ಮಹಾನಗರ: ಸಮಾಜದ ವಿವಿಧ ಸ್ತರಗಳಲ್ಲಿ ಹಲವಾರು ಮಂದಿ ಸಹಾಯದ ನಿರೀಕ್ಷೆಯಲ್ಲಿರುತ್ತಾರೆ. ಅವರ ಕಷ್ಟಕ್ಕೆ ಹೆಗಲಾಗಿ ನಿಲ್ಲುವುದರಿಂದ ನೆಮ್ಮದಿ ಸಿಗುತ್ತದೆ. ಈ ನಿಟ್ಟಿನಲ್ಲಿ ರೆಡ್‌ಕ್ರಾಸ್ ಸಂಸ್ಥೆ ನಿಸ್ವಾರ್ಥ ಸೇವೆ ಮಾಡುತ್ತಿದೆ ಎಂದು ಮಂಗಳೂರು ಅಂ.ರಾ. ವಿಮಾನ ನಿಲ್ದಾಣದ ನಿವೃತ್ತ ನಿರ್ದೇಶಕ ಎಂ.ಆರ್. ವಾಸುದೇವ ರಾವ್ ಹೇಳಿದರು.
ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್‌ನ ಯೂತ್ ರೆಡ್‌ಕ್ರಾಸ್ ಘಟಕದ ವತಿಯಿಂದ ಎ.ಜೆ. ಮೆಡಿಕಲ್ ಕಾಲೇಜಿನಲ್ಲಿ ಬುಧವಾರ ನಡೆದ ವಿಶ್ವ ರೆಡ್‌ಕ್ರಾಸ್ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ರಕ್ತದಾನ, ವೈದ್ಯಕೀಯ ನೆರವು, ಸೇವಾ ಮನೋಭಾವದಿಂದ ರೆಡ್‌ಕ್ರಾಸ್ ಸಂಸ್ಥೆ ಶ್ರಮಿ ಸುತ್ತಿದ್ದು, ಇನ್ನೊಬ್ಬರ ನೋವಿಗೆ ಸ್ಪಂದಿಸುವ ಕೆಲಸ ಮಾಡುತ್ತಿದೆ. ಅಗತ್ಯವುಳ್ಳವರಿಗೆ ನಾವು ಮಾಡುವ ಸಹಾಯ ಹೆಚ್ಚು ಅರ್ಥಪೂರ್ಣವಾಗುತ್ತದೆ ಎಂದರು.
ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಜಿಲ್ಲಾ ಘಟಕದ ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗೌರವ ಕಾರ್ಯದರ್ಶಿ ಎಸ್.ಎ. ಪ್ರಭಾಕರ ಶರ್ಮ,ಮನಪಾ ಮಾಜಿ ಸದಸ್ಯ ದಯಾನಂದ ಶೆಟ್ಟಿ, ಲಾರಿಶಾ ಮಾರ್ಥ ಶ್ಯಾಮ್, ರೆಡ್‌ಕ್ರಾಸ್ ಸೊಸೈಟಿಯ ಉಪಾಧ್ಯಕ್ಷಷ ನಿತ್ಯಾನಂದ ಶೆಟ್ಟಿ, ಕಾರ್ಯಕ್ರಮ ಸಂಯೋಜಕಿ ಶಾಂಭವಿ ಮೊದಲಾದವರು ಉಪಸ್ಥಿತರಿದ್ದರು.
ಪ್ರಬಂಧ ಸ್ಪರ್ಧೆ
ರೆಡ್‌ಕ್ರಾಸ್ ದಿನಾಚರಣೆ ಅಂಗವಾಗಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತರಾದವರಿಗೆ ಈ ಸಂದರ್ಭ ಬಹುಮಾನ ವಿತರಿಸಲಾಯಿತು. ಹರ್ಷಿತಾ ಅಮ್ಮಣ್ಣ ನಿರೂಪಿಸಿದರು.