ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠದ ಪೀಠಾಧಿಪತಿ ಡಾ| ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲು ಸಂತ್ರಸ್ತರಿಗೆ ಪ್ರಚೋದನೆ ನೀಡಿದ ಹಾಗೂ ಒತ್ತಡ ಹಾಕಿದ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್ ಮತ್ತು ಅವರ ಪತ್ನಿ ಸೌಭಾಗ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಕುರಿತು ಎಸ್.ಕೆ. ಬಸವರಾಜನ್ ಮತ್ತವರ ಪತ್ನಿ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯಲ್ಲಿ ದೂರುದಾರರಾದ ಮರುಘಾ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಚಿತ್ರದುರ್ಗ ಗ್ರಾಮೀಣಾ ಠಾಣಾ ಪೊಲೀಸರನ್ನು ಪ್ರತಿವಾದಿಯನ್ನಾಗಿ ಮಾಡಿದ್ದಾರೆ.
ಮಠ ನಡೆಸುತ್ತಿರುವ ಪ್ರಿಯದರ್ಶಿನಿ ಶಾಲೆಯ ಶಿಕ್ಷಕ ಬಸವರಾಜೇಂದ್ರಪ್ಪ ಮತ್ತು ಪ್ರಕರಣದ ಸಂತ್ರಸ್ತೆಯ ತಾಯಿ ನಡುವೆ ನಡೆದ ಮೊಬೈಲ್ ಕರೆ ಸಂಭಾಷಣೆಯನ್ನು ಆಧರಿಸಿ ದೂರುದಾರರು ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಮರುಘಾ ಶರಣರ ವ್ಯಕ್ತಿತ್ವ ಮತ್ತು ಘನತೆಗೆ ಧಕ್ಕೆ ತಂದು ಮತ್ತು ಅವರಿಗೆ ಕಿರುಕುಳ ನೀಡುವ ಉದ್ದೇಶದಿಂದ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ದೂರು ದಾಖಲಿಸಲು ಸಂತ್ರಸ್ತರಿಗೆ ಪ್ರಚೋದನೆ ನೀಡಲಾಗಿದೆ ಹಾಗೂ ಪಿತೂರಿ ನಡೆಸಲಾಗಿದೆ ಎಂಬ ಬಗ್ಗೆ ದೂರಿನಲ್ಲಿ ಆರೋಪಿಸಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಪ್ರಕರಣ ಸಂಬಂಧ ಪೊಲೀಸರು ದಾಖಲಿಸಿದ ಎಫ್ಐಆರ್‌ನಲ್ಲಿ ತಮ್ಮ ಹೆಸರು ಉಲ್ಲೇಖವಾಗಿಲ್ಲ. ಆದರೂ ಪೊಲೀಸರು ಅಧಿಕಾರ ದುರ್ಬಳಕೆ ಮಾಡಿಕೊಂಡು ತಮ್ಮನ್ನು ಬಂಧಿಸಿದ್ದಾರೆ. ತಮಗೂ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ತಪ್ಪಾಗಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಪೊಲೀಸರ ಈ ನಡೆಯಿಂದ ಸಂವಿಧಾನದ ಪರಿಚ್ಛೇದ 21ರ ಅಡಿಯಲ್ಲಿ ತಮಗೆ ಪ್ರಾಪ್ತವಾಗಿರುವ ಜೀವಿಸುವ ಮತ್ತು ವೈಯಕ್ತಿಕ ಸ್ವಾತಂತ್ರದ ಹಕ್ಕು ಉಲ್ಲಂಘನೆಯಾಗಿದೆ. ಆದ್ದರಿಂದ ಎಫ್ಐಆರ್ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.