ಬೆಂಗಳೂರು: ಬೆಳ್ತಂಗಡಿ ತಾಲೂಕು ಪುತ್ತಿಲ ಗ್ರಾಮದ ಯುವ ವಕೀಲ ಕುಲದೀಪ್ ಶೆಟ್ಟಿ ಮೇಲೆ ಪುಂಜಾಲುಕಟ್ಟೆ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ.
ತನ್ನ ಮೇಲೆ ದೌರ್ಜನ್ಯ ಎಸಗಿದ ಪುಂಜಾಲಕಟ್ಟೆ ಸಬ್ ಇನ್ಸ್‌ಪೆಕ್ಟರ್ ಕೆ.ಪಿ ಸುತೇಶ್ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ತಮಗೆ ಪರಿಹಾರ ಒದಗಿಸಬೇಕು ಎಂದು ಕೋರಿ ಯುವ ವಕೀಲ ಕುಲದೀಪ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಪುಂಜಾಲಕಟ್ಟೆ ಪೊಲೀಸರ ವರ್ತನೆ ಬಗ್ಗೆ ತೀವ್ರ ಅಸಮಧಾನ ವ್ಯಕ್ತಪಡಿಸಿತು. ಸಿವಿಲ್ ವ್ಯಾಜ್ಯವೊಂದರಲ್ಲಿ ಪೊಲೀಸರು ವಕೀಲರ ಮೇಲೆ ಹಲ್ಲೆ ನಡೆಸಿದ್ದಾರೆ. ಮುಖ್ಯವಾಗಿ ಸಿವಿಲ್ ವ್ಯಾಜ್ಯದಲ್ಲಿ ಪೊಲೀಸರಿಗೆ ಅಧಿಕಾರ ವ್ಯಾಪ್ತಿ ಇಲ್ಲ. ಹಾಗಿದ್ದರೂ ಪೊಲೀಸರು ವ್ಯಾಪ್ತಿ ಮೀರಿ ನಡೆದುಕೊಂಡಿದ್ದಾರೆ. ಸ್ಥಳೀಯ ಪೊಲೀಸರು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಸುತ್ತೋಲೆಯನ್ನು ಉಲ್ಲಂ ಸಿದ್ದಾರೆ. ಈ ಪ್ರಕರಣದಲ್ಲಿ ವ್ಯಕ್ತಿಯ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ.
ಆಶ್ಚರ್ಯದ ಸಂಗತಿ ಎಂದರೆ ಹೈಕೋರ್ಟ್ ಚಾಟಿ ಬೀಸಿದ ನಂತರ ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಇಂತಹ ಘಟನೆ ನಡೆದರೆ ಪೊಲೀಸರ ವಿರುದ್ಧ ವಿಚಾರಣೆಗೆ ಆದೇಶಿಸಲಾಗುವುದು. ಇದು ಪರಿಹಾರ ನೀಡಲು ಅರ್ಹ ಪ್ರಕರಣವಾಗಿದೆ ಎಂದು ಹೇಳಿ ತೀರ್ಪನ್ನು ಕಾಯ್ದಿರಿಸಿತು. ಅರ್ಜಿದಾರರ ಪರ ಹಿರಿಯ ವಕೀಲ ಪಿ.ಪಿ. ಹೆಗ್ಡೆ ವಾದ ಮಂಡಿಸಿದರು.