ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರಿಸುವ ಬೇಡಿಕೆ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು ನಿವೃತ್ತ ನ್ಯಾಯಮೂರ್ತಿ ಸುಭಾಷ್ ಅಡಿ ನೇತೃತ್ವದ ಉನ್ನತ ಮಟ್ಟದ ಸಮಿತಿ ರಚಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಮೀಸಲಾತಿ ಪರಿಶೀಲನೆಯ ಉನ್ನತ ಮಟ್ಟದ ಸಮಿತಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ.
ಸರ್ಕಾರದ ಆದೇಶ ಪ್ರಶ್ನಿಸಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವೆಂಕಟರಾಮಯ್ಯ ಸಲ್ಲಿಸಿರುವ ಅರ್ಜಿಯು ಹಿರಿಯ ನ್ಯಾಯಮೂರ್ತಿ ಬಿ. ವೀರಪ್ಪ ಹಾಗೂ ನ್ಯಾ. ಕೆ.ಎಸ್. ಹೇಮಲೇಖ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.
ವಾದ ಆಲಿಸಿದ ನ್ಯಾಯಪೀಠ, ಅರ್ಜಿಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳನ್ನು ಅವರ ಹೆಸರಿನಲ್ಲಿ ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಸಾಮಾನ್ಯವಾಗಿ, ಜಡ್ಜ್ಗಳ ಹೆಸರು ಸೇರಿಸುವುದಿಲ್ಲ. ಹಾಗಾಗಿ, ನ್ಯಾಯಮೂರ್ತಿಗಳ ಹೆಸರಿನ ಬದಲಿಗೆ ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷರು ಎಂದು ಪ್ರತಿವಾದಿಯನ್ನಾಗಿ ಮಾಡುವಂತೆ ಅರ್ಜಿದಾರರಿಗೆ ನ್ಯಾಯಪೀಠ ಸೂಚಿಸಿತು. ಅದಕ್ಕೆ ಅರ್ಜಿದಾರರ ಪರ ವಕೀಲರು ಸಹಮತ ವ್ಯಕ್ತಪಡಿಸಿದರು.
ಬಳಿಕ ಅರ್ಜಿಗೆ ಸಂಬಂಧಿಸಿದಂತೆ ಮೀಸಲಾತಿ ಪರಿಶೀಲನೆಯ ಉನ್ನತ ಮಟ್ಟದ ಸಮಿತಿಗೆ ತುರ್ತು ನೋಟಿಸ್ ಜಾರಿಗೊಳಿಸಿದ ನ್ಯಾಯಪೀಠ, ಸರ್ಕಾರಕ್ಕೂ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆ ಮುಂದೂಡಿತು. ಅಲ್ಲದೆ, ಅರ್ಜಿಯ ಮುಂದಿನ ಆದೇಶದವರಿಗೆ ಪ್ರಕರಣದಲ್ಲಿ ಮುಂದುವರಿಯದಂತೆ ಉನ್ನತ ಮಟ್ಟದ ಸಮಿತಿಗೆ ಸೂಚಿಸಿ ಆ.12ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ನ್ಯಾಯಪೀಠ ವಿಸ್ತರಿಸಿತು.
ಪ್ರಕರಣವೇನು?
ಪಂಚಮಸಾಲಿ ಸಮುದಾಯವನ್ನು 3ಬಿ ಇಂದ 2ಎ ವ್ಯಾಪ್ತಿಗೆ ಸೇರ್ಪಡೆ ಮಾಡುವುದು ಸೇರಿದಂತೆ ಇತರೆ ಸಮಯದಾಯಗಳ ಮೀಸಲಾತಿ ಬೇಡಿಕೆ ಪರಿಶೀಲಿಸಿ ವರದಿ ಸಲ್ಲಿಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಅಡಿ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿ ರಾಜ್ಯ ಸರ್ಕಾರವು 2021ರ ಜುಲೈ 1ರಂದು ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಿರುವ ಅರ್ಜಿದಾರರು, ಕಾನೂನಿಗೆ ವಿರುದ್ಧವಾಗಿ ಉನ್ನತಮಟ್ಟದ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ ಎಂದು ಆಕ್ಷೇಪಿಸಿ¨ªಾರೆ.