ಬೆಂಗಳೂರು: ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ 21 ವರ್ಷಕ್ಕಿಂತ ಕಡಿಮೆ ವಯೋಮಾನದವರಿಗೂ ಮದ್ಯ ಮಾರಾಟ ಮಾಡುತ್ತಿದ್ದು ಈ ಸಂಬಂಧ ಸೂಕ್ತ ಮಾರ್ಗಸೂಚಿಗಳನ್ನು ರೂಪಿಸಿ ಕ್ರಮಕೈಗೊಳ್ಳಲು ರಾಜ್ಯಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ 17 ವರ್ಷದ ಯುವತಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಕುರಿತು ಬೆಂಗಳೂರಿನ ಲಯ ಸಜನ್ ಮರಿಯಂಡಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಗುರುವಾರ ನಡೆಸಿದ ಮುಖ್ಯನ್ಯಾಯಮೂರ್ತಿ ಎಸ್.ಕೆ ಮುಖರ್ಜಿ ಹಾಗೂ ಪಿ.ಎಸ್ ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ಪೀಠ, ರಾಜ್ಯಸರ್ಕಾರ, ಅಬಕಾರಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ.
ರಾಜ್ಯಸರ್ಕಾರ ಹಾಗೂ ಅಬಕಾರಿ ಇಲಾಖೆ ಸೇರಿದಂತೆ ಸಕ್ಷಮ ಪ್ರಾಧಿಕಾರಗಳು ಕರ್ನಾಟಕ ಅಬಕಾರಿ ಕಾಯಿದೆ (1965) ಕಟ್ಟುನಿಟ್ಟಾಗಿ ಜಾರಿಗೊಳಿಸಲು ವಿಫಲವಾಗಿವೆ. ಇದರಿಂದ 21 ವರ್ಷಕ್ಕಿಂತ ಕಡಿಮೆ ವಯೋಮಾನದವರಿಗೂ ಬಾರ್ ಅಂಡ್ ರೆಸ್ಟೋರೆಂಟ್‌ಗಳಲ್ಲಿ ಮದ್ಯ, ಸೇರಿದಂತೆ ಇನ್ನಿತರೆ ಆಲ್ಕೋಹಾಲಿಕ್ ಪದಾರ್ಥಗಳನ್ನು ಮಾರಾಟ ಮಾಡಲಾಗುತ್ತಿದೆ. ಇದರಿಂದ ಅಪ್ರಾಪ್ತರು ಮದ್ಯವ್ಯಸನಿಗಳಾಗುತ್ತಿರುವುದು ಗಣನೀಯವಾಗಿ ಏರಿಕೆಯಾಗುತ್ತಿದೆ.
ಅಲ್ಲದೆ ಬಾರ್ ಅಂಡ್ ರೆಸ್ಟೊರೆಂಟ್‌ಗಳಿಗೆ ಪರವಾನಿಗೆ ನೀಡುವಾಗ ಅಪ್ರಾಪ್ತರಿಗೆ ಮದ್ಯಮಾರಾಟ ಮಾಡುವುದನ್ನು ತಡೆಯುವ ಸಲುವಾಗಿ, ಮದ್ಯ ಕೊಂಡುಕೊಳ್ಳುವವರನ್ನು ಪರಿಶೀಲಿಸಿ ಮಾರಾಟ ಮಾಡಬೇಕು ಎಂಬ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡದಿರುವುದೇ ಇದಕ್ಕೆ ಕಾರಣವಾಗಿದೆ ಎಂದು ಅರ್ಜಿದಾರರು ವಿವರಿಸಿದ್ದಾರೆ.
ಈ ನಿಟ್ಟಿನಲ್ಲಿ ಮದ್ಯಮಾರಾಟ ಮಾಡುವ ವೇಳೆ ವಯಸ್ಸಿನ ಪ್ರಮಾಣ ಪರಿಶೀಲಿಸಲು ಸೂಕ್ತ ಮಾರ್ಗಸೂಚಿಗಳನ್ನು ರಚಿಸಲು ಕ್ರಮ ಕೈಗೊಳ್ಳಬೇಕು. ಅಲ್ಲದೆ ಕರ್ನಾಟಕ ಅಬಕಾರಿ ಕಾಯಿದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಹಾಗೂ ಇದುವರೆಗೂ ಕಾಯಿದೆ ಉಲ್ಲಂಘನೆಯಾದ ಸಂಬಂಧ 21 ವರ್ಷಕ್ಕಿಂತ ಕಡಿಮೆ ವಯೋಮಾನದವರ ವಿರುದ್ಧ ದಾಖಲಾದ ಪ್ರಕರಣಗಳ ವರದಿಯನ್ನು ಸಲ್ಲಿಸುವಂತೆ ರಾಜ್ಯಸರ್ಕಾರಕ್ಕೆ ನಿರ್ದೇಶಿಸುವಂತೆ ಅರ್ಜಿದಾರರು ಕೋರಿದ್ದಾರೆ.