ಬೆಂಗಳೂರು: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.
ಈ ವಿಚಾರವಾಗಿ ರಾಜ್ಯದ ಪ್ರಥಮ ತೃತೀಯ ಲಿಂಗಿ ವೈದ್ಯೆ ಡಾ| ತ್ರಿನೇತ್ರಾ ಹಲ್ದಾರ್ ಗುಮ್ಮರಾಜು ಸಲ್ಲಿಸಿರುವ ಅರ್ಜಿಯು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ, ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಹಾಗೂ ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಜೂ. 6ಕ್ಕೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ರೋಹನ್ ಕೊಠಾರಿ ವಾದ ಮಂಡಿಸಿ, ಸಾಮಾನ್ಯ ಹಾಸ್ಟೆಲ್‌ಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಸಾಕಷ್ಟು ಕಿರುಕುಳ ಎದುರಿಸುತ್ತಿದ್ದಾರೆ. ಇದೇ ಕಾರಣಕ್ಕೆ ಸಾಕಷ್ಟು ಮಂದಿ ಉನ್ನತ ಶಿಕ್ಷಣ ಪೂರೈಸದೆ ಅರ್ಧಕ್ಕೇ ವಿದ್ಯಾಭ್ಯಾಸ ಕೈಬಿಡುತ್ತಿದ್ದಾರೆ ಎಂದು ಕೋರ್ಟ್ ಗಮನಕ್ಕೆ ತಂದರು.
ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸುವುದಾಗಿ ಪಂಜಾಬ್ ವಿಶ್ವವಿದ್ಯಾಲಯ ಘೋಷಣೆ ಮಾಡಿದೆ. ಜತೆಗೆ, ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ (ಟಿಐಎಸ್‌ಎಸ್) ಸಹ ಲೈಂಗಿಕ ಅಲ್ಪಸಂಖ್ಯಾಕರಿಗೆ ಪ್ರತ್ಯೇಕ ವಿದ್ಯಾರ್ಥಿ ನಿಲಯ ವ್ಯವಸ್ಥೆ ಒದಗಿಸುವುದಾಗಿ ತಿಳಿಸಿದೆ. ಅದೇ ರೀತಿ ರಾಜ್ಯದಲ್ಲೂ ವ್ಯವಸ್ಥೆ ಕಲ್ಪಿಸಲು ಸರಕಾರಕ್ಕೆ ನಿರ್ದೇಶಿಸಬೇಕು. ಅದೇ ರೀತಿ ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಅವರೇ ಆಯ್ದುಕೊಂಡ ಲಿಂಗದ ಆಧಾರದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲು ನಿರಾಕರಿಸುವುದು ಸಂವಿಧಾನದ ಪರಿಚ್ಛೇದ 14, 15 ಹಾಗೂ 21ರ ಉಲ್ಲಂಘನೆಯಾಗಲಿದೆ. ಆದ್ದರಿಂದ, ಹಾಸ್ಟೆಲ್‌ಗಳ ಪ್ರವೇಶಾತಿ ಅರ್ಜಿಯಲ್ಲಿ ಪುರುಷ/ಸ್ತ್ರೀ ಲಿಂಗಗಳ ಜತೆಗೆ ತೃತೀಯ ಲಿಂಗಿಗಳಿಗೂ ಆಯ್ಕೆ ಕಲ್ಪಿಸಲು ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳಿಗೂ ಸುತ್ತೋಲೆ ಅಥವಾ ಆದೇಶ ಹೊರಡಿಸಲು ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.