ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಶನಿವಾರ ಕೂಡ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಜನರು ಹೈರಾಣಾಗಿದ್ದಾರೆ.
ಶುಕ್ರವಾರ ಕೆಲ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ತಗ್ಗಿದೆ. ಆದರೆ, ಶನಿವಾರ ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆಯಿದೆ. ಹೀಗಾಗಿ ಹವಾಮಾನ ಇಲಾಖೆ ಈ ಆರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
ಈ ಜಿಲ್ಲೆಗಳಲ್ಲಿ ಭಾನುವಾರವೂ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ ಬಾಗಲಕೋಟೆ, ಕೊಪ್ಪಳ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಹಾಸನ, ಮೈಸೂರು, ಬಳ್ಳಾರಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ತೀರದಲ್ಲಿ ಗಾಳಿಯ ವೇಗ 45 ರಿಂದ 55 ಕಿ.ಮೀ. ಇರಲಿದ್ದು, ಮೀನುಗಾರರು ಕೆಲಸಮಯ ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ ಸೂಚಿಸಿದೆ. ಜತೆಗೆ ಶನಿವಾರ ರಾತ್ರಿ 11.30ರವರೆಗೆ ಕರಾವಳಿ ತೀರದ 3.5ರಿಂದ 4 ಮೀ. ವ್ಯಾಪ್ತಿಯಲ್ಲಿ ಎತ್ತರದ ಅಲೆಗಳ ಮುನ್ಸೂಚನೆಯಿದೆ.