ಯ ನಿರ್ವಹಣಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿ ಕಾರಿಗಳು ಹಾಜರಿದ್ದರು.