ಬೆಂಗಳೂರು: ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಆ್ಯಂಬುಲೆನ್ಸ್ ನಿರ್ವಹಣಾ ವ್ಯವಸ್ಥೆ’ ಜಾರಿಗೆ ಕರೆಯಲಾಗಿದ್ದ 1,800 ಕೋಟಿ ರೂ. ಮೊತ್ತದ ಟೆಂಡರ್ ರದ್ದುಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ. ಕೆ. ಸುಧಾರಕರ್ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 8ರಿಂದ ರಾತ್ರಿ 10 ಗಂಟೆವರೆಗೆ ಅಪಘಾತ ನಡೆದ ಸ್ಥಳದಿಂದ ಆಸ್ಪತ್ರೆಗೆ ತಲುಪವರೆಗೆ ಆ್ಯಂಬುಲೆನ್ಸ್‌ಗಳಿಗೆ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲು ವ್ಯವಸ್ಥೆಯೊಂದನ್ನು ಜಾರಿ ಮಾಡಲು ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ಭಾರತ್ ಪುನರುತ್ಥಾನ ಟ್ರಸ್ಟ್ , ಆರೋಗ್ಯ ಸಚಿವರ ಸೂಚನೆ ಮೇರೆಗೆ ಟೆಂಡರ್ ರದ್ದುಪಡಿಸಲಾಗಿದೆ.
ಆದ್ದರಿಂದ ಮೂಲ ಅರ್ಜಿಯಲ್ಲಿ ಸಚಿವರನ್ನು ಪ್ರತಿವಾದಿಯನ್ನಾಗಿ ಸೇರಿಸಬೇಕು ಎಂದು ಸಲ್ಲಿಸಿದ್ದ ಮಧ್ಯಂತರ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರ ವಕೀಲರು, ಆಡಳಿತಾತ್ಮಕ ವಿಷಯಗಳಲ್ಲಿ ಮುಖ್ಯ ಕಾರ್ಯದರ್ಶಿಯವರು ಸರ್ಕಾರವನ್ನು ಪ್ರತಿನಿಧಿಸುತ್ತಾರೆ. ಈ ಅರ್ಜಿಯಲ್ಲಿ ಮುಖ್ಯ ಕಾರ್ಯದರ್ಶಿಯವರು ಈಗಾಗಲೇ ಪ್ರತಿವಾದಿಗಳಾಗಿದ್ದು, ಅವರಿಗೆ ನೋಟಿಸ್ ಜಾರಿಯಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಆದರೆ, ಸಚಿವರ ಸೂಚನೆ ಮೇರೆಗೆ ಟೆಂಡರ್ ರದ್ದುಪಡಿಸಲಾಗಿದೆ.
ಸಚಿವರನ್ನು ಪ್ರತಿವಾದಿಯನ್ನಾಗಿ ಸೇರಿಸಲು ಅರ್ಜಿದಾರರು ಮಧ್ಯಂತರ ಮನವಿ ಸಲ್ಲಿಸಿದ್ದಾರೆ. ವಿಚಾರಣೆ ಮುಂದುವರಿಸಲು ಸಚಿವರ ವಾದ ಕೇಳಬೇಕಾಗುತ್ತದೆ ಎಂದ ನ್ಯಾಯಪೀಠ, ಸಚಿವರನ್ನು ಪ್ರತಿವಾದಿಯನ್ನಾಗಿ ಸೇರಿಸಬೇಕು ಎಂಬ ಅರ್ಜಿದಾರರ ಮಧ್ಯಂತರ ಮನವಿಯನ್ನು ಪುರಸ್ಕರಿಸಿದರು. ಅದೇ ರೀತಿ ಸಚಿವರ ಪರವಾಗಿ ನೋಟಿಸ್ ಸ್ವೀಕರಿಸುವಂತೆ ಸರ್ಕಾರದ ಪರ ವಕೀಲರಿಗೆ ಸೂಚಿಸಿ, ವಿಚಾರಣೆಯನ್ನು ಮಾ.30ಕ್ಕೆ ಮುಂದೂಡಿತು. ಈ ಅವಧಿಯಲ್ಲಿ ಸಚಿವರು ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ನ್ಯಾಯಪೀಠ ಹೇಳಿತು.