ನವದೆಹಲಿ : ಜಹಾಂಗೀರ್ ಪುರಿಯಲ್ಲಿ ಶನಿವಾರ ಹನುಮ ಜಯಂತಿಯಂದು ಶೋಭಾ ಯಾತ್ರೆಯ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು.ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ದುಷ್ಕರ್ಮಿಗಳು ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿ ಹಲವು ವಾಹನಗಳನ್ನು ಧ್ವಂಸಗೊಳಿಸಿದ್ದಾರೆ. ಘಟನೆಯಲ್ಲಿ ಸುಮಾರು ಹದಿನೈದಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ.
ಶಾಂತಿ ಕಾಪಾಡುವಂತೆ ನಾನು ಎಲ್ಲರಿಗೂ ಮನವಿ ಮಾಡುತ್ತೇನೆ. ರಾಷ್ಟ್ರ ರಾಜಧಾನಿಯಲ್ಲಿ ಶಾಂತಿ ಕಾಪಾಡುವ ಜವಾಬ್ದಾರಿ ಕೇಂದ್ರ ಸರ್ಕಾರಕ್ಕಿದೆ. ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿ ಮಾಡುತ್ತೇನೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ.
ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಯತ್ನಿಸುತ್ತಿದ್ದು, ಘಟನೆ ನಡೆದ ಸ್ಥಳಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳು ಹಾಗೂ ಮೊಬೈಲ್‌ನಿಂದ ಜನರು ಮಾಡಿರುವ ವಿಡಿಯೋಗಳನ್ನು ಪರಿಶೀಲಿಸಲಾಗುತ್ತಿದೆ. ಉನ್ನತ ಪೊಲೀಸ್ ಅಧಿಕಾರಿಗಳು ಕೂಡ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಕುಶಾಲ್ ಚಿತ್ರಮಂದಿರದ ಬಳಿ ಈ ಘಟನೆ ನಡೆದಿದ್ದು, ಕಲ್ಲು ತೂರಾಟದಲ್ಲಿ ಗಾಯಗೊಂಡ ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
“ಇದು ಸಾಂಪ್ರದಾಯಿಕ ಮೆರವಣಿಗೆಯಾಗಿದ್ದು, ಪೊಲೀಸ್ ಸಿಬ್ಬಂದಿ ಬೆಂಗಾವಲು ಪಡೆಯುತ್ತಿದ್ದರು. ಆದರೆ, ಮೆರವಣಿಗೆಯು ಕುಶಾಲ್ ಚಿತ್ರಮಂದಿರದ ಬಳಿ ತಲುಪುತ್ತಿದ್ದಂತೆ ಎರಡು ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.