ಚಿಕ್ಕಬಳ್ಳಾಪುರ: ಅಯೋಧ್ಯೆಯ ರಾಮ ಜನ್ಮಭೂಮಿ ವಿವಾದ ಕುರಿತು ವಾದ, ಪ್ರತಿವಾದ ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್ ಶನಿವಾರ ತನ್ನ ತೀರ್ಪು ಪ್ರಕಟಿಸಲಿರುವ ಹಿನ್ನಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೈ ಅಲರ್ಟ್ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಸಾಕಷ್ಟು ಸೂಕ್ಷ್ಮ ತಾಲೂಕುಗಳಾಗಿರುವ ಚಿಂತಾಮಣಿ, ಶಿಡ್ಲಘಟ್ಟ, ಗೌರಿಬಿದನೂರು, ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸೇರಿದಂತೆ ವಿವಿಧ ಕಡೆ ಹೆಚ್ಚುವರಿಯಾಗಿ ಪೊಲೀಸರನ್ನು ಬಂದೋಬಸ್ತ್ ಕಾರ್ಯಕ್ಕೆ ನಿಯೋಜಿಸಲಾಗಿದೆ.
ಉಳಿದಂತೆ ಜಿಲ್ಲಾಡಳಿತ ಭವನ, ಜಿಲ್ಲಾ ನ್ಯಾಯಾಲಯ ಕಟ್ಟಡ, ಪ್ರಮುಖ ಸರ್ಕಾರಿ ಕಚೇರಿಗಳ ಸಮೀಪ ಹಾಗೂ ಜಿಲ್ಲೆಯ ಐತಿಹಾಸಿಕ ನಂದಿಗಿರಿಧಾಮದಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿ ಹದ್ದಿನ ಕಣ್ಣು ಇಡಲಾಗಿದೆ. ಅಲ್ಲದೇ ಧಾರ್ಮಿಕ ಶ್ರದ್ದಾ ಕೇಂದ್ರಗಳ ಬಳಿಯು ಕೂಡ ಮುಂಜಾಗ್ರತೆಯ ಕ್ರಮವಾಗಿ ಪೊಲೀಸರು ಬಂದೋಬಸ್ತ್ ವಹಿಸಿದ್ದಾರೆ.
ಹಲವಡೆ ಪಥ ಸಂಚಲನ
ಅಯೋಧ್ಯೆಯ ರಾಮಜನ್ಮ ಭೂಮಿ ವಿವಾದ ಕುರಿತು ತೀರ್ಪು ಪ್ರಕಟವಾಗಲಿರುವ ಹಿನ್ನಲೆಯಲ್ಲಿ ಜಿಲ್ಲೆಯ ತಾಲೂಕುಗಳಲ್ಲಿ ಪೊಲೀಸರು ಹಿರಿಯ ಪೊಲೀಸ್ ಅಧಿಕಾರಗಳ ಮಾರ್ಗದರ್ಶನದಲ್ಲಿ ನಗರ,ಪಟ್ಟಣಗಳ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿ ಸಾರ್ವಜನಿಕರಲ್ಲಿ ಧೈರ್ಯ ತುಂಬಿದರು.
ಜಿಲ್ಲೆಗೆ ನೂತನ ವರಿಷ್ಟಾಧಿಕಾರಿಯಾಗಿ ಆಗಮಿಸಿರುವ ಅಭಿನವ ಖರೆ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು ಬಂದೋಬಸ್ತ್ ಉಸ್ತುವಾರಿ ವಹಿಸಿದ್ದಾರೆ.