ಬೆಂಗಳೂರು/ಹುಬ್ಬಳ್ಳಿ: ರಾಜ್ಯದ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾನುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ರಾಜ್ಯದಲ್ಲಿಯೇ ಗರಿಷ್ಠ 16 ಸೆಂ.ಮೀ. ಮತ್ತು ಕೊಟ್ಟಿಗೆಹಾರದಲ್ಲಿ 12 ಸೆಂ.ಮೀ.ಮಳೆಯಾದ ವರದಿಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಜೀವನದಿಗಳಾದ ತುಂಗಾ, ಭದ್ರಾ, ಹೇಮಾವತಿ, ಸೋಮಾವತಿ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಿದೆ. ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಭಾರೀ ಏರಿಕೆ ಕಂಡು ಬಂದಿದೆ.
ಹೀಗಾಗಿ, ಚಿಕ್ಕೋಡಿ ತಾಲೂಕಿನ ಆರು ಸೇತುವೆಗಳು ಜಲಾವೃತಗೊಂಡು ಸಂಚಾರ ಕಡಿತಗೊಂಡಿವೆ. ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಲ್ಲೋಳ-ಯಡೂರ, ವೇದಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬೋಜವಾಡಿ-ಕುನ್ನುರ, ಸಿದ್ನಾಳ-ಅಕ್ಕೋಳ, ಜತ್ರಾಟ-ಭಿವಸಿ, ದೂಧಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಮಲಿಕವಾಡ-ದತ್ತವಾಡ, ಕಾರದಗಾ-ಭೋಜ ಸೇತುವೆಗಳು ಮುಳುಗಡೆಗೊಂಡಿವೆ.
ಮಹಾರಾಷ್ಟ್ರದ ಗಡಿ ಭಾಗದಲ್ಲಿರುವ ರಾಜಾಪುರ ಬ್ಯಾರೇಜ್ ಮೂಲಕ ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ 36,066 ಕ್ಯೂಸೆಕ್ ನೀರು ಹರಿದು ಜಮಖಂಡಿ ತಾಲೂಕಿನ ಹಿಪ್ಪರಗಿ ಅಣೆಕಟ್ಟಿಗೆ ಹೋಗುತ್ತಿದೆ. ಅಲ್ಲಿಂದ 23,600 ಕ್ಯೂಸೆಕ್ ನೀರು ಹರಿದು ಆಲಮಟ್ಟಿಗೆ ಹರಿದು ಹೋಗುತ್ತಿದೆ.
ಹಿರಣ್ಯಕೇಶಿ ನದಿಗೆ ಸಾಕಷ್ಟು ನೀರು ಹರಿದು ಬರುತ್ತಿದ್ದು, ಧುಪದಾಳ ಜಲಾಶಯ ಭರ್ತಿಯಾಗಿದೆ. ಈ ಮಧ್ಯೆ, ಮಂಗಳವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಪ್ರಕಟಣೆ ತಿಳಿಸಿದೆ.