Advertisement

ಪರಿಶಿಷ್ಟರ ಯೋಜನೆ ಗುರಿ ಸಾಧನೆಗೆ ಮುಂದಾಗಿ

03:50 PM Mar 25, 2022 | Team Udayavani |

ಗದಗ: ಪ.ಜಾ., ಪ.ಪಂ. ಉಪ ಹಂಚಿಕೆ ಯೋಜನೆಯಡಿ ವಿವಿಧ ಇಲಾಖೆಗಳಿಗೆ ಬಿಡುಗಡೆಯಾದ ಅನುದಾನ ಸದ್ಬಳಕೆಯಾಗಬೇಕು. ಈ ನಿಟ್ಟಿನಲ್ಲಿ ಇಲಾಖೆಯ ಅಧಿಕಾರಿಗಳು ಎಸ್‌ಸಿ, ಎಸ್‌ಟಿ ಯೋಜನೆಯ ಆರ್ಥಿಕ ಮತ್ತು ಭೌತಿಕ ಗುರಿ ಸಾಧನೆಗೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ತಿಳಿಸಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪ.ಜಾ., ಪ.ಪಂ. ಉಪ ಹಂಚಿಕೆ ಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಯೋಜನೆಯಡಿ ಬಿಡುಗಡೆಯಾಗುವ ಅನುದಾನ ದುರುಪಯೋಗವಾಗದಂತೆ ನಿಗಾ ವಹಿಸಬೇಕು. ಅನುದಾನವನ್ನು ನಿಗದಿತ ಕಾಲಮಿತಿಯೊಳಗೆ ಖಚು ಮಾಡದೇ ಬಾಕಿ ಉಳಿಸಿದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು ಹಾಗೂ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳ್ಳಬೇಕಲ್ಲದೇ, ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು. ಇಲಾಖಾವಾರು ಸಾಧಿಸಿದ ಪ್ರಗತಿ ವಿವರವನ್ನು ಇಲಾಖೆ ಅಂತರ್ಜಾಲದಲ್ಲಿ ಅಪ್‌ಡೇಟ್‌ ಮಾಡಲು ಕ್ರಮ ವಹಿಸಬೇಕು. ಪ.ಜಾ., ಪ.ಪಂ. ಉಪ ಹಂಚಿಕೆ ಯೋಜನೆಯಡಿ ಬಿಡುಗಡೆಯಾದ ಅನುದಾನ ವೆಚ್ಚ ಮಾಡಲು ಕೊನೆಯ ದಿನಾಂಕಕ್ಕೆ ಕಾಯದೇ ಆದಷ್ಟು ಶೀಘ್ರವೇ ಕ್ರಮ ವಹಿಸಬೇಕೆಂದು ನಿರ್ದೇಶನ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ ಮಾತನಾಡಿ, ಫೆಬ್ರವರಿ 2022ರ ಅಂತ್ಯದವರೆಗೆ ಪರಿಶಿಷ್ಟ ಜಾತಿ ಉಪ ಹಂಚಿಕೆ(ಎಸ್‌ಸಿ, ಎಸ್‌ಟಿ) ಯೋಜನೆಯಡಿ ವಿವಿಧ ಇಲಾಖೆಗಳಡಿ ಒಟ್ಟಾರೆ 107.46 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಆ ಪೈಕಿ 81.70 ಕೋಟಿ ರೂ. ಖರ್ಚಾಗಿದೆ. 95273 ಫಲಾನುಭವಿಗಳು ಯೋಜನೆಯ ಸೌಲಭ್ಯ ಪಡೆದಿದ್ದು, ಶೇ.76.01 ಪ್ರಗತಿಯಾಗಿದೆ.

Advertisement

ಪರಿಶಿಷ್ಟ ಪಂಗಡ ಉಪ ಹಂಚಿಕೆ (ಟಿಎಸ್‌ಪಿ) ಯೋಜನೆಯಡಿ ವಿವಿಧ ಇಲಾಖೆಗಳಡಿ 36.02 ಕೋಟಿ ರೂ. ಬಿಡುಗಡೆಯಾಗಿದ್ದು, ಆ ಪೈಕಿ 28.46 ಕೋಟಿ ರೂ. ಖರ್ಚಾಗಿದೆ. 33171 ಫಲಾನುಭವಿಗಳು ಯೋಜನೆಯ ಸೌಲಭ್ಯ ಪಡೆದಿದ್ದು, ಶೇ.79.02 ಪ್ರಗತಿಯಾಗಿದೆ ಎಂದು ಸಭೆಗೆ ತಿಳಿಸಿದರು.

ಪರಿಶಿಷ್ಟ ಜಾತಿ ಉಪ ಹಂಚಿಕೆ(ಎಸ್‌ಸಿ, ಎಸ್‌ಟಿ) ಮತ್ತು ಪರಿಶಿಷ್ಟ ಪಂಗಡ ಉಪಹಂಚಿಕೆ(ಟಿಎಸ್‌ಪಿ) ಯೋಜನೆಯಡಿ ಕೃಷಿ, ವಿಕಲಚೇತನ, ಆಯುಷ್‌, ಲೋಕೋಪಯೋಗಿ, ಯುವ ಸಬಲೀಕರಣ ಮತ್ತು ಕ್ರೀಡಾ, ಸಾರ್ವಜನಿಕ ಶಿಕ್ಷಣ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಯಿತು.

ಇದಕ್ಕೂ ಮುನ್ನ ಸಕಾಲ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರು, ಸಕಾಲ ಯೋಜನೆ ಅನುಷ್ಠಾನದಲ್ಲಿ ಜಿಲ್ಲೆ ಉತ್ತಮ ಪ್ರಗತಿ ಸಾಧಿಸಲು ಎಲ್ಲ ಅಧಿಕಾರಿಗಳು ನಿಗದಿತ ಅವಧಿಯಲ್ಲಿ ಸ್ವೀಕರಿಸಿದ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಸಕಾಲದಲ್ಲಿ ಅರ್ಜಿ ಸ್ವೀಕರಿಸುವಾಗ ಅರ್ಜಿಯ ಜೊತೆಗೆ ನಿಗದಿಪಡಿಸಿದ ದಾಖಲಾತಿಗಳನ್ನೂ ಸ್ವೀಕರಿಸಬೇಕು. ವಿನಾಕಾರಣ ಸ್ವೀಕರಿಸಿದ ಅರ್ಜಿಗಳನ್ನು ತಿರಸ್ಕಾರ ಮಾಡಬಾರದೆಂದು ಅಧಿಕಾರಿಗಳಿಗೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಸತೀಶಕುಮಾರ್‌ ಎಂ. ಮಾತನಾಡಿ, ಅಧಿಕಾರಿಗಳು ಸಕಾಲ ಯೋಜನೆ ಕುರಿತು ಹೆಚ್ಚು ನಿಗಾ ವಹಿಸುವ ಮೂಲಕ ಯೋಜನೆಯನ್ನು ಯಶಸ್ವಿಗೊಳಿಸಬೇಕು. ಅದರೊಂದಿಗೆ ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸಲು ಕ್ರಮ ಕೈಗೊಳ್ಳಬೇಕು. ಸಕಾಲದಲ್ಲಿ ಸ್ವೀಕರಿಸಿದ ಅರ್ಜಿಗಳನ್ನು ನಿಗದಿಪಡಿಸಿದ ವೇಳೆಯಲ್ಲಿ ವಿಲೇವಾರಿ ಮಾಡದಿದ್ದಲ್ಲಿ ಇಲಾಖೆಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳು ಸಕಾಲ ಯೋಜನೆಯಡಿ ಅರ್ಜಿ ವಿಲೇವಾರಿಗೆ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕೆಂದು ತಿಳಿಸಿದರು.

2022 ರ ಫೆಬ್ರವರಿಯಲ್ಲಿ ಸಕಾಲ ಯೋಜನೆಯಡಿ 47507 ಅರ್ಜಿಗಳು ಸ್ವೀಕೃತವಾಗಿದ್ದು, 2596 ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ಸಕಾಲ ಕಾರ್ಯಕ್ರಮದ ನೋಡಲ್‌ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ, ಅಪರ ಜಿಲ್ಲಾಧಿಕಾರಿ ಸತೀಶಕುಮಾರ್‌ ಎಂ., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಜಂಟಿ ಕೃಷಿ ನಿರ್ದೇಶಕ ಜಿಯಾವುಲ್ಲಾ ಕೆ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಉಸ್ಮಾನ್‌ ಎ., ಕಾರ್ಮಿಕ ಇಲಾಖೆ ಅಧಿಕಾರಿ ಸುಧಾ ಗರಗ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮಹಬೂಬ ತುಂಬರಗಟ್ಟಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಡಾ.ಶರಣು ಗೋಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ ಬಿ. ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next