ಬೆಂಗಳೂರು: ಭಾರತೀಯ ಸಾಗರೋತ್ತರ ನಾಗರಿಕರ (ಒಸಿಐ) ಕಾರ್ಡ್ ಹೊಂದಿರುವ ವಿದ್ಯಾರ್ಥಿಗಳಿಗೆ 2022ನೇ ಸಾಲಿನ ಸಿಇಟಿಗೆ ನೊಂದಾಯಿಸಿಕೊಳ್ಳಲು ಮತ್ತು ಕೌನ್ಸೆಲಿಂಗ್‌ಗೆ ಹಾಜರಾಗಲು ಅವಕಾಶ ಮಾಡಿಕೊಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ.
ವಿವೇಕ್ ಗೌತಮ್ ಹಾಗೂ ಇತರ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್ ಹಾಗೂ ನ್ಯಾ| ಕೆ.ಎಸ್. ಹೇಮಲೇಖಾ ಅವರಿದ್ದ ರಜಾ ಕಾಲದ ವಿಭಾಗೀಯ ನ್ಯಾಯಪೀಠ ಈ ಮಧ್ಯಾಂತರ ಆದೇಶ ನೀಡಿದೆ.
ಭಾರತೀಯ ಸಾಗರೋತ್ತರ ನಾಗರಿಕರ (ಒಸಿಐ) ಕಾರ್ಡ್ ಹೊಂದಿರುವ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಟಿ-2022ಕ್ಕೆ ನೋಂದಾಯಿಸಿಕೊಳ್ಳಲು ಹಾಗೂ ಪರೀಕ್ಷೆ ಮತ್ತು ಕೌನ್ಸೆಲಿಂಗ್‌ಗೆ ಹಾಜರಾಗಲು ಅವಕಾಶ ಮಾಡಿಕೊಡುವಂತೆ ಪರೀಕ್ಷಾ ಪ್ರಾಧಿಕಾರಕ್ಕೆ ಆದೇಶಿಸಿರುವ ನ್ಯಾಯಪೀಠ, ಒಸಿಐ ವಿದ್ಯಾರ್ಥಿಗಳು ಭಾರತೀಯ ನಾಗರಿಕರಿಗೆ ಸಮಾನವಾಗಿ ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಆಯುರ್ವೇದ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಲ್ಲಿ ಸೀಟುಗಳು ಆಯ್ಕೆಗೆ ಸಾಮಾನ್ಯ ಕ್ಯಾಟಗರಿಯಲ್ಲಿ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಬುದು ಎಂದು ಸ್ಪಷ್ಟಪಡಿಸಿದೆ.
ಈ ಮಧ್ಯಾಂತರ ಆದೇಶದ ಪ್ರಯೋಜನ ಕೇವಲ ಅರ್ಜಿದಾರ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿಲ್ಲ. 2022-23ರ ಶೈಕ್ಷಣಿಕ ವರ್ಷಕ್ಕೆ ಎಲ್ಲ ಅರ್ಹ ಒಸಿಐ ವಿದ್ಯಾರ್ಥಿಗಳಿಗೆ ಅನ್ವಯಿಸುತ್ತದೆ ಎಂದು ನ್ಯಾಯಪೀಠವು ತನ್ನ ಆದೇಶದಲ್ಲಿ ಹೇಳಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2022ನೇ ಸಾಲಿನ ಸಿಇಟಿಗೆ ಅರ್ಜಿಯನ್ನು ಆಹ್ವಾನಿಸಿದ್ದು, ಅದರಲ್ಲಿ ಯಾವುದೇ ಅಭ್ಯರ್ಥಿಯು ಭಾರತದ ಪ್ರಜೆಯಾಗದ ಹೊರತು ಸರಕಾರಿ ಸಾಮಾನ್ಯ ಕೋಟಾದ ಸೀಟುಗಳಿಗೆ ಪ್ರವೇಶ ಪಡೆಯಲು ಅರ್ಹರಾಗಿರುವುದಿಲ್ಲ ಎಂದು ಹೇಳಲಾಗಿದೆ. ಇದು ಕಾನೂನು ಬಾಹಿರ ಕ್ರಮ ಎಂದು ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.